ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ: ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯ

ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ
Published 2 ಜೂನ್ 2024, 5:50 IST
Last Updated 2 ಜೂನ್ 2024, 5:50 IST
ಅಕ್ಷರ ಗಾತ್ರ

ಮಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ ಹಾಗೂ ಹಣದ ಅಕ್ರಮವ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಘಟಕದವರು ಪಿವಿಎಸ್‌ ವೃತ್ತದ ಬಳಿ ರಸ್ತೆಯಲ್ಲಿ ವಾಹನ ಸಂಚಾರವನ್ನು ತಡೆದು ಶನಿವಾರ ಪ್ರತಿಭಟನೆ ನಡೆಸಿದರು.

ಪಕ್ಷದ ಯುವಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ನಂದನ್‌ ಮಲ್ಯ‌, ‘ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಅಧಿಕಾರಿ ಬರೆದ ಪತ್ರದಲ್ಲಿ ಸಚಿವ ನಾಗೇಂದ್ರ ಹೆಸರು ಉಲ್ಲೇಖಿಸಿದ್ದರು. ಆದರೂ ಸಚಿವರನ್ನು ರಕ್ಷಿಸಲಾಗಿದೆ. ಜೂನ್‌ 6ರೊಳಗೆ ಸಚಿವರು ರಾಜೀನಾಮೆ ಕೊಡದಿದ್ದರೆ ಯುವ ಮೋರ್ಚಾ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಿದೆ’ ಎಂದು ಎಚ್ಚರಿಸಿದರು.

‘ವಾಲ್ಮೀಕಿ ನಿಗಮದ ನೂರಾರು ಕೋಟಿ ರೂಪಾಯಿ ಅನ್ಯ ರಾಜ್ಯಗಳಿಗೆ ವರ್ಗಾವಣೆ ಆಗದ್ದು, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಸಂತ್ರಸ್ತ ಕುಟುಂಬಕ್ಕೆ ₹ 25 ಲಕ್ಷ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.

‘ಶಾಸಕ ಹರೀಶ್‌ ಪೂಂಜ ವಿರುದ್ಧ ತರಾತುರಿಯಲ್ಲಿ ಪ್ರಕರಣ ದಾಖಲಿಸಿದ ಸರ್ಕಾರ, ರಸ್ತೆಯಲ್ಲಿ ನಮಾಜ್‌ ಮಾಡಿದ ಪ್ರಕರಣದಲ್ಲಿ ತರತುರಿಯಲ್ಲಿ ‘ಬಿ’ ವರದಿ ಸಲ್ಲಿಸಿದೆ. ಸರ್ಕಾರಿ ನೌಕರ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಲು ಮೀನಮೇಷ ಎಣಿಸುತ್ತಿದೆ’ ಎಂದರು.

ಯುವ ಮೋರ್ಚಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಉಮೇಶ್‌ ಕುಲಾಲ್‌, ಪ್ರಮುಖರಾದ ಅಶ್ವಿತ್‌ ಕೊಟ್ಟಾರಿ, ಮೌನೇಶ್‌ ಚೌಟ, ಯಶ್‌ಪಾಲ್‌ ಸಾಲ್ಯಾನ್‌,ಪ್ರಕಾಶ್‌ ಗರೋಡಿ, ಪ್ರಮೋದ್‌ ಕರ್ಕೇರ, ಮುರಳೀಧರ್‌ ಕೊಣಾಜೆ, ಆಶಿತ್‌, ಪ್ರೀತಮ್‌, ಅವಿನಾಶ್‌,  ಸುರೇಶ್‌ ಕೋಟ್ಯಾನ್‌, ಭವಿಷ್‌ ಶೆಟ್ಟಿ, ಜೀತೇಶ್‌, ಮಿಥುನ್‌ ಭಂಡಾರಿ, ಸಾಕ್ಷತ್‌ ಶೆಟ್ಟಿ, ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT