ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆರೋಸಾ ಶಾಲೆ ಪ್ರಕರಣ; ವಿಚಾರಣೆ ಆರಂಭಿಸಿದ ಅಧಿಕಾರಿ

Published 20 ಫೆಬ್ರುವರಿ 2024, 3:03 IST
Last Updated 20 ಫೆಬ್ರುವರಿ 2024, 3:03 IST
ಅಕ್ಷರ ಗಾತ್ರ

ಮಂಗಳೂರು: ನಗರದ ಸೇಂಟ್‌ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ತರಗತಿಯಲ್ಲಿ ಪಾಠ ಮಾಡುವಾಗ ಹಿಂದೂ ಧರ್ಮಕ್ಕೆ ಅವಹೇಳನ ಮಾಡಿದ್ದಾರೆ ಎಂಬ ಆರೋಪ ಹಾಗೂ ನಂತರದ ಬೆಳವಣಿಗೆಗಳ ಬಗ್ಗೆ ಐಎಎಸ್‌ ಅಧಿಕಾರಿ ಆಕಾಶ್‌ ಶಂಕರ್‌ ಸೋಮವಾರ ವಿಚಾರಣೆ ಆರಂಭಿಸಿದರು.

ಈ ಪ್ರಕರಣದ ತನಿಖೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಲಬುರಗಿ ವಲಯದ ಹೆಚ್ಚುವರಿ ಆಯುಕ್ತರಾಗಿರುವ ಆಕಾಶ್‌ ಶಂಕರ್‌ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದ ಒಟ್ಟು ಬೆಳವಣಿಗೆ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳಿಂದ ಅವರು  ಸೋಮವಾರ ಪ್ರಾಥಮಿಕ ಮಾಹಿತಿ ಕಲೆಹಾಕಿದರು. ಇಲಾಖೆಯ ಒಬ್ಬೊಬ್ಬ ಅಧಿಕಾರಿಯನ್ನು ಪ್ರತ್ಯೇಕವಾಗಿ ಕರೆಯಿಸಿಕೊಂಡು ವಿಚಾರಣೆ ನಡೆಸಿದರು.

ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಈ ಪ್ರಕರಣದ ಸತ್ಯಶೋಧನೆ ಪ್ರಕ್ರಿಯೆಯನ್ನು ಆರಂಭಿಸಿದ್ದೇನೆ. ಸಂಬಂಧಪಟ್ಟ ಅಧಿಕಾರಿಗಳಿಂದ ಪ್ರಾಥಮಿಕ ಮಾಹಿತಿ ಕಲೆಹಾಕಿದ್ದೇನೆ. ಇನ್ನಷ್ಟು ಮಾಹಿತಿ ಕಲೆ ಹಾಕಬೇಕಿದೆ. ಈ ಹಂತದಲ್ಲಿ ವಿಚಾರಣೆ ಕುರಿತು ಏನನ್ನೂ ಹೇಳಲು ಇಷ್ಟಪಡುವುದಿಲ್ಲ. ತನಿಖೆಗೆ ಎಲ್ಲರೂ ಸಂಪೂರ್ಣ ಸಹಕಾರ ಕೊಡಬೇಕು’ ಎಂದರು.

‘ಎರಡು ದಿನ ಇಲ್ಲೇ ಇದ್ದು, ವಿಚಾರಣೆ ಪೂರ್ಣಗೊಳಿಸಿ ಆದಷ್ಟು ಬೇಗ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ. ಪ್ರಕರಣಕ್ಕೆ ಸಂಬಂಧಿಸಿ ವಸ್ತುನಿಷ್ಠ ವರದಿ ಸಲ್ಲಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದರು.

ಪ್ರತಿಭಟನೆ: ಸೇಂಟ್ ಜೆರೋಸಾ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿ ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ ಹಾಗೂ ಇತರ ಮೇಲೆ ದಾಖಲಿಸಿದ ಪ್ರಕರಣ ಹಿಂಪಡೆಯಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಬಜರಂಗ ದಳ ಕಾರ್ಯಕರ್ತರು ಸೋಮವಾರ ಇಲ್ಲಿ ಪ್ರತಿಭಟನೆ ನಡೆಸಿದರು. ಪೊಲೀಸರು ಅವರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT