ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಪರಿಷತ್‌ ಚುನಾವಣೆ: ಮತದಾರರ ಕರಡು ಪಟ್ಟಿ ಸಿದ್ಧ

ಪದವೀಧರ ಕ್ಷೇತ್ರದಲ್ಲಿ 14,622, ಶಿಕ್ಷಕರ ಕ್ಷೇತ್ರದಲ್ಲಿ 5,809 ಮತದಾರರು
Published 23 ನವೆಂಬರ್ 2023, 15:42 IST
Last Updated 23 ನವೆಂಬರ್ 2023, 15:42 IST
ಅಕ್ಷರ ಗಾತ್ರ

ಮಂಗಳೂರು: ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾರರ ಕರಡು ಪಟ್ಟಿಯನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಿದ್ಧಪಡಿಸಿದೆ. ಜಿಲ್ಲೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದಲ್ಲಿ 14,622  ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 5,809 ಮತದಾರರು ಹೆಸರು ನೋಂದಾಯಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ., ‘ಜಿಲ್ಲೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಒಟ್ಟು 6,193 ಪುರುಷರು ಹಾಗೂ 8,429 ಮಹಿಳೆಯರು ಹೆಸರು ನೋಂದಾಯಿಸಿದ್ದಾರೆ. ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ  3,924 ಮಹಿಳೆಯರು ಹಾಗೂ 1,885 ಪುರುಷರು ಹೆಸರು ನೋಂದಾಯಿಸಿದ್ದಾರೆ’ ಎಂದರು.

’ಮತದಾರರ ಪಟ್ಟಿಗೆ ಹೆಸರು ನೋಂದಾಯಿಸುವುದಕ್ಕೆ ನಮೂನೆ 18 ಅಥವಾ 19ರಲ್ಲಿ ಅರ್ಜಿ ಸಲ್ಲಿಸಲು ನ.6ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಅವುಗಳನ್ನು ಪರಿಶೀಲಿಸಿ ಮತದಾರರ ಕರಡು ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಜಿಲ್ಲಾಧಿಕಾರಿ ಕಚೇರಿ ಹಾಗೂ ಆಯಾ ತಾಲ್ಲೂಕುಗಳ ತಹಶೀಲ್ದಾರ್‌ ಕಚೇರಿ ಹಾಗೂ ಪಾಲಿಕೆ ಕಚೇರಿಯಲ್ಲಿ ಲಭ್ಯ ಇದೆ. ಇದನ್ನು ಪರಿಶೀಲಿಸಿ ಆಕ್ಷೇಪ ಸಲ್ಲಿಸಲು ಡಿ 09ರವರೆಗೆ ಕಾಲಾವಕಾಶ ನೀಡಲಾಗುತ್ತದೆ‘ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

‘ಮತದಾರರ ಪೂರಕ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ಡಿ. 9ರ ಬಳಿಕವೂ ಅವಕಾಶ ಕಲ್ಪಿಸುತ್ತೇವೆ ಡಿ 25ರ ಒಳಗೆ ನಾವು ಅರ್ಜಿಗಳನ್ನು ವಿಲೇವಾರಿ ಮಾಡಿ ಮತದಾರರ ಪಟ್ಟಿಯನ್ನು ಮುದ್ರಣಕ್ಕೆ ಕಳುಹಿಸಲಿದ್ದೇವೆ. ಸಿ 30ರಂದು ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲಿದ್ದೇವೆ’ ಎಂದು ಅವರು ತಿಳಿಸಿದರು.  

‘ನೈರುತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಕಳೆದ ಸಲದ  ಚುನಾವಣೆಗೆ ಹೋಲಿಸಿದರೆ ಜಿಲ್ಲೆಯಲ್ಲಿ ಮತದಾರರ ಸಂಖ್ಯೆ ಸ್ವಲ್ಪ ಕಡಿಮೆ ಆಗಿರುವುದು ನಿಜ. ಈ ಪೂರಕ ಪಟ್ಟಿ ಸಿದ್ಧಗೊಂಡ ಬಳಿಕ ಒಟ್ಟು ಮತದಾರರ ಸಂಖ್ಯೆ ಮತ್ತೆ ಪರಿಷ್ಕರಣೆ ಆಗಲಿದೆ. ಕಳೆದ ಸಲ ನೈರುತ್ಯ ಪದವೀಧರರ ಕ್ಷೇತ್ರದಲ್ಲಿ ಜಿಲ್ಲೆಯಲ್ಲಿ 15,350 ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ 7321 ಮತದಾರರು ಇದ್ದರು’ ಎಂದು ಮಾಹಿತಿ ನೀಡಿದರು. 

ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳ ಮತದಾನದ ಸಲುವಾಗಿ ಜಿಲ್ಲೆಯಲ್ಲಿ 14 ಕಡೆ ಮತಗಟ್ಟೆಗಳನ್ನು ತೆರೆಯಲಾಗುತ್ತದೆ’ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಆನಂದ, ಹೆಚ್ಚುವರಿ ಜಿಲ್ಲಾಧಿಕಾರಿ ಸಂತೋಷ್ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT