ಶುಕ್ರವಾರ, ಡಿಸೆಂಬರ್ 3, 2021
26 °C

2ನೇ ಡೋಸ್ ಲಸಿಕೆಗೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ‘ದೇಶದಲ್ಲಿ ಕೋವಿಡ್-19 ಲಸಿಕೆ ನೀಡಿಕೆ ಪ್ರಮಾಣ 100 ಕೋಟಿ ಡೋಸ್‌ ದಾಟಿದ ಹಿನ್ನೆಲೆಯಲ್ಲಿ ಅ.22ರಂದು ಜಿಲ್ಲೆಯಲ್ಲಿ ಆಯೋಜಿಸಿರುವ ಲಸಿಕಾ ಮೇಳದಲ್ಲಿ ಎರಡನೇ ಡೋಸ್‍ಗೆ ಹೆಚ್ಚಿನ ಪ್ರಾಮುಖ್ಯ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಲಸಿಕೆ ಪ್ರಗತಿಗೆ ಸಂಬಂಧಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಅ.22ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 1.20 ಲಕ್ಷ ಡೋಸ್ ಲಸಿಕೆ ನೀಡುವ ಗುರಿ ನಿಗದಿಯಾಗಿದೆ. ಎರಡನೇ ಡೋಸ್ ಪಡೆಯುವವರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಬೇಕು. 18 ವರ್ಷಕ್ಕಿಂತ ಮೇಲಿನ ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಲಸಿಕೆ ನೀಡುವ ಮೂಲಕ ಲಸಿಕಾ ಮೇಳವನ್ನು ಯಶಸ್ವಿಯಾಗಿಸಬೇಕು ಎಂದರು.

ಮಂಗಳೂರಿಗೆ 65 ಸಾವಿರದಿಂದ 67 ಸಾವಿರ, ಬಂಟ್ವಾಳ ತಾಲ್ಲೂಕಿಗೆ 15 ಸಾವಿರ, ಬೆಳ್ತಂಗಡಿ ತಾಲ್ಲೂಕಿಗೆ 18 ಸಾವಿರ, ಪುತ್ತೂರು ತಾಲ್ಲೂಕಿಗೆ 14 ಸಾವಿರ, ಸುಳ್ಯ ತಾಲ್ಲೂಕಿಗೆ 6,000 ಲಸಿಕೆಯ ಗುರಿ ನಿಗದಿಪಡಿಸಲಾಗಿದೆ.  ಅಂಗನವಾಡಿ, ಆಶಾ ಹಾಗೂ ಆರೋಗ್ಯ ಕಾರ್ಯಕರ್ತೆಯರು ಪ್ರತಿ ಮನೆಗೆ ಭೇಟಿ ನೀಡಿ ಕೋವಿಡ್‍ ಮೊದಲ ಡೋಸ್ ಲಸಿಕೆ ಪಡೆದಿರುವ ಬಗ್ಗೆ ಖಾತ್ರಿಪಡಿಸಿಕೊಂಡು ಎರಡನೇ ಲಸಿಕೆ ಪಡೆಯದವರಿಗೆ, ಕೂಡಲೇ ಲಸಿಕೆ ಪಡೆಯುವ ಕುರಿತು ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿಗಳ ಪೋಷಕರು ಲಸಿಕೆ ಪಡೆದಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸದಾಶಿವ ಶ್ಯಾನುಭೋಗ್, ತಾಲ್ಲೂಕು ಆರೋಗ್ಯ ಅಧಿಕಾರಿಗಳು ಇದ್ದರು.

‘ಕರೆ ಮಾಡಿ’

‘ಜಿಲ್ಲೆಯ ಎಲ್ಲ ತಾಲ್ಲೂಕುಗಳ ತಹಶೀಲ್ದಾರರು, ಆರೋಗ್ಯಾಧಿಕಾರಿಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಹಾಗೂ ಇತರ ಸಂಬಂಧಪಟ್ಟ ಅಧಿಕಾರಿಗಳು ಜಿಲ್ಲೆಯಲ್ಲಿ ಎರಡನೇ ಡೋಸ್ ಲಸಿಕೆ ಪಡೆಯಲು ಬಾಕಿ ಉಳಿದವರ ಪಟ್ಟಿ ಮಾಡಬೇಕು. ಕಾಲ್‌ ಸೆಂಟರ್‌ನಿಂದ ಅವರಿಗೆ ದೂರವಾಣಿ ಕರೆ ಮಾಡಿ ಈ ಬಗ್ಗೆ ಮಾಹಿತಿ ನೀಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹೇಳಿದರು.

ಲಸಿಕಾ ಮೇಳ:

ಅ.22ರಂದು ಜಿಲ್ಲೆಯಾದ್ಯಂತ ಕೋವಿಡ್ ಲಸಿಕಾ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲ ಸರ್ಕಾರಿ ಆರೋಗ್ಯ ಸಂಸ್ಥೆಗಳು ಹಾಗೂ ಆ ಸಂಸ್ಥೆಗಳ ವ್ಯಾಪ್ತಿಯ 400ಕ್ಕೂ ಅಧಿಕ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು. ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಎರಡೂ ಲಸಿಕೆಗಳು ಲಭ್ಯವಿದ್ದು, ಈವರೆಗೆ ಲಸಿಕೆ ಪಡೆಯದವರು ಮೊದಲನೇ ಡೋಸ್ ಹಾಗೂ ಎರಡನೇ ಡೋಸ್ ಪಡೆಯಬೇಕಾದವರು ಲಸಿಕೆ ಪಡೆದು ಮೇಳವನ್ನು ಯಶಸ್ವಿಗೊಳಿಸಬೇಕು. ಕೋವಿಶೀಲ್ಡ್ ಲಸಿಕೆಯ ಎರಡನೇ ಡೋಸ್‍ ಅಂತರ 84 ದಿನ ಹಾಗೂ ಕೋವಾಕ್ಸಿನ್ ಲಸಿಕೆಯ ಎರಡನೇ ಡೋಸ್‍ ಅಂತರ 28 ದಿನಗಳಾಗಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು