ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶನಿವಾರ ರಾತ್ರಿ ಇಡೀ ಭಾರಿ ಮಳೆಯಾಗಿದೆ. ಹಲವೆಡೆ ತಗ್ಗು ಪ್ರದೇಶಗಳು ಮುಳುಗಡೆಯಾಗಿವೆ.
ಸುಬ್ರಹ್ಮಣ್ಯ, ಕೊಲ್ಲಮೊಗ್ರು, ಬಿಸಿಲೆ, ಅಡ್ಡಹೊಳೆ ಮೊದಲಾದ ಕಡೆಗಳಲ್ಲಿ ಭಾರಿ ಮಳೆಯಾಗಿದ್ದು, ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಘಟ್ಟ ಪ್ರದೇಶಗಳಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯ ದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಅಲ್ಲಿನ ಲಗೇಜ್ ಕೊಠಡಿ, ಶೌಚಾಲಯಗಳೆಲ್ಲ ಜಲಾವೃತವಾಗಿವೆ.
ಮಂಜೇಶ್ವರ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಗೆ ಪ್ರವಾಹದ ನೀರು ನುಗ್ಗಿದ್ದು, ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧ ಮಾಡಲಾಗಿದೆ. ಪರಿಸರದಲ್ಲಿ ಅನೇಕ ಕಡೆ ಕೃಷಿ ತೋಟಗಳಿಗೆ ನದಿ ನೀರು ನುಗ್ಗಿದೆ.
ಬಂಟ್ವಾಳ ತಾಲ್ಲೂಕಿನಲ್ಲೂ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದೆ. ಶನಿವಾರ ತಡರಾತ್ರಿಯಿಂದ ಮಳೆ ಮತ್ತಷ್ಟು ಬಿರುಸು ಪಡೆದುಕೊಂಡಿದೆ. ಆಗಾಗ ಬೀಸುವ ಗಾಳಿಯಿಂದಾಗಿ ಕೆಲವು ಕಡೆ ಕಂಗು ತೆಂಗಿನ ಮರಗಳು ನೆಲಕ್ಕುರುಳಿವೆ. ಕಾವಳಪಡೂರು ಗ್ರಾಮದ ಮಧ್ವ ಸಮೀಪದ ಮಾಡ್ತಿಮಾರಿನ ನಾರಾಯಣ, ಮೋನಪ್ಪ ಅವರ ಅಡಿಕೆ ತೋಟಗಳಲ್ಲಿ ಸುಮಾರು ಮೂರು ಅಡಿಗಳಷ್ಟು ನೀರು ನಿಂತಿದೆ. ತೋಡುಗಳು ತುಂಬಿ ಹರಿಯುತ್ತಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.