ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯಪಾಲರಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಮಂಜುನಾಥ ಭಂಡಾರಿ

Published : 18 ಆಗಸ್ಟ್ 2024, 6:11 IST
Last Updated : 18 ಆಗಸ್ಟ್ 2024, 6:11 IST
ಫಾಲೋ ಮಾಡಿ
Comments

ಮಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲ ಥಾವರಚಂದ್ ಗೆಹಲೋತ್‌ ಅವರು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ. ಇದು ರಾಜಕೀಯ ಪ್ರೇರಿತ ಕ್ರಮ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ– ಹಾಗೂ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ರಾಜಕೀಯ ದ್ವೇಷ ತೀರಿಸಿಕೊಳ್ಳಲು ಈ ರೀತಿ ಸಂಚು ರೂಪಿಸಿದ್ದಾರೆ. ರಾಜ್ಯಪಾಲರು ಅಮಿತ್ ಶಾ ಆಜ್ಞಾನುವರ್ತಿಯಾಗಿ ನಡೆದುಕೊಂಡಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಜನಪ್ರಿಯತೆಯನ್ನು ಅರಗಿಸಿಕೊಳ್ಳಲು ಬಿಜೆಪಿಗೆ ಸಾಧ್ಯವಾಗಿಲ್ಲ. ಅದಕ್ಕಾಗಿ ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ’ ಎಂದು ಆರೋಪಿಸಿದರು.

‘ನಮ್ಮ ರಾಜ್ಯದಲ್ಲೂ ಕಾಂಗ್ರೆಸ್‌ ನೇತೃತ್ವದ ಸರ್ಕಾರವನ್ನು ದುರ್ಬಲಗೊಳಿಸಲು ಸಿದ್ದರಾಮಯ್ಯ ಅವರ ವರ್ಚಸ್ಸಿಗೆ ಧಕ್ಕೆ ಉಂಟು ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ’ ಎಂದರು. 

ರಾಜ್ಯಪಾಲರ ನಡೆಯನ್ನು ಖಂಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್‌, ‘ರಾಜ್ಯ ಸರ್ಕಾರಗಳು ತನ್ನ ಕೈಗೊಂಬೆಯಾಗಿರಬೇಕು ‌ಎಂದು ಕೇಂದ್ರ ಸರ್ಕಾರ ಬಯಸುತ್ತದೆ’ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ ಆರ್‌. ಪೂಜಾರಿ, ‘ಜನರ ವಿಶ್ವಾಸವನ್ನು ಗೆದ್ದು ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ ಎಂಬುದನ್ನು ಮರೆಯಬಾರದು’ ಎಂದರು.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಪಕ್ಷದ ಮುಖಂಡರಾದ ವಿಶ್ವಾಸ್ ಕುಮಾರ್ ದಾಸ್, ಜೆ.ಅಬ್ದುಲ್ ಸಲೀಂ, ನಿರಾಜ್ ಚಂದ್ರಪಾಲ್, ಶುಭಾಶಚಂದ್ರ ಶೆಟ್ಟಿ ಕೊಲ್ನಾಡ್, ಟಿ.ಕೆ ಸುಧೀರ್, ಲಾರೆನ್ಸ್ ಡಿಸೋಜ, ತನ್ವಿರ್ ಶಾ, ಶುಭೋದಯ ಆಳ್ವ, ಪ್ರೇಮ್ ಬಳ್ಳಾಲ್‌ಬಾಗ್, ವಿಕಾಸ್ ಶೆಟ್ಟಿ, ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT