ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಕೃತಿ, ಯೋಗ ಶ್ರೇಷ್ಠ ಶುಶ್ರೂಷಾ ವಿಧಾನ: ಗೋವಾ ಸಿಎಂ ಪ್ರಮೋದ್ ಸಾವಂತ್

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿನ ಪದವಿ ಪ್ರದಾನ ಸಮಾರಂಭ
Last Updated 8 ಅಕ್ಟೋಬರ್ 2022, 14:56 IST
ಅಕ್ಷರ ಗಾತ್ರ

ಉಜಿರೆ: ‘ಆರೋಗ್ಯ ಭಾಗ್ಯ ಕಾಪಾಡಲು ಸಾವಿರಾರು ವರ್ಷಗಳಿಂದ ಭಾರತದಲ್ಲಿ ಋಷಿ-ಮುನಿಗಳು ಪ್ರಶಾಂತ ಪ್ರಕೃತಿಯ ಮಡಿಲಲ್ಲಿ ಬಳಸುತ್ತಿದ್ದ ಪ್ರಕೃತಿ ಚಿಕಿತ್ಸಾ ಪದ್ಧತಿ ಮತ್ತು ಯೋಗ ವಿಜ್ಞಾನವು ವಿಶ್ವದಲ್ಲೇ ಅತ್ಯಂತ ಜನಪ್ರಿಯ ಹಾಗೂ ಶ್ರೇಷ್ಠ ಶುಶ್ರೂಷಾ ವಿಧಾನ’ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು.

ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಶನಿವಾರ ಉಜಿರೆಯ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿನ 230 ಪದವೀಧರರಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು.

‘ಪ್ರಕೃತಿಯಲ್ಲಿರುವ ಪಂಚಭೂತಗಳನ್ನು ಬಳಸಿ ಪ್ರಕೃತಿ ಚಿಕಿತ್ಸಾ ಪದ್ಧತಿಯಲ್ಲಿ ರೋಗನಿರೋಧಕ ಶಕ್ತಿಯನ್ನು ವೃದ್ಧಿಸಲಾಗುತ್ತದೆ. ಆಧುನಿಕ ಆಹಾರ ಸೇವನಾ ವಿಧಾನ, ಸದಾ ಒತ್ತಡ, ಭಯ, ಆತಂಕ ಮತ್ತು ಗಡಿಬಿಡಿಯ ಜೀವನ ಶೈಲಿ ಹಾಗೂ ಸಕಾಲದಲ್ಲಿ ಊಟ, ನಿದ್ರೆ, ವಿಶ್ರಾಂತಿ ಮಾಡದಿರುವುದು ಮೊದಲಾದ ಹತ್ತು-ಹಲವು ಕಾರಣಗಳಿಂದ ಪಂಚೇಂದ್ರೀಯಗಳ ನಿಯಂತ್ರಣವಿಲ್ಲದೆ ಎಲ್ಲರೂ ಅನೇಕ ರೋಗಗಳಿಗೆ ಬಲಿಯಾಗುತ್ತಾರೆ’ ಎಂದರು.

‘ಪ್ರಧಾನಿ ನರೇಂದ್ರ ಮೋದಿಯವರ ದಕ್ಷ ನೇತೃತ್ವದಲ್ಲಿ ಪ್ರಕೃತಿ ಚಿಕಿತ್ಸಾ ವಿಧಾನ ಮತ್ತು ಯೋಗಾಭ್ಯಾಸ ಭಾರತಕ್ಕೆ ವಿಶ್ವಗುರುವಿನ ಮಾನ್ಯತೆ ದೊರಕಿದೆ. ವಿಶ್ವದೆಲ್ಲೆಡೆ ಜೂನ್ 21 ವಿಶ್ವ ಯೋಗ ದಿನಾಚರಣೆ ಮಾಡುತ್ತಿದ್ದೇವೆ. ಮಹಾತ್ಮಾ ಗಾಂಧಿ ಕೂಡಾ ಪ್ರಕೃತಿ ಚಿಕಿತ್ಸಾ ವಿಧಾನ ಮತ್ತು ಯೋಗಾಭ್ಯಾಸ ಬಳಸುತ್ತಿದ್ದರು. ನಾವು ಎಷ್ಟು ವರ್ಷ ಬದುಕುತ್ತೇವೆ ಅನ್ನುವುದಕ್ಕಿಂತ ಎಷ್ಟು ಆರೋಗ್ಯವಂತರಾಗಿ ಬದುಕುತ್ತೇವೆ ಎಂಬುದು ಮುಖ್ಯ’ ಎಂದು ಹೇಳಿದರು.

‘ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದ ಬಗ್ಗೆ ಜನರಿಗೆ ವಿಶ್ವಾಸ ಮತ್ತು ಗೌರವ ಬರುವಂತೆ ನೂತನ ಪದವೀಧರರು ಪ್ರಯತ್ನಿಸಬೇಕು. ಸದಾ ಪ್ರಶ್ನಿಸುವ ಮನೋಭಾವ ಬೆಳೆಸಿಕೊಂಡು ಸಂಶೋಧನೆಗೆ ಹೆಚ್ಚಿನ ಒತ್ತು ನೀಡಬೇಕು. ಉತ್ತಮ ಸಂವಹನ ಕಲೆಯನ್ನು ಬೆಳೆಸಿಕೊಂಡು ತಮ್ಮಲ್ಲಿ ಬಂದವರಿಗೆ ಆಪ್ತ ಸಮಾಲೋಚನೆ ಮತ್ತು ಆಪ್ತ ಸಲಹೆಯೊಂದಿಗೆ ಈ ಪ್ರಾಚೀನ ಪದ್ಧತಿ ಬಗ್ಗೆ ವಿಶ್ವಾಸ, ನಂಬಿಕೆ ಮತ್ತು ಗೌರವ ಮೂಡಿವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಪದವೀಧರರಿಗೆ ಪ್ರತಿಜ್ಞಾವಿಧಿ ಬೋಧಿಸಿದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಕೆ. ರಮೇಶ್ ಮಾತನಾಡಿ, ‘ಸಂಶೋಧನೆ ಮತ್ತು ದಾಖಲಾತಿಗೆ ಹೆಚ್ಚಿನ ಒತ್ತು ನೀಡಿ, ನೂತನ ಪದವೀಧರರು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ವೈದ್ಯ ವೃತ್ತಿ ಪವಿತ್ರವಾಗಿದ್ದು ರೋಗಿಗಳ ಸೇವೆ ಮಾಡಬೇಕು. ಅಲೋಪತಿಗೆ ಕೇವಲ 200 ವರ್ಷಗಳ ಇತಿಹಾಸವಿದ್ದರೆ ಪ್ರಕೃತಿ ಚಿಕಿತ್ಸೆಗೆ ಸಾವಿರಾರು ವರ್ಷಗಳ ಹಿನ್ನೆಲೆ ಇದ್ದು, ಇಂದು ವಿಶ್ವದೆಲ್ಲೆಡೆ ಜನಪ್ರಿಯವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ, ‘ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ಸಕಾಲದಲ್ಲಿ ಹಿತ-ಮಿತ ಆಹಾರ ಸೇವನೆಯಿಂದ ಆರೋಗ್ಯ ಭಾಗ್ಯ ಹೊಂದಬಹುದು. ಧರ್ಮಸ್ಥಳದ ವತಿಯಿಂದ ಬೆಂಗಳೂರು, ಪರೀಕಾ (ಮಣಿಪಾಲದ ಬಳಿ) ಮತ್ತು ಧರ್ಮಸ್ಥಳದಲ್ಲಿ ಮೂರು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಗಳಿದ್ದು, ಸದಾ ಸಾಧಕರಿಂದ ತುಂಬಿರುತ್ತದೆ. ಹಾಸನ, ಉಡುಪಿ ಮತ್ತು ಬೆಂಗಳೂರಿನಲ್ಲಿರುವ ಆಯುರ್ವೇದ ಆಸ್ಪತ್ರೆಗಳಿಗೂ ಒಳ್ಳೆಯ ಪ್ರತಿಕ್ರಿಯೆ ದೊರಕುತ್ತಿದೆ. ಭಾರತದ ಪ್ರಾಚೀನ ಚಿಕಿತ್ಸಾ ಪದ್ಧತಿ ಬಗ್ಗೆ ಜನರಿಗಿರುವ ವಿಶ್ವಾಸ ಮತ್ತು ಗೌರವಕ್ಕೆ ಇದೇ ಸಾಕ್ಷಿಯಾಗಿದೆ ಎಂದರು.

ಹೇಮಾವತಿ ವಿ. ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ ಶೆಟ್ಟಿ ಸ್ವಾಗತಿಸಿದರು. ಜಲಚಿಕಿತ್ಸಾ ವಿಭಾಗದ ಡೀನ್ ಡಾ.ಸುಜಾತಾ ಧನ್ಯವಾದವಿತ್ತರು. ಡಾ.ಜೋಸ್ನಾ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT