ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಮಾರ್ಟ್‌ ಸಿಟಿ ಕಾಮಗಾರಿ: ಹೈಕೋರ್ಟ್ ಅನುಮತಿ

Last Updated 17 ಮಾರ್ಚ್ 2021, 4:43 IST
ಅಕ್ಷರ ಗಾತ್ರ

ಮಂಗಳೂರು: ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆ (ನೀರಿ) ಸೂಚಿಸಿದ ಮಾರ್ಗಸೂಚಿಗಳನ್ನು ಪಾಲಿಸುವುದಾಗಿ ಸರ್ಕಾರ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿಗಳನ್ನು ಮುಂದುವರಿಸಲು ಹೈಕೋರ್ಟ್ ಅನುಮತಿ ನೀಡಿದೆ.

ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಹಾಗೂ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು. ಪಚ್ಚನಾಡಿ, ಕುಡುಪು, ಮಂದಾರ ಪ್ರದೇಶದಲ್ಲಿನ ಘನತ್ಯಾಜ್ಯ ಭೂ ಭರ್ತಿ ಘಟಕದಿಂದ ಉಂಟಾದ ಅನಾಹುತದ ಕುರಿತಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿತ್ತು.

ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಪರ ಅಡ್ವೊಕೇಟ್‌ ಜನರಲ್ ಪ್ರಭುಲಿಂಗ ಕೆ. ನಾವಡಗಿ ಹಾಜರಾಗಿ, ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗಿರುವ ಕಟ್ಟಡ ಹಾಗೂ ಇತರ ನಿರ್ಮಾಣ ಕಾಮಗಾರಿಗಳಲ್ಲಿ ನೀರಿ ಸಂಸ್ಥೆ ಸೂಚಿಸಿದ ಮಾರ್ಗಸೂಚಿಗಳ್ನು ಪಾಲಿಸುವುದಾಗಿ ನ್ಯಾಯಪೀಠಕ್ಕೆ ಭರವಸೆ ನೀಡಿದರು.

ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಮುಚ್ಚಳಿಕೆಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ನೀರಿ ಮಾರ್ಗಸೂಚಿಗಳನ್ನು ಪಾಲಿಸುವ ಬಗ್ಗೆ ಅಡ್ವೊಕೆಟ್‌ ಜನರಲ್ ನೀಡಿರುವ ಭರವಸೆ ಮತ್ತು ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರು ಸಲ್ಲಿಸಿರುವ ಮುಚ್ಚಳಿಕೆ ಆಧರಿಸಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿ ಮುಂದುವರಿಸಲು ಅನುಮತಿ ನೀಡುವುದಾಗ ಆದೇಶಿಸಿತು.

ಇದೇ ವೇಳೆ ಕಾಮಗಾರಿ ಆರಂಭಿ ಸಲು ಅನುಮತಿ ನೀಡುವಂತೆ ಕೋರಿ ಮಂಗಳೂರು ಸ್ಮಾರ್ಟ್ ಸಿಟಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಪೀಠ, ನೀರಿ ಮಾರ್ಗಸೂಚಿ ಗಳನ್ನು ಪಾಲಿಸಲು ಮತ್ತು ಕಾಮಗಾರಿಗಳನ್ನು ಆರಂಭಿಸುವ ಕುರಿತು ನಿರ್ದೇಶಕ ಮಂಡಳಿಯ ಸಭೆಯಲ್ಲಿ ಕೈಗೊಂಡ ತೀರ್ಮಾನದ ವಿವರಗಳನ್ನು ಸಲ್ಲಿಸುವಂತೆ ಸೂಚಿಸಿ, ವಿಚಾರಣೆಯನ್ನು ಮಾ.30ಕ್ಕೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT