ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ದುರಾಡಳಿತ, ಬದುಕಲು ಹರಸಾಹಸ : ಡಿ.ಕೆ. ಶಿವಕುಮಾರ್‌

Published 22 ಏಪ್ರಿಲ್ 2023, 16:23 IST
Last Updated 22 ಏಪ್ರಿಲ್ 2023, 16:23 IST
ಅಕ್ಷರ ಗಾತ್ರ

ಉಜಿರೆ: ‘ಬಿಜೆಪಿ  ಸರ್ಕಾರದ ಭ್ರಷ್ಟಾಚಾರ ಮತ್ತು ದುರಾಡಳಿತದಿಂದಾಗಿ ಜನರ ಆದಾಯ ಪಾತಾಳಕ್ಕೆ ಇಳಿದಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಜನಸಾಮಾನ್ಯರು ಬದುಕಲು ಹರಸಾಹಸ ಪಡುತ್ತಿದ್ದಾರೆ’  ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.

ಶನಿವಾರ ಉಜಿರೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರವಾಗಿ ಮತಯಾಚನೆ ಮಾಡಿ ಅವರು ಮಾತನಾಡಿದರು.

‘ಸರ್ವರಿಗೆ ಸಮಪಾಲು, ಸಮಬಾಳು ತತ್ವದ ನೆಲೆಯಲ್ಲಿ ಜನಸಾಮಾನ್ಯರ ಜೀವನ ಮಟ್ಟ ಸುಧಾರಿಸಲು ಹೊಸ ಯೋಜನೆಗಳನ್ನು ರೂಪಿಸಲಾಗುವುದು. ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿ, ಕರಾವಳಿ ಜಿಲ್ಲೆಗಳ ಪ್ರಗತಿಗೆ ಪ್ರತ್ಯೇಕ ಯೋಜನೆ ರೂಪಿಸಲಾಗುವುದು, ತುಳು ಭಾಷೆಯನ್ನು ಸಂವಿಧಾನದ ಎಂಟನೇ  ಪರಿಚ್ಛೇದಕ್ಕೆ ಸೇರಿಸಲು ಪ್ರಯತ್ನಿಸಲಾಗುವುದು, ವಿಧಾನಸಭಾ ಕ್ಷೇತ್ರಗಳಲ್ಲಿ ಉದ್ಯೋಗ ವಿನಿಮಯ ಕೇಂದ್ರ ಪ್ರಾರಂಭಿಸಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಹೇಳಿದರು.

‘ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 141  ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ ಇತಿಹಾಸವು ದೇಶದ ಇತಿಹಾಸವಾಗಿದೆ’ ಎಂದ ಅವರು, ‘ಪಕ್ಷದಲ್ಲಿ ಯಾವುದೇ  ಭಿನ್ನಾಭಿಪ್ರಾಯವಿಲ್ಲ. ಬದಲಾವಣೆ ದೃಷ್ಟಿಯಲ್ಲಿ ಬಿಜೆಪಿಯ ಕೆಲವು ನಾಯಕರು ಕಾಂಗ್ರೆಸ್‌ಗೆ ಬಂದಿದ್ದಾರೆ. ಕಾಂಗ್ರೆಸ್‌ನಿಂದ ಪಕ್ಷಾಂತರ ಮಾಡಿದವರ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ’ ಎಂದರು.

‘ಹಲವು ಸುತ್ತಿನ ಚರ್ಚೆ ಹಾಗೂ ಸಮೀಕ್ಷೆ ಬಳಿಕ ಹೊಸ ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರನ್ನು ಗೆಲ್ಲಿಸಿಬೇಕಿದೆ. ಮಾಜಿ ಸಚಿವ ಕೆ. ಗಂಗಾಧರ ಗೌಡ ಮತ್ತು ಮಾಜಿ ಶಾಸಕ ಕೆ. ವಸಂತ ಬಂಗೇರ  ಅವರು ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ನೀಡಿದ ಕೊಡುಗೆಯನ್ನು ಶ್ಲಾಘಿಸಿದರು.

ಸಭೆಗೂ ಮುನ್ನ ಧರ್ಮಸ್ಥಳದಲ್ಲಿ  ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾದರು. ಸಭೆಯ ನಂತರ ಶೃಂಗೇರಿಗೆ ಪ್ರಯಾಣ ಬೆಳೆಸಿದರು.

ರಕ್ಷಿತ್ ಶಿವರಾಂ ಸ್ವಾಗತಿಸಿದರು. ಶೈಲೇಶ್ ಕುಮಾರ್ ವಂದಿಸಿದರು. ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್, ಮಾಜಿ ಶಾಸಕ ಕೆ. ವಸಂತ ಬಂಗೇರ, ಮಂಜುನಾಥ ಭಂಡಾರಿ, ರಂಜನ್ ಜಿ. ಗೌಡ, ಮಾಜಿ ಸಚಿವ ಅಭಯಚಂದ್ರ ಜೈನ್, ಅಶೋಕ ರೈ ಪುತ್ತೂರು ಮತ್ತು ಮಮತಾ ಗಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT