ಭಾನುವಾರ, ಅಕ್ಟೋಬರ್ 25, 2020
24 °C
ಎಪಿಎಂಸಿಯ ನವೀಕೃತ ತರಕಾರಿ ಮಾರುಕಟ್ಟೆ ಉದ್ಘಾಟಿಸಿದ ಸದಾನಂದಗೌಡ

ಕೃಷಿ ಮಸೂದೆ ರೈತರ ಪ್ರಗತಿಗೆ ಪೂರಕ: ಡಿ.ವಿ.ಸದಾನಂದ ಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪುತ್ತೂರು: ಈ ದೇಶದ ಕೃಷಿ ಕ್ಷೇತ್ರವನ್ನು ಉನ್ನತೀಕರಿಸಲು ರೈತ ಪರ ಚಿಂತನೆ ನಡೆಸಿದ ಏಕೈಕ ಪ್ರಧಾನಿ ನರೇಂದ್ರ ಮೋದಿ. ರೈತರ ಬದುಕು ಹಸನಾಗಬೇಕು ಎಂಬ ಉದ್ದೇಶದಿಂದ ಕೃಷಿ ಕ್ಷೇತ್ರದ ಅಧ್ಯಯನ ನಡೆಸಿ, ರೈತರಿಗೆ ಅನುಕೂಲವಾಗಲಿರುವ ಕೃಷಿ ಮಸೂದೆಯನ್ನು ಮೋದಿ ಸರ್ಕಾರ ಜಾರಿ ಮಾಡಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು.

ಇಲ್ಲಿನ ಎಪಿಎಂಸಿ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಶನಿವಾರ ನಡೆದ ₹7.56 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ₹2.18 ಕೋಟಿಯ ನೂತನ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೊರೊನಾ ಸಂದರ್ಭದಲ್ಲಿಯೂ ಕೃಷಿ ಚಟುವಟಿಕೆಗೆ ತೊಂದರೆಯಾಗದ ರೀತಿಯಲ್ಲಿ ಕೇಂದ್ರ ಸರ್ಕಾರ ರಾಜ್ಯಗಳಿಗೆ ಪೂರಕ ಮಾರ್ಗಸೂಚಿಗಳನ್ನು ಕಳುಹಿಸಿತ್ತು. ಈ ಮೂಲಕ ರೈತನ ಬೆಳೆ ಮಾರಾಟಕ್ಕೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಕೇಂದ್ರ ಸರ್ಕಾರ ಕೆಲಸ ಮಾಡಿದೆ ಎಂದರು.

ಭಾರತವು ಆಹಾರ ಉತ್ಪಾದನೆಯಲ್ಲಿ ವಿಶ್ವದಲ್ಲಿಯೇ ಎರಡನೇ ಸ್ಥಾನಕ್ಕೆ ಬಂದು ತಲುಪಿದೆ. 60 ರಾಷ್ಟ್ರಗಳಿಗೆ ಆಹಾರ ಉತ್ಪನ್ನಗಳನ್ನು ರಫ್ತು ಮಾಡುವ ಕೃಷಿ ಸಮೃದ್ಧ ರಾಷ್ಟ್ರವಾಗಿ ಭಾರತ ತಲೆ ಎತ್ತಿ ನಿಂತಿದೆ. ಆಹಾರ ಕೊರತೆಯಿಂದ ಮುಕ್ತಗೊಂಡಿರುವ ಭಾರತವು, ಪ್ರಧಾನಿ ಮೋದಿ ಅವರ ಚಿಂತನೆಯ ಫಲವಾಗಿ ಕೃಷಿ ಕ್ಷೇತ್ರದಲ್ಲಿ ಇನ್ನಷ್ಟು ಬಲಿಷ್ಠವಾಗಲಿದೆ ಎಂದು ತಿಳಿಸಿದರು.

ಎಪಿಎಂಸಿ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಕಾಂಕ್ರೀಟ್ ರಸ್ತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ಶಾಸಕ ಎಸ್. ಅಂಗಾರ, ಪುತ್ತೂರು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ರಾಧಾಕೃಷ್ಣ ಬೋರ್ಕರ್, ಕಡಬ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಪುತ್ತೂರು ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿದರು.

ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಸ್ವಾಗತಿಸಿದರು. ಉಪಾಧ್ಯಕ್ಷ ಮಂಜುನಾಥ್ ಎನ್.ಎಸ್. ವಂದಿಸಿದರು. ರಾಕೇಶ್ ರೈ ಕಡೆಂಜಿ ನಿರೂಪಿಸಿದರು.

ಕಾಂಗ್ರೆಸ್‌ ಮಾಡದ ಕೆಲಸ ಬಿಜೆಪಿಯಿಂದ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಾಗ ಕಾಂಗ್ರೆಸ್ಸಿಗರು ಟೀಕಿಸುತ್ತಿದ್ದಾರೆ. ಕಾಂಗ್ರೆಸ್ ಮಾಡದ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಿದೆ ಎಂದು ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಎಸ್‌.ಟಿ. ಸೋಮಶೇಖರ್‌ ಹೇಳಿದರು.

1 ಸಾವಿರ ಟನ್ ಸಾಮರ್ಥ್ಯದ ಗೋದಾಮು ಉದ್ಘಾಟಿಸಿ ಮಾತನಾಡಿದ ಅವರು, ‘2018ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರೈತರ ಶೋಷಣೆ ತಡೆಯುವುದಾಗಿ ಹೇಳಿತ್ತು. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಈ ಕೆಲಸವನ್ನು ಮಾಡಲೇ ಇಲ್ಲ. ಈಗ ಬಿಜೆಪಿ ಸರ್ಕಾರದ ಕಾರ್ಯವನ್ನು ಟೀಕಿಸುವ ಮೂಲಕ ತನ್ನ ದ್ವಂದ್ವ ನಿಲುವನ್ನು ಬಹಿರಂಗಪಡಿಸಿದೆ’ ಎಂದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.