ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಂಚಣಿ ವಂಚಿತ ಅಂಗವಿಕಲರನ್ನು ಗುರುತಿಸಿ

ತಾಲ್ಲೂಕು ಮಟ್ಟದ ಸಭೆಯಲ್ಲಿ ತಹಶೀಲ್ದಾರ್ ಗುರುಪ್ರಸಾದ್‌ ಸೂಚನೆ
Last Updated 12 ಸೆಪ್ಟೆಂಬರ್ 2020, 1:03 IST
ಅಕ್ಷರ ಗಾತ್ರ

ಮಂಗಳೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಪಿಂಚಣಿ ವಂಚಿತ ಅಂಗವಿಕಲರನ್ನು ಗುರುತಿಸಿ ಕೂಡಲೇ ಮಾಹಿತಿ ನೀಡಿದರೆ, ಶೀಘ್ರವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಗುರುಪ್ರಸಾದ್ ಹೇಳಿದರು.

ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ವಿವಿಧ ಯೋಜನೆಗಳ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಅಂಗವಿಕಲರ ಬಗ್ಗೆ ವಿಶೇಷ ಕಾಳಜಿ ಇದ್ದು, ಅವರು ಪಿಂಚಣಿಯಿಂದ ವಂಚಿತರಾಗಬಾರದು. ಸಂಬಂಧಪಟ್ಟ ಅಧಿಕಾರಿಗಳು ಪಿಂಚಣಿ ವಂಚಿತ ಅಂಗವಿಕಲರನ್ನು ಗುರುತಿಸಿ, ಸೂಕ್ತ ದಾಖಲೆಗಳ ಪ್ರತಿಯನ್ನು ವಾಟ್ಸ್‍ಆ್ಯಪ್ ಮೂಲಕ ಪಡೆದುಕೊಂಡು ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಸರ್ಕಾರದ ಯೋಜನೆಯನ್ವಯ ಅಂಗವಿಕಲರಿಗೆ ನೀಡುವ ವಿವಿಧ ಸವಲತ್ತುಗಳಲ್ಲಿ ಯಾವುದೇ ಲೋಪವಾಗಬಾರದು. ಸಮಸ್ಯೆ ಇದ್ದರೆ ತಕ್ಷಣ ಗಮನಕ್ಕೆ ತರಬೇಕು. ಅಂಗವಿಕಲರಿಗೆ ಅನುಕೂಲವಾಗುವ ದೃಷ್ಟಿಯಿಂದ ಎಲ್ಲ ಕಚೇರಿಗಳಲ್ಲಿ ವೀಲ್‌ಚೇರ್ ಸೌಲಭ್ಯವನ್ನು ಕಡ್ಡಾಯಗೊಳಿಸಲಾಗಿದ್ದು, ಈ ಸೌಲಭ್ಯದ ಬಗ್ಗೆ ಕಚೇರಿಗಳಲ್ಲಿ ಪರಿಶೀಲನೆ ನಡೆಸುವಂತೆ ಶಿಶು ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದ ಅವರು, ಅಂಗವಿಕಲರಿಗೆ ಗುರುತಿನ ಚೀಟಿಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕು ಎಂದರು.

ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಪುರಸಭೆ ಮತ್ತು ನಗರಸಭೆಗಳಲ್ಲಿ ಆಯುಕ್ತರ ಅಧ್ಯಕ್ಷತೆಯಲ್ಲಿ ಮೂರು ತಿಂಗಳಿಗೊಮ್ಮೆ ಕಾವಲು ಸಮಿತಿ ಸಭೆ ನಡೆಸುವ ಬಗ್ಗೆ ಪತ್ರ ಬರೆಯಲಾಗುವುದು ಎಂದು ಹೇಳಿದರು.

ಬಾಲ್ಯವಿವಾಹ ನಿಷೇಧಧ ಬಗ್ಗೆ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯರೂಪಕ್ಕೆ ಬರಲು ಗ್ರಾಮೀಣ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

ತಾಲ್ಲೂಕಿನಲ್ಲಿ ಮಕ್ಕಳ ರಕ್ಷಣಾ ಸಮಿತಿ, ಅನಾಥ, ನಿರ್ಗತಿಕ ಮಕ್ಕಳನ್ನು ರಕ್ಷಣೆ ಮಾಡುತ್ತಿದ್ದು, ಸಾಕಷ್ಟು ಮಕ್ಕಳಿಗೆ ಜಾತಿ ಪ್ರಮಾಣ ಪತ್ರ ದೊರಕಿಲ್ಲ. ಇದರಿಂದ ಸಮಸ್ಯೆಯಾಗುತ್ತಿದೆ ಎಂದು ಮಕ್ಕಳ ರಕ್ಷಣಾ ಸಮಿತಿಯ ಅಧಿಕಾರಿ ಕುಮಾರ್ ತಿಳಿಸಿದರು. ಈಗಾಗಲೇ ಅಂತಹ ಮಕ್ಕಳು ಆಧಾರ್ ಕಾರ್ಡ್ ಹೊಂದಿದ್ದು, ಜಾತಿ ಪ್ರಮಾಣಪತ್ರ ಕೊಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ತಿಳಿಸಿದರು.

ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ಸುನೀತಾ, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT