ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುತ್ತೂರು: ಮಾರ್ಚ್‌ 1 ರಿಂದ ರಾಜ್ಯ ಸರ್ಕಾರಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

Last Updated 26 ಫೆಬ್ರುವರಿ 2023, 7:09 IST
ಅಕ್ಷರ ಗಾತ್ರ

ಪುತ್ತೂರು: ಕರ್ನಾಟಕ ರಾಜ್ಯ ನೌಕರರ ಸಂಘದ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ರಾಜ್ಯ ಕಾರ್ಯಕಾರಿಣಿ ತುರ್ತುಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಮಾ.1ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ಇದಕ್ಕೆ ಪುತ್ತೂರು ತಾಲ್ಲೂಕು ಶಾಖೆಯಿಂದ ಸಂಪೂರ್ಣ ಬೆಂಬಲ ಸೂಚಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲ್ಲೂಕು ಶಾಖೆಯ ಅಧ್ಯಕ್ಷ ಶಿವಾನಂದ ಆಚಾರ್ಯ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್‌ 1ರಿಂದ ಪುತ್ತೂರು ತಾಲ್ಲೂಕಿನ ಎಲ್ಲಾ ಸರ್ಕಾರಿ ಇಲಾಖೆಗಳ ತುರ್ತು ಸೇವೆಯ ಹೊರತು ಪಡಿಸಿ, ಎಲ್ಲಾ ಡಿ ದರ್ಜೆಯಿಂದ ಹಿಡಿದು ಎ ದರ್ಜೆ ತನಕದ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಶಾಂತಿಯುತವಾಗಿ ಮುಷ್ಕರವನ್ನು ಬೆಂಬಲಿಸಲಿದ್ದೇವೆ. ಸರ್ಕಾರಿ ನೌಕರರ ಈ ಮುಷ್ಕರದಿಂದ ಸಾರ್ವಜನಿಕರಿಗೆ ಆಗುವ ತೊಂದರೆಗಳಿಗೆ ಸರ್ಕಾರವೇ ಜವಾಬ್ದಾರಿಯಾಗಿರುತ್ತದೆ ಎಂದರು.

ರಾಜ್ಯ ಸರ್ಕಾರ 2023-24ನೇ ಸಾಲಿನ ಆಯ-ವ್ಯಯದಲ್ಲಿ ಸರ್ಕಾರಿ ನೌಕರರ ವೇತನ- ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿ ಯಾವುದೇ ಪ್ರಸ್ತಾಪ ಮಾಡದಿರುವುದು ನೌಕರರಲ್ಲಿ ನಿರಾಶೆ ಮೂಡಿಸಿದೆ. 7ನೇ ವೇತನ ಆಯೋಗದ ಸೌಲಭ್ಯಗಳನ್ನು 2022 ಜುಲೈ 1ರಿಂದ ಜಾರಿಗೊಳಿಸಬೇಕಿತ್ತು. ಸರ್ಕಾರ ಇದನ್ನು ಮಾಡದ ಹಿನ್ನೆಲೆಯಲ್ಲಿ ಫೆ.21ರಂದು ನಡೆದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆ, ತಾಲ್ಲೂಕು ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು-ಪದಾಧಿಕಾರಿಗಳ ಸುಮಾರು 8 ಸಾವಿರ ಚುನಾಯಿತ ಪ್ರತಿನಿಧಿಗಳನ್ನೊಳಗೊಂಡ ಸಭೆಯಲ್ಲಿ ಮುಷ್ಕರಕ್ಕೆ ತೀರ್ಮಾನ ಮಾಡಲಾಗಿದೆ ಎಂದು ಅವರು ತಿಳಿಸಿದರು.

7ನೇ ವೇತನ ಆಯೋಗದಿಂದ ಶೀಘ್ರವಾಗಿ ಮಧ್ಯಂತರ ವರದಿಯನ್ನು ಪಡೆದು, ಚುನಾವಣಾ ನೀತಿ ಸಂಹಿತೆ ಜಾರಿಗೆ ಮೊದಲು ಶೇ 40 ಫಿಟ್ ಮೆಂಟ್ ಸೌಲಭ್ಯವನ್ನು 2022 ಜುಲೈ 1ರಿಂದ ಜಾರಿಗೊಳಿಸಬೇಕು. ಎನ್‌ಪಿಎಸ್ ಯೋಜನೆಯಿಂದ ಸರ್ಕಾರಿ ನೌಕರರು ಜೀವನ ನಿರ್ವಹಣೆಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಎನ್‌ಪಿಎಸ್ ಯೋಜನೆಯನ್ನು ರದ್ದುಗೊಳಿಸಿ ಓಪಿಎಸ್ ವ್ಯಾಪ್ತಿಗೆ ಆ ನೌಕರರನ್ನು ತರಬೇಕು. ಈ ಘೋಷಣೆ ಆಗುವ ತನಕ ಮುಷ್ಕರ ಮುಂದುವರಿಯಲಿದೆ ಎಂದು ಅವರು ಹೇಳಿದರು.

ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಪುರುಷೋತ್ತಮ ಬಿ, ಪುತ್ತೂರು ತಾಲ್ಲೂಕು ಶಾಖೆಯ ಹಿರಿಯ ಉಪಾಧ್ಯಕ್ಷ ಹರಿಪ್ರಕಾಶ್ ಬೈಲಾಡಿ, ಕಾರ್ಯದರ್ಶಿ ಅಬ್ರಹಾಂ ಎಸ್.ಎ, ಉಪಾಧ್ಯಕ್ಷ ಹೊನ್ನಪ್ಪ ಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT