ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಪಿ.ಜಯರಾಮ್ ಭಟ್ ನಿಧನ

Published 9 ಆಗಸ್ಟ್ 2023, 13:57 IST
Last Updated 9 ಆಗಸ್ಟ್ 2023, 13:57 IST
ಅಕ್ಷರ ಗಾತ್ರ

ಮಂಗಳೂರು: ಕರ್ಣಾಟಕ ಬ್ಯಾಂಕ್‌ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಪಿ. ಜಯರಾಮ್ ಭಟ್ (72) ಬುಧವಾರ ನಿಧನರಾದರು.

ಮುಂಬೈನಿಂದ ಬುಧವಾರ ಮಧ್ಯಾಹ್ನ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದ ಅವರಿಗೆ ವಿಮಾನ ನಿಲ್ದಾಣದಲ್ಲೇ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಂಗಳೂರು ನಿವಾಸಿಯಾಗಿದ್ದ ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕು ಪೊಳಲಿಯ ಅವರು, ಮೈಸೂರು ವಿಶ್ವವಿದ್ಯಾಲಯದಲ್ಲಿ ಎಂ.ಎಸ್ಸಿ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ್‍ಯಾಂಕ್ ಗಳಿಸಿದ್ದರು. 1973ರಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿ ಕರ್ಣಾಟಕ ಬ್ಯಾಂಕ್‌ ಸೇರಿದ್ದ ಅವರು, 1976ರಲ್ಲಿ ಶಾಖಾ ವ್ಯವಸ್ಥಾಪಕರಾಗಿ, ನಂತರ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ 2005ರಲ್ಲಿ ಪ್ರಧಾನ ವ್ಯವಸ್ಥಾಪಕರಾಗಿ ನೇಮಕಗೊಂಡಿದ್ದರು. 2009ರಲ್ಲಿ ಅವರಿಗೆ ಕರ್ಣಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಹುದ್ದೆ ಒಲಿಯಿತು. 2017ರಲ್ಲಿ ಬ್ಯಾಂಕ್‌ನ ಅಧ್ಯಕ್ಷರಾದ ಅವಧಿಯಲ್ಲಿ ಇ-ಲಾಬಿ, ಮೊಬೈಲ್ ಬ್ಯಾಂಕಿಂಗ್, ಪಿಒಎಸ್, ಆನ್‌ಲೈನ್ ಟ್ರೇಡಿಂಗ್ ಅಕೌಂಟ್, ಟ್ರಾವೆಲ್ ಕಾರ್ಡ್, ಇನ್ನೂ ಅನೇಕ ಯೋಜನೆಗಳನ್ನು ಪರಿಚಯಿಸಿ, ಗ್ರಾಹಕರ ಮೆಚ್ಚುಗೆ ಗಳಿಸಿದ್ದರು.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಐದು ದಶಕಗಳ ಅನುಭವ ಹೊಂದಿದ್ದ ಅವರಿಗೆ 20ಕ್ಕೂ ಹೆಚ್ಚು ಪ್ರಶಸ್ತಿಗಳು ಲಭಿಸಿದ್ದವು.

ಗುರುವಾರ (ಆ.10) ಬೆಳಿಗ್ಗೆ 8ರಿಂದ 9 ಗಂಟೆಯವರೆಗೆ ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 10 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT