ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿ ಪ್ರತಿದಿನವೂ ವಿನೂತನ: ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್

ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್
Last Updated 30 ಜುಲೈ 2020, 16:20 IST
ಅಕ್ಷರ ಗಾತ್ರ

ಮಂಗಳೂರು: ‘ಜಿಲ್ಲೆಯಲ್ಲಿ ಕರ್ತವ್ಯದಲ್ಲಿದ್ದಾಗ ಪ್ರತಿದಿನವೂ ವಿನೂತನವಾಗಿತ್ತು. ಒಂದಲ್ಲೊಂದು ಸಮಸ್ಯೆ, ಸವಾಲು, ಘಟನೆಗಳು ಪ್ರತಿ ದಿನವೂ ಬರುತ್ತಿದ್ದವು. ಎಲ್ಲರ ಸಹಕಾರದಿಂದ ಇವುಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಪ್ರಯತ್ನಿಸಿದ್ದೇನೆ’ ಎಂದು ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಹೇಳಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

‘ಕೋವಿಡ್ ನಿರ್ವಹಣೆಯು ದೊಡ್ಡ ಸವಾಲಾಗಿತ್ತು. ಇದರೊಂದಿಗೆ ಸಾರ್ವಜನಿಕರ ಸಮಸ್ಯೆಗಳಿಗೂ ಪರಿಹಾರ ನೀಡುವ ಹೊಣೆಯೂ ಇತ್ತು. ಇದರಲ್ಲಿ ಜಿಲ್ಲೆ ಸಾಕಷ್ಟು ಪ್ರಗತಿ ಕಂಡಿದೆ. ಕೋವಿಡ್ ವಿರುದ್ಧ ಇನ್ನಷ್ಟು ಹೋರಾಡಬೇಕಾದ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಮಾತನಾಡಿ, ‘ಸಿಂಧೂ ರೂಪೇಶ್ ಅವರು ಜಿಲ್ಲಾಧಿಕಾರಿಯಾಗಿ 11 ತಿಂಗಳ ಸೇವೆಯಲ್ಲಿ ಸಾಕಷ್ಟು ಸವಾಲುಗಳು ಎದುರಾಗಿವೆ. ನೆರೆ, ಕೋವಿಡ್ ನಿರ್ವಹಣೆ, ವಲಸೆ ಕಾರ್ಮಿಕರ ರವಾನೆ, ವಿದೇಶಿ ಪ್ರಯಾಣಿಕರ ಸಂಚಾರ ಮತ್ತಿತರ ಘಟನೆಗಳಲ್ಲಿ ಸೂಕ್ತ ಸಂದರ್ಭದಲ್ಲಿ ನಿರ್ಣಾಯಕ ನಿರ್ಧಾರವನ್ನು ಅವರು ಕೈಗೊಂಡಿದ್ದಾರೆ. ಅಬ್ಬಕ್ಕ ಉತ್ಸವ, ಕರಾವಳಿ ಉತ್ಸವಗಳಲ್ಲಿ ಹಣಕಾಸು ಶಿಸ್ತು ಜಾರಿಗೆ ತಂದಿದ್ದಾರೆ’ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ನೂತನ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ‘ಸವಾಲುಗಳು ಇರುವ ಜಿಲ್ಲೆಗಳಲ್ಲಿ ಕೆಲಸ ಮಾಡುವುದು ಉತ್ತಮ ಅನುಭವ ನೀಡುತ್ತದೆ. ಕೋವಿಡ್ ಸಂದರ್ಭದಲ್ಲಿ ಕುಟುಂಬದಿಂದಲೂ ದೂರ ಇದ್ದು, ಕರ್ತವ್ಯ ನಿರ್ವಹಿಸಿದ ಸಿಂಧೂ ರೂಪೇಶ್ ಅವರ ಕರ್ತವ್ಯ ಮಾದರಿಯಾಗಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸೆಲ್ವಮಣಿ, ಮೆಸ್ಕಾಂ ಎಂಡಿ ಸ್ನೇಹಲ್, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಡಿಸಿಪಿ ಅರುಣಾಂಗ್ಷು ಗಿರಿ ಮಾತನಾಡಿದರು. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT