ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ: ಕಂಬಳಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ ಉತ್ತೇಜನ

Last Updated 10 ಮಾರ್ಚ್ 2021, 2:58 IST
ಅಕ್ಷರ ಗಾತ್ರ

ಮಂಗಳೂರು: ತುಳುನಾಡಿನ ಜಾನಪದ ಕ್ರೀಡೆಯಾದ ಕಂಬಳಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ ಉತ್ತೇಜನ ನೀಡುವ ಕಾರ್ಯಕ್ಕೆ ಸಿದ್ಧತೆ ಆರಂಭವಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಕಂಬಳಗಳ ಪಟ್ಟಿಯನ್ನು ಅಧಿಕಾರಿಗಳು ಸಿದ್ಧಪಡಿಸಿದ್ದು, ಇಲಾಖೆಯ ನಿರ್ದೇಶಕರಿಗೆ ಸಲ್ಲಿಸಿದ್ದಾರೆ.

ಕಳೆದ ವಾರ ಕಾರ್ಕಳದ ಮಿಯಾರಿನಲ್ಲಿ ನಡೆದ ಕಂಬಳದಲ್ಲಿ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್‌ ಭಾಗವಹಿಸಿದ್ದರು. ಈ ಸಂದರ್ಭ ಅಲ್ಲಿನ ಕಂಬಳ ಸಮಿತಿ ಅಧ್ಯಕ್ಷ, ಶಾಸಕ ವಿ.ಸುನೀಲ್‌ ಕುಮಾರ್‌ ಅವರು ‘ತುಳುನಾಡಿನ ಕಂಬಳ ಕ್ರೀಡೆಗೆ ಪ್ರೋತ್ಸಾಹಧನ ನೀಡಬೇಕು. ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ಮುತುವರ್ಜಿ ವಹಿಸಬೇಕು’ ಎಂದು ಆಗ್ರಹಿಸಿದ್ದರು. ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ, ಕಂಬಳಗಳ ಮಾಹಿತಿಯನ್ನು ಸಂಗ್ರಹಿಸಲು ಉಭಯ ಜಿಲ್ಲೆಗಳ ಅಧಿಕಾರಿಗಳಿಗೆ ಸೂಚಿಸಿದ್ದರು.

ಪ್ರವಾಸಿಗರನ್ನು ಆಕರ್ಷಿಸಲು ಯೋಜನೆ:

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಕಂಬಳ ಉತ್ಸವಗಳ ಸ್ಥಳ, ಕಂಬಳದ ಹೆಸರು, ಆಯೋಜಕರ ವಿವರ ಮತ್ತು ಸಂಪರ್ಕ ಸಂಖ್ಯೆಯನ್ನು ಸಂಗ್ರಹಿಸಿರುವ ಅಧಿಕಾರಿಗಳು ಇಲಾಖೆಯ ನಿರ್ದೇಶಕರಿಗೆ ಸಲ್ಲಿಸಿದ್ದಾರೆ. ಈ ಮಾಹಿತಿಯನ್ನು ಇಲಾಖೆಯ ವೆಬ್‌ಸೈಟ್‌ ಹಾಗೂ ಇನ್ನಿತರ ಪ್ರಚಾರ ಸಾಮಗ್ರಿಗಳ ಮೂಲಕ ಪ್ರಕಟಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಕಂಬಳಕ್ಕೆ ಸೆಳೆಯುವಂತೆ ಕೋರಿದ್ದಾರೆ.

‘ತಡವಾಗಿಯಾದರೂ ಸರ್ಕಾರವು ಕಂಬಳ ಕ್ರೀಡೆಗೆ ಉತ್ತೇಜನ ನೀಡಲು ಮುಂದಾಗಿರುವುದು ಸಂತೋಷ ವಿಚಾರ. ಸರ್ಕಾರವೇ ಆಸಕ್ತಿ ವಹಿಸಿದರೆ ಮುಂದಿನ ದಿನಗಳಲ್ಲಿ ಕಂಬಳ ಆಯೋಜಿಸುವವರ ಸಂಖ್ಯೆ ಹಾಗೂ ಕಂಬಳದ ಕೋಣಗಳನ್ನು ಸಾಕುವವರ ಸಂಖ್ಯೆಯೂ ಹೆಚ್ಚಾಗಲಿದೆ’ ಎನ್ನುತ್ತಾರೆ ಜಿಲ್ಲಾ ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಎಡ್ತೂರು ರಾಜೀವ ಶೆಟ್ಟಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT