ಪುತ್ತೂರು: ‘ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಶಾಂತಿ- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಒಂದೂವರೆ ತಿಂಗಳಲ್ಲಿ ಹತ್ತಾರು ಹತ್ಯೆಗಳು ನಡೆದಿದ್ದು, ಸಾರ್ವಜನಿಕರು ಅವರಾಗಿಯೇ ರಕ್ಷಣೆ ಮಾಡಿಕೊಳ್ಳಬೇಕಾದ ಸ್ಥಿತಿ ಇದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಇಲ್ಲಿ ದೂರಿದರು.
ಪುತ್ತೂರಿನ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ವಸ್ವವನ್ನೂ ತ್ಯಾಗ ಮಾಡಿದ ಜೈನ ಮುನಿಗಳ ಹತ್ಯೆಯಾಗಿದೆ. ಬೆಂಗಳೂರಿನಲ್ಲೇ ಉದ್ಯಮಿಗಳ ಕೊಲೆಯಾಗಿದೆ. ರಾಷ್ಟ್ರ ಹಿತದ ಕಾರ್ಯ ಮಾಡುತ್ತಿರುವ ಕಾರ್ಯಕರ್ತರ ಹತ್ಯೆಗಳು ನಡೆದಿವೆ. ಕೂಲಿಗಾಗಿ ಬಂದ ಕಾರ್ಮಿಕರನ್ನು ಮಂಗಳೂರಿನಲ್ಲಿ ಕೊಂದು ಹಾಕಿರುವ ಘಟನೆ ನಡೆದಿದೆ ಎಂದರು.
ವರ್ಗಾವಣೆ ದಂದೆಯಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ನಡೆದಿರುವುದರಿಂದ ಸರ್ಕಾರದ ಮಾತುಗಳನ್ನು ಪೊಲೀಸ್ ಇಲಾಖೆ ಕೇಳುತ್ತಿಲ್ಲ. ವರ್ಗಾವಣೆಗೂ ದರ ನಿಗದಿಯಾಗಿದೆ. ಅದರ ಆಧಾರದಲ್ಲೇ ವರ್ಗಾವಣೆಗಳು ನಡೆಯುತ್ತಿವೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಮಧ್ಯೆಯೇ ಗೊಂದಲ ನಿರ್ಮಾಣವಾಗಿದೆ. ಈ ಕಾರಣಗಳಿಂದ ರಾಜ್ಯದಲ್ಲಿ ಶಾಂತಿ ವ್ಯವಸ್ಥೆ ಹದಗೆಟ್ಟಿದೆ ಎಂದು ಅವರು ಆರೋಪಿಸಿದರು.
ಹತ್ಯೆ, ಕೊಲೆ ಪ್ರಕರಣಗಳು ನಡೆದರೂ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಎಲ್ಲ ಹತ್ಯೆಗಳ ತನಿಖೆಯನ್ನು ಪಾರದರ್ಶಕವಾಗಿ ಮಾಡಬೇಕು ಎಂದು ಆಗ್ರಹಿಸಿದರು. ಈ ಹಿಂದೆಯೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದ್ದಾಗ 24 ಮಂದಿ ಹಿಂದೂ ಕಾರ್ಯಕರ್ತರ ಹತ್ಯೆಯಾಗಿತ್ತು. ಮಂಗಳೂರು, ಮೈಸೂರು ಜೈಲ್‌ನೊಳಗೂ ಕೊಲೆಗಳು ನಡೆದಿದ್ದವು. ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳು ಹೆಚ್ಚಾಗುತ್ತಿದ್ದು, ರೈತರಿಗೆ ಬೇಕಾದ ಸವಲತ್ತುಗಳನ್ನು ಕೊಡುವಲ್ಲಿ ಸರ್ಕಾರ ವಿಫಲವಾಗಿದೆ. ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆ ಜತೆಗೆ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಆರಂಭಿಸಿದ ₹ 4 ಸಾವಿರ ನೀಡುವುದನ್ನೂ ವಾಪಸ್ ಪಡೆದ ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಟೀಕಿಸಿದರು.
ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದ ವೇಳೆ ಅಭಿವೃದ್ಧಿ ಕಾರ್ಯಗಳಿಗಾಗಿ ಸಾವಿರಾರು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿತ್ತು. ಇಂದು ಅವೆಲ್ಲವನ್ನೂ ಸ್ಥಗಿತಗೊಳಿಸಲಾಗಿದೆ. ಇದರಿಂದ ಅಭಿವೃದ್ಧಿ ಕುಂಠಿತವಾಗಿದೆ. ಪಠ್ಯ ಪುಸ್ತಕದಲ್ಲಿನ ಪಾಠಗಳನ್ನು ತೆಗೆಯುವ ಮೂಲಕ, ಮತಾಂತರ ನಿಷೇಧ, ಗೋಹತ್ಯೆ ನಿಷೇಧ ಕಾನೂನುಗಳನ್ನು ವಾಪಸ್ ಪಡೆಯುವ ಪ್ರಯತ್ನಗಳ ಮೂಲಕ ಈ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಅವರು ದೂರಿದರು.
ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರಸಭೆಯ ಮಾಜಿ ಅಧ್ಯಕ್ಷ ಜೀವಂಧರ್ ಜೈನ್, ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಪಕ್ಷದ ಮುಖಂಡರಾದ ಗೋಪಾಲಕೃಷ್ಣ ಹೇರಳೆ, ರಾಜೇಶ್ ಬನ್ನೂರು, ವಿದ್ಯಾ ಆರ್.ಗೌರಿ, ಆರ್.ಸಿ.ನಾರಾಯಣ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.