ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಮನೆ ಮನೆಗೆ ಲಸಿಕಾಮಿತ್ರ 10ರಿಂದ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಸಹಕಾರದಲ್ಲಿ ಲಸಿಕಾ ಅಭಿಯಾನ
Last Updated 8 ನವೆಂಬರ್ 2021, 15:46 IST
ಅಕ್ಷರ ಗಾತ್ರ

ಮಂಗಳೂರು: ಈಗಾಗಲೇ ಪ್ರಥಮ ಡೋಸ್ ಪಡೆದು, ಎರಡನೇ ಡೋಸ್‌ಗೆ ಬಾಕಿ ಉಳಿದಿರುವ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಕೋವಿಡ್ ಲಸಿಕೆ ನೀಡುವ ‘ಮನೆ ಮನೆಗೆ ಲಸಿಕಾ ಮಿತ್ರ’ ಅಭಿಯಾನಕ್ಕೆ ನವೆಂಬರ್ 10ರಂದು ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದರು.

ಮಂಗಳೂರು ಮಹಾನಗರ ಪಾಲಿಕೆಯ ಕೋವಿಡ್ ವಾರ್ ರೂಂನಲ್ಲಿ ಸೋಮವಾರ ನಡೆದ ಮನೆ ಮನೆಗೆ ಲಸಿಕಾ ಅಭಿಯಾನದ ಪೂರ್ವ ಸಿದ್ಧತೆ ಸಭೆಯಲ್ಲಿ ಅವರು ಮಾತನಾಡಿದರು. ಈ ಅಭಿಯಾನಕ್ಕೆ ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಮಂಗಳೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸ್ವಯಂ ಸೇವಾ ಯೋಜನೆಯ ಕಾರ್ಯಕರ್ತರು ಕೈಜೋಡಿಸಿದ್ದಾರೆ. ಎರಡನೇ ಡೋಸ್ ಲಸಿಕೆ ಪಡೆಯದ ಫಲಾನುಭವಿಗಳ ಮನೆಗೆ ತೆರಳಿ, ಲಸಿಕೆಯ ಮಹತ್ವ ತಿಳಿಸುವ ಜತೆಗೆ ಲಸಿಕೆ ಪಡೆಯುವಂತೆ ಅವರಿಗೆ ತಿಳಿವಳಿಕೆ ನೀಡಲಿದ್ದಾರೆ. ಆ ಮೂಲಕ ಜಿಲ್ಲೆಯನ್ನು ಸಂಪೂರ್ಣ ಕೋವಿಡ್ ಲಸಿಕಾ ಜಿಲ್ಲೆಯನ್ನಾಗಿ ಮಾಡಲಾಗುವುದು ಎಂದು ಹೇಳಿದರು.

ನ.10ರಂದು ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಮುಂದಿನ ಹಂತದಲ್ಲಿ ಜಿಲ್ಲೆಯಾದ್ಯಂತ ಈ ಅಭಿಯಾನ ಆರಂಭವಾಗಲಿದೆ. ಅಭಿಯಾನದಲ್ಲಿ ಭಾಗವಹಿಸುವ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಸ್ವಯಂ ಸೇವಕರಿಗೆ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.

ಕೋವಿಡ್ ಜಿಲ್ಲಾ ನೋಡಲ್ ಅಧಿಕಾರಿ ಡಾ. ಅಶೋಕ್ ಕುಮಾರ್, ಮಹಾನಗರ ಪಾಲಿಕೆಯ ಕೋವಿಡ್ ವಿಭಾಗದ ನೋಡಲ್ ಅಧಿಕಾರಿ ಡಾ. ಅಣ್ಣಯ್ಯ ಕುಲಾಲ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಉಳೆಪಾಡಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸುಜಯ್, ಮಂಗಳೂರು ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ನಾಗರತ್ನಾ ಹಾಗೂ ನಗರ ವ್ಯಾಪ್ತಿಯ ಎಲ್ಲ ಎನ್‌ಎಸ್‌ಎಸ್ ಘಟಕದ ಸಂಯೋಜನಾಧಿಕಾರಿಗಳು ಸಭೆಯಲ್ಲಿ ಇದ್ದರು.

ಸಾರ್ವಜನಿಕರು ಸಹಕರಿಸಲು ವಿನಂತಿ
ಎನ್‌ಎಸ್‌ಎಸ್ ಸ್ವಯಂ ಸೇವಕರು ಮನೆಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಸಾರ್ವಜನಿಕರು ಸಹಕರಿಸಬೇಕು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಸುತ್ತಿರುವ ಲಸಿಕಾ ಅಭಿಯಾನದ ಯಶಸ್ಸಿಗೆ ಕೈ ಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್‌ಕುಮಾರ್ ವಿನಂತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT