ಶನಿವಾರ, ಅಕ್ಟೋಬರ್ 8, 2022
21 °C
ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಅಧಿಕಾರಿಗಳಿಗೆ ಶಾಸಕರ ಸೂಚನೆ

ಅತಿಕ್ರಮಣ ತೆರವುಗೊಳಿಸಿ: ಶಾಸಕ ಸಂಜೀವ ಮಠಂದೂರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪುತ್ತೂರು: ರಸ್ತೆ ಬದಿಯಲ್ಲಿ ಬೀಳುವ ಹಂತದಲ್ಲಿರುವ ಮರ ಹಾಗೂ ಕುಸಿಯುವ ಅಪಾಯದಲ್ಲಿರುವ ಧರೆಯನ್ನು ತೆರವು ಮಾಡಬೇಕು ಎಂದು ಶಾಸಕ ಸಂಜೀವ ಮಠಂದೂರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪುತ್ತೂರು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಕೆಡಿಪಿ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಪಾಯಕಾರಿ ಮರಗಳನ್ನು ಅರಣ್ಯ ಇಲಾಖೆ ಗುರುತಿಸಬೇಕು. ವಿದ್ಯುತ್ ತಂತಿಗೆ ತೊಡಕಾಗುವ ಮರಗಳನ್ನು ಮೆಸ್ಕಾಂ ತೆರವುಗೊಳಿಸಬೇಕು ಎಂದರು.

ಪುತ್ತೂರು- ಉಪ್ಪಿನಂಗಡಿ ರಸ್ತೆ ಕಾಮಗಾರಿ ಸಂದರ್ಭ ಕೋಡಿಂಬಾಡಿ ಯಲ್ಲಿ ಜಲಸಿರಿ ಪೈಪ್‌ಲೈನ್‌ಗೆ ಸಮಸ್ಯೆಯಾಗಿದೆ. ಲೋಕೋಪಯೋಗಿ ಇಲಾಖೆ, ನಗರಸಭೆ ಮತ್ತು ಜಲಸಿರಿ ಯೋಜನೆಯ ಅಧಿಕಾರಿಗಳು ಸಮಸ್ಯೆ ಬಗೆಹರಿಸಬೇಕು ಎಂದರು.

ರಸ್ತೆ ಅತಿಕ್ರಮಗಳನ್ನು ಮುಲಾಜಿಲ್ಲದೇ ತೆರವುಗೊಳಿಸಬೇಕು. ರಸ್ತೆ ಇತ್ಯಾದಿ ಸಾರ್ವಜನಿಕ ಆಸ್ತಿಯನ್ನು ಅತಿಕ್ರಮಿಸಿಕೊಂಡು, ಸಮರ್ಪಕ ಸೆಟ್‌ಬ್ಯಾಕ್ ಇಲ್ಲದೇ ನಿರ್ಮಿಸಿದ ಕಟ್ಟಡಗಳಿಗೆ ಅನುಮತಿ ನೀಡಿದ ಅಧಿಕಾರಿಗಳ ವಿರುದ್ಧ  ಕ್ರಮಕೈಗೊಳ್ಳಿ ಎಂದು ಅವರು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗೆ ಸೂಚಿಸಿದರು.

ಮುಂದಿನ ಕೆಡಿಪಿ ಸಭೆಯ ಮೊದಲು ನಗರದ ಎಪಿಎಂಸಿ ರಸ್ತೆಯನ್ನು ನಗರಸಭೆಗೆ ಹಸ್ತಾಂತರ ಮಾಡಬೇಕು. ಇಲ್ಲಿನ ರಸ್ತೆ ಅತಿಕ್ರಮಣಗಳನ್ನು ತೆರವುಗೊಳಿಸಬೇಕು. ತಹಶೀಲ್ದಾರ್ ಅವರೇ ಎಪಿಎಂಸಿ ಆಡಳಿತಾಧಿಕಾರಿ ಆಗಿದ್ದು, ಸಮಸ್ಯೆ ಬಗೆಹರಿಸಿ ಎಂದರು.

ನಿಡ್ಪಳ್ಳಿ ಗ್ರಾಮದ ಸಾರಕೂಟೇಲು ಸೇತುವೆಯನ್ನು ಮೂರು ವಾರದೊಳಗೆ ಪೂರ್ಣಗೊಳಿಸಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡುವುದಾಗಿ ಲೋಕೋಪಯೋಗಿ ಇಲಾಖೆಯ ಅಧಿಕಾರಿ ರಾಜಾರಾಮ್ ಶಾಸಕರಿಗೆ ತಿಳಿಸಿದರು.
ಮಳೆ ನಿಂತ ತಕ್ಷಣವೇ ರಸ್ತೆ ಗುಂಡಿಗಳನ್ನು ಮುಚ್ಚುವುದಾಗಿ ಅಧಿಕಾರಿಗಳು ಉತ್ತರಿಸಿದರು.

ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಸಂಧ್ಯಾ, ಕಾರ್ಯ ನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ತಹಶೀಲ್ದಾರ್ ನಿಸರ್ಗಪ್ರಿಯ, ಡಿವೈಎಸ್ಪಿ ವೀರಯ್ಯ ಹಿರೇಮಠ, ಪೌರಾಯುಕ್ತ ಮಧು ಎಸ್. ಮನೋಹರ್ ಇದ್ದರು.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.