ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮೂಹಿಕ ಅತ್ಯಾಚಾರ: ಎನ್‍ಎಸ್‌ಯುಐ ಖಂಡನೆ

ಪುತ್ತೂರಿನ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ನಗರದಲ್ಲಿ ಪ್ರತಿಭಟನೆ
Last Updated 4 ಜುಲೈ 2019, 20:41 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಪುತ್ತೂರಿನ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಖಂಡಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‍ಎಸ್‌ಯುಐ) ಜಿಲ್ಲಾ ಸಮಿತಿ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ತಡೆ ತಡೆ ನಡೆಸಿದ ಪ್ರತಿಭಟನಾಕಾರರು ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ನಡೆಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದರು. ಬಳಿಕ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಎನ್‍ಎಸ್‌ಯುಐ ರಾಜ್ಯ ಘಟಕದ ಸಂಚಾಲಕ ಕುಂದಲಗುರ್ಕಿ ಮುನೀಂದ್ರ, ‘ಪುತ್ತೂರಿನಲ್ಲಿ ವಿದ್ಯಾರ್ಥಿಗಳು ಮಾದಕ ಪದಾರ್ಥಗಳನ್ನು ಸೇವಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವುದು ಇಡೀ ರಾಜ್ಯ ಜನತೆ ತಲೆ ತಗ್ಗಿಸುವ ಕೃತ್ಯವಾಗಿದೆ. ಗಾಂಜಾ, ಮಾದಕ ಪದಾರ್ಥಗಳ ಸೇವನೆಯಿಂದ ರಾಜ್ಯದಲ್ಲಿ ಅಪರಾಧ ಕೃತ್ಯಗಳು ಹೆಚ್ಚುತ್ತಿದ್ದು, ಇದಕ್ಕೆ ಸರ್ಕಾರ ಕಡಿವಾಣ ಹಾಕಬೇಕಿದೆ’ ಎಂದು ಹೇಳಿದರು.

‘ಇತ್ತಿಚೆಗೆ ದೇರಳಕಟ್ಟೆಯಲ್ಲಿ ನಡೆದ ಕೊಲೆ ಯತ್ನ ಪ್ರಕರಣದಲ್ಲೂ ಆರೋಪಿ ಮಾದಕ ಪದಾರ್ಥ ಸೇವಿಸಿದ್ದು ಪತ್ತೆಯಾಗಿದೆ. ಬೆಳ್ತಂಗಡಿ ಕಾಲೇಜಿನಲ್ಲಿ ಎಬಿವಿಪಿ ಗೂಂಡಾಗಳು ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದರು. ಈ ಘಟನೆಯ ಆರೋಪಿಗಳು ಎಬಿವಿಪಿ ಸಂಘಟನೆಗೆ ಸೇರಿದ್ದಾರೆ. ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.

‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರಗ್ಸ್‌, ಗಾಂಜಾ, ಅಫಿಮು ಬಳಕೆ ಹೆಚ್ಚುತ್ತಿರುವುದರಿಂದ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿವೆ. ವಿಶೇಷವಾಗಿ ವಿದ್ಯಾರ್ಥಿಗಳು, ಯುವಜನರು ಮಾದಕ ಪದಾರ್ಥಗಳ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇಂತಹ ಅಕ್ರಮ ದಂಧೆಗೆ ಕಡಿವಾಣ ಹಾಕಬೇಕಾದ ಜನಪ್ರತಿನಿಧಿಗಳು ತುಟಿ ಬಿಚ್ಚುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಬಿಜೆಪಿ ನಾಯಕಿ ಸುನೀತಾ ಸಿಂಗ್ ಮುಸ್ಲಿಂ ಹೆಣ್ಣು ಮಕ್ಕಳನ್ನು ಅತ್ಯಾಚಾರ ಮಾಡಿ ಎಂದು ಸಂಘ ಪರಿವಾರದ ಪುರುಷರಿಗೆ ಕರೆ ನೀಡಿದ ನಾಲ್ಕೇ ದಿನಗಳಲ್ಲಿ ಇಂತಹದೊಂದು ಪ್ರಕರಣ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಲೇ ಬೇಕು. ಮಾದಕ ವಸ್ತುಗಳ ಮಾರಾಟ ತಡೆಗಟ್ಟಲು ಜಿಲ್ಲಾಡಳಿತ ಸೂಕ್ತಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಎನ್‍ಎಸ್‌ಯುಐ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ರಾಜಶೇಖರ್, ಉಪಾಧ್ಯಕ್ಷರಾದ ಶಾಯೀದ್ ಅಬ್ಬಸ್, ವೀಣಾ, ಮುಖಂಡರಾದ ಲಕ್ಷ್ಮೀನರಸಿಂಹ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT