ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಪ್ಪಿನಮೊಗರು ಬೈಪಾಸ್‌ ಯೋಜನೆ ರದ್ದು: ನಳಿನ್‌ ಕುಮಾರ್‌ ಕಟೀಲ್

ಅಭಿವೃದ್ಧಿ ಸಮನ್ವಯ ಸಮಿತಿ ಸಭೆ
Last Updated 4 ಆಗಸ್ಟ್ 2020, 15:04 IST
ಅಕ್ಷರ ಗಾತ್ರ

ಮಂಗಳೂರು: ಉಳ್ಳಾಲದ ನೇತ್ರಾವತಿ ಸೇತುವೆಯಿಂದ ಜಪ್ಪಿನಮೊಗರು ಮಾರ್ಗವಾಗಿ ಕಣ್ಣೂರು ಮಸೀದಿವರೆಗೆ ಬೈಪಾಸ್‌ ರಸ್ತೆ ನಿರ್ಮಿಸುವ ಯೋಜನೆಯನ್ನು ರದ್ದು ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್‌ ಕಟೀಲ್‌ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ನೇತ್ರಾವತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ಜಪ್ಪಿನಮೊಗರು ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ಭೂಸ್ವಾಧೀನದ ಸಮಸ್ಯೆ ಇದೆ. ಅಗತ್ಯ ಜಮೀನು ಲಭ್ಯವಾಗದ ಕಾರಣದಿಂದ ಯೋಜನೆಯನ್ನು ಕೈಬಿಡಲಾಗಿದೆ’ ಎಂದರು.

ಬೈಪಾಸ್‌ ರಸ್ತೆಯ ಕಾಮಗಾರಿಯ ಬದಲಿಗೆ ಬೇರೆ ರಸ್ತೆ ಕಾಮಗಾರಿಗೆ ಮಂಜೂರಾತಿ ನೀಡುವಂತೆ ಲೋಕೋಪಯೋಗಿ ಸಚಿವರಿಗೆ ಮನವಿ ಮಾಡಲಾಗುವುದು ಎಂದು ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್‌ ತಿಳಿಸಿದರು.

ಕಾಮಗಾರಿ ತ್ವರಿತಕ್ಕೆ ಸೂಚನೆ: ಕಾರ್ಕಳ– ಮೂಡುಬಿದಿರೆ– ಮಂಗಳೂರು, ಬಿ.ಸಿ.ರೋಡ್‌– ಪೂಂಜಾಲಕಟ್ಟೆ ಸೇರಿದಂತೆ ಜಿಲ್ಲೆಯಲ್ಲಿ ಬಾಕಿ ಉಳಿದಿರುವ ಎಲ್ಲ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಕೋವಿಡ್‌ ಕಾರಣದಿಂದ ಬಾಕಿ ಉಳಿದಿರುವ ಇತರೆ ಕಾಮಗಾರಿಗಳನ್ನೂ ಶೀಘ್ರದಲ್ಲಿ ಮುಗಿಸಬೇಕು ಎಂದು ಸಂಸದರು ಲೋಕೋಪಯೋಗಿ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.

ಪಂಚಾಯಿತಿ ಇಂಟರ್‌ನೆಟ್‌ ಬಳಕೆ: ಗ್ರಾಮೀಣ ಪ್ರದೇಶದಲ್ಲಿ ಇಂಟರ್‌ನೆಟ್‌ ಸರಿಯಾಗಿ ಲಭ್ಯವಾಗದ ಕಾರಣದಿಂದ ವಿದ್ಯಾರ್ಥಿಗಳು ಆನ್‌ಲೈನ್‌ ತರಗತಿಗಳ ಅನುಕೂಲ ಪಡೆಯಲು ಆಗುತ್ತಿಲ್ಲ ಎಂದು ಹಲವು ಸದಸ್ಯರು ಸಭೆಯಲ್ಲಿ ಪ್ರಸ್ತಾಪಿಸಿದರು.

ಗ್ರಾಮ ಪಂಚಾಯಿತಿಗಳಲ್ಲಿರುವ ರಾಜೀವ್‌ ಗಾಂಧಿ ಸೇವಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳನ್ನು ಸೇರಿಸಿ, ಅಲ್ಲಿನ ಇಂಟರ್‌ನೆಟ್‌ ಬಳಸಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂದು ಸಂಸದರು ನಿರ್ದೇಶನ ನೀಡಿದರು.

ಇಂಟರ್‌ನೆಟ್‌ ಸಮಸ್ಯೆ ಇರುವ ಪ್ರದೇಶಗಳಲ್ಲಿ ವಿದ್ಯಾರ್ಥಿಗಳ ಮನೆಗೆ ಹೋಗಿ ಪಾಠ ಮಾಡುವಂತೆ ಶಿಕ್ಷಕರಿಗೆ ಸೂಚಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಲ್ಲೇಸ್ವಾಮಿ ಉತ್ತರಿಸಿದರು.

ದೀನ್ ದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಸ್ವಚ್ಛ ಭಾರತ್ ಮಿಷನ್, ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ, ಪ್ರಧಾನಮಂತ್ರಿ ಗ್ರಾಮೀಣ ಅವಾಸ್ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ವಿಶೇಷ ಕಾಳಜಿ ತೋರಬೇಕು. ಸಂಸದರ ಆದರ್ಶ ಗ್ರಾಮ ಯೋಜನೆಯಲ್ಲಿ ಬಳ್ಪ ಗ್ರಾಮಕ್ಕೆ ಮೂಲಸೌಕರ್ಯ ಕಲ್ಪಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ವರ್ಷಾಂತ್ಯದೊಳಗೆ ಎಲ್ಲವೂ ಪೂರ್ಣಗೊಳ್ಳಲಿವೆ ಎಂದು ನಳಿನ್‌ ಕುಮಾರ್‌ ತಿಳಿಸಿದರು.

ಜಮೀನು ಗುರುತಿಸಲು ಸೂಚನೆ:ಕೇಂದ್ರ ಸರ್ಕಾರದ ವಸತಿ ಯೋಜನೆಗಳ ಅಡಿಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದ ಅರ್ಹ ಫಲಾನುಭವಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಲಭ್ಯವಿರುವ ಸರ್ಕಾರಿ ಜಮೀನುಗಳನ್ನು ತ್ವರಿತವಾಗಿ ಗುರುತಿಸಿ, ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕ ಉಮಾನಾಥ ಕೋಟ್ಯಾನ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ. ಆರ್‌. ಸೆಲ್ವಮಣಿ ಪಾಲ್ಗೊಂಡಿದ್ದರು.

ಕೋವಿಡ್ ಬಿಲ್‌ ಪರಿಶೀಲನೆ
‘ಕೋವಿಡ್‌ ಸೋಂಕಿತರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ವಿಧಿಸುವ ದರದ ಬಿಲ್‌ಗಳ ಪರಿಶೀಲನೆ ನಡೆಸಲಾಗುವುದು. ಇದಕ್ಕಾಗಿ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಪ್ರತ್ಯೇಕ ಘಟಕ ತೆರೆಯಲಾಗುವುದು. ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ಶುಲ್ಕ ಪಡೆಯುವ ಆಸ್ಪತ್ರೆಗಳ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.

ಜಿಲ್ಲೆಯಲ್ಲಿ ಪ್ರತಿ ದಿನ 4,000 ಮಂದಿಯ ಕೋವಿಡ್ ಪರೀಕ್ಷೆ ಮಾಡಲು ಸಿದ್ಧತೆ ಮಾಡಲಾಗುತ್ತಿದೆ. ಆಯಾ ಪಟ್ಟಣ ಪ್ರದೇಶಗಳಲ್ಲೇ ಪರೀಕ್ಷೆಗೆ ಸೌಲಭ್ಯ ಒದಗಿಸಲಾಗುವುದು. ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಖಾಸಗಿ ಆಸ್ಪತ್ರೆಗಳಲ್ಲೂ ವೆಂಟಿಲೇಟರ್‌ ಸೌಲಭ್ಯ ನೀಡಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT