ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ.ಕ: ಶಿಶು ಮರಣ ಪ್ರಮಾಣ ಕಡಿಮೆ

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ಆರ್‌.ಜಿ.ಆನಂದ್ ಪ್ರಶಂಸೆ
Last Updated 8 ಏಪ್ರಿಲ್ 2021, 16:41 IST
ಅಕ್ಷರ ಗಾತ್ರ

ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಕ್ಕಳ ಪಾಲನಾ ಕೇಂದ್ರಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಶೂನ್ಯವಾಗಿವೆ. ಕೋವಿಡ್ ವೇಳೆ ಗರ್ಭಿಣಿ ಮತ್ತು ಶಿಶು ಮರಣ ಪ್ರಮಾಣ ಕಡಿಮೆಯಾಗಿದ್ದು, ಆಸ್ಪತ್ರೆಗಳಲ್ಲಿ ಉತ್ತಮ ಆರೈಕೆ ದೊರೆತಿದೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ಆರ್‌.ಜಿ.ಆನಂದ್ ಹೇಳಿದರು.

ಗುರುವಾರ ಇಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು. ‘ದೇಶದ ವಿವಿಧ ರಾಜ್ಯಗಳ ಸುಮಾರು 214 ಜಿಲ್ಲೆಗಳಿಗೆ ಭೇಟಿ ನೀಡಿದ್ದೇನೆ. ಕೋವಿಡ್ ಸಂದರ್ಭದಲ್ಲಿ ಈ ಜಿಲ್ಲೆಯಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಅರಿವು ಮೂಡಿಸುವ ಕಾರ್ಯವನ್ನು ಉತ್ತಮವಾಗಿ ನಿರ್ವಹಿಸಿದ್ದಾರೆ’ ಎಂದರು.

ರಾಷ್ಟ್ರೀಯ ಬಾಲಸ್ವಾಸ್ಥ್ಯ ಕಾರ್ಯಕ್ರಮ ಅನುಷ್ಠಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇ 100ರಷ್ಟು ಸಾಧನೆ ಮಾಡಿದೆ. ಶಾಲೆ, ಅಂಗನವಾಡಿಗಳಿಗೆ ರಜೆ ಇದ್ದರೂ, ಮಕ್ಕಳ ಮಾನಸಿಕ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ನಿರಂತರ ಕಾಳಜಿವಹಿಸಿದೆ ಎಂದು ಪ್ರಶಂಸಿಸಿದರು.

ಕರ್ನಾಟಕದಲ್ಲಿ ಸಿಡಬ್ಲ್ಯುಪಿ (ಚೈಲ್ಡ್‌ ವೆಲ್‌ಫೇರ್‌ ಪೊಲೀಸ್) ವ್ಯವಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈ ವ್ಯವಸ್ಥೆ ಇದೆ ಎಂದರು.

ಕನ್ನಡದಲ್ಲೂ ‘ಸಂವೇದನಾ’

ಕೋವಿಡ್ ಪೀಡಿತ ಹಾಗೂ ಉಳಿದ ಮಕ್ಕಳ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಕಳೆದ ನಾಲ್ಕೈದು ತಿಂಗಳುಗಳಿಂದ ‘ಸಂವೇದನಾ’ ಸಹಾಯವಾಣಿ (ಟೋಲ್‌ ಫ್ರೀ –18001212830) ದೇಶದಾದ್ಯಂತ ಕಾರ್ಯನಿರ್ವಹಿಸುತ್ತಿದೆ. ಕೋವಿಡ್‌ಗೆ ಸಂಬಂಧಿಸಿದ ಮಕ್ಕಳ ಅನುಮಾನ ಪರಿಹರಿಸುವ ಜತೆಗೆ, ಅವರಲ್ಲಿ ಮಾನಸಿಕ ಸ್ಥೈರ್ಯ ತುಂಬುವ ಕಾರ್ಯವನ್ನು ಸಹಾಯವಾಣಿ ಮಾಡುತ್ತಿದೆ. ದಿನಕ್ಕೆ ಸರಾಸರಿ 4000 ಕರೆಗಳು ಬರುತ್ತವೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ಆರ್‌.ಜಿ.ಆನಂದ್ ತಿಳಿಸಿದರು.

ಈ ಸಂಬಂಧ 500ರಷ್ಟು ಕೌನ್ಸೆಲರ್‌ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಕನ್ನಡ ಸೇರಿದಂತೆ, ಪ್ರಾದೇಶಿಕ ಭಾಷೆಗಳಲ್ಲಿ ಈ ಸೌಲಭ್ಯ ಲಭ್ಯವಿದೆ. ಮಕ್ಕಳು ಈ ಸಂಖ್ಯೆಗೆ ಕರೆ ಮಾಡಿ ಸಂದೇಹ ಪರಿಹರಿಸಿಕೊಳ್ಳಬಹುದು ಎಂದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಎಸ್ಪಿ ಹೃಷಿಕೇಶ್ ಭಗವಾನ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಡಿಸಿಪಿ ಹರಿರಾಂ ಶಂಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಪಾಪ ಬೋವಿ ಇದ್ದರು.

‘ಪರಿಣಾಮಕಾರಿ ಅನುಷ್ಠಾನಗೊಳಿಸಿ’

ಮಕ್ಕಳ ರಕ್ಷಣೆಗಾಗಿ ಜಾರಿಗೆ ತಂದಿರುವ ಕಾಯ್ದೆ, ಕಾರ್ಯಕ್ರಮಗಳು ಹಾಗೂ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಡಾ. ಆರ್. ಜಿ. ಆನಂದ್ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆದ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಮಕ್ಕಳ ಕಲ್ಯಾಣ ಸಮಿತಿ ಮುಂದೆ ಬಂದ ಮಕ್ಕಳ ಪ್ರಕರಣಗಳ ವಿಚಾರಣೆ ವೇಳೆ, ರಕ್ಷಣೆ ಮತ್ತು ಪೋಷಣೆ ಅಗತ್ಯವಿದ್ದಲ್ಲಿ ಬಾಲ ಮಂದಿರಗಳಲ್ಲಿ ರಕ್ಷಣೆ ನೀಡಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT