ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚು ತಪಾಸಣೆ: ಆರೋಗ್ಯಾಧಿಕಾರಿಗೆ ಹೊಣೆ

ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಸಚಿವ ಎಸ್. ಅಂಗಾರ ಸೂಚನೆ
Last Updated 6 ಸೆಪ್ಟೆಂಬರ್ 2021, 17:14 IST
ಅಕ್ಷರ ಗಾತ್ರ

ಮಂಗಳೂರು: ಕೋವಿಡ್ ಪ್ರಕರಣ ಹೆಚ್ಚು ಕಂಡುಬರುವ ಪ್ರದೇಶಗಳಲ್ಲಿ ಆಯಾ ತಾಲ್ಲೂಕುಗಳ ಆರೋಗ್ಯಾಧಿಕಾರಿಗಳು ಹೆಚ್ಚಿನ ತಪಾಸಣೆಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಸಂಬಂಧಿಸಿದ ತಾಲ್ಲೂಕು ಆರೋಗ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮೀನುಗಾರಿಕೆ ಸಚಿವ ಎಸ್.ಅಂಗಾರ ಹೇಳಿದರು.

ಸೋಮವಾರ ಇಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್ ನಿಯಂತ್ರಿಸುವಲ್ಲಿ ಹೆಚ್ಚಿನ ತಪಾಸಣೆ ಅಗತ್ಯ. ಈ ದಿಸೆಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕುಗಳ ಆರೋಗ್ಯ ಅಧಿಕಾರಿಗಳು ತುರ್ತಾಗಿ ಹೆಚ್ಚು ತಪಾಸಣೆ ನಡೆಸಬೇಕು ಎಂದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾತನಾಡಿ, ‘ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಸಚಿವರ ಸೂಚನೆಯಂತೆ ಹೆಚ್ಚಿನ ತಪಾಸಣೆ ಮಾಡಬೇಕು. ಶೇ 100ರಷ್ಟು ಕಾರ್ಯಗತಗೊಳ್ಳಬೇಕು. ತಹಶೀಲ್ದಾರ್ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಉಸ್ತುವಾರಿ ನೋಡಿಕೊಳ್ಳಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಗ್ರಾಮ ಮಟ್ಟದಲ್ಲಿರುವ ಕೋವಿಡ್ ಪಾಸಿಟಿವಿಟಿ ಸೂಚ್ಯಂಕದ ಬಗ್ಗೆ ಸಂಬಂಧಿಸಿದ ಆರೋಗ್ಯಾಧಿಕಾರಿಗಳು ಪಟ್ಟಿ ಒದಗಿಸಬೇಕು ಎಂದು ಸೂಚಿಸಿದರು.

ಲಕ್ಷ ಲಸಿಕಾ ಮೇಳ: ಜಿಲ್ಲೆಯಲ್ಲಿ ಇದೇ 8ರಂದು ಲಕ್ಷ ಲಸಿಕಾ ಮೇಳ ನಡೆಯಲಿದೆ. 430 ಉಪಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಹೆಚ್ಚುವರಿ ಸಿಬ್ಬಂದಿ ನಿಯೋಜಿಸಲಾಗಿದೆ. 18 ವರ್ಷ ಮೇಲಿನವರು ಮೊದಲ ಅಥವಾ ಎರಡನೇ ಡೋಸ್ ಲಸಿಕೆಯನ್ನು ಈ ಲಸಿಕಾ ಮೇಳದಲ್ಲಿ ಪಡೆಯಬಹುದು. ಉದ್ಯೋಗಸ್ಥರ ಅನುಕೂಲಕ್ಕಾಗಿ ಬೆಳಿಗ್ಗೆಯಿಂದ ರಾತ್ರಿಯವರೆಗೆ ಲಸಿಕೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಶಾಸಕ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್, ಉಪ ವಿಭಾಗಾಧಿಕಾರಿ ಮದನ್ ಮೋಹನ್ ಇದ್ದರು.

ಪರಿಸರ ಸ್ನೇಹಿ ಆಚರಣೆಗೆ ವಿನಂತಿ

ಜಿಲ್ಲೆಯಲ್ಲಿ ಪಾಸಿಟಿವಿಟಿ ಸೂಚ್ಯಂಕ ಕಡಿಮೆ ಮಾಡಲು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯಂತೆ ಈ ಬಾರಿಯೂ ಪರಿಸರ ಸ್ನೇಹಿ ಗಣೇಶ ಚತುರ್ಥಿಯನ್ನು ಆಚರಿಸಬೇಕು ಎಂದು ಸಚಿವ ಎಸ್. ಅಂಗಾರ ವಿನಂತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT