ಶುಕ್ರವಾರ, ಜುಲೈ 30, 2021
25 °C
ಮಧ್ಯಾಹ್ನ 2 ಗಂಟೆವರೆಗೆ ಖರೀದಿಗೆ ಅವಕಾಶ

ಮಾರ್ಗಸೂಚಿ ಉಲ್ಲಂಘನೆ ಆಗದಂತೆ ನೋಡಿಕೊಳ್ಳಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಕೋವಿಡ್-19 ಮಾರ್ಗಸೂಚಿ ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕು. ಜೊತೆಗೆ ನಿತ್ಯ ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಾಣಿಜ್ಯ ಚಟುವಟಿಕೆ ಕೈಗೊಳ್ಳಲು ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಮಂಗಳವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಾದ್ಯಂತ ಕೋವಿಡ್–19 ಸೋಂಕು ಗಣನೀಯವಾಗಿ ಕಡಿಮೆ ಆಗುವವರೆಗೆ ಜಿಲ್ಲೆಯಲ್ಲಿ ನಿರ್ದಿಷ್ಟ ಚಟುಚಟಿಗಳು ನಡೆಯದಂತೆ ನೋಡಿ ಕೊಳ್ಳುವುದು ಒಳಿತು. ಪ್ರಸ್ತುತ ಜಿಲ್ಲೆಗೆ ಸರ್ಕಾರ ಸೂಚಿಸಿರುವ ಮಾರ್ಗಸೂಚಿ ಯನ್ನು ತಪ್ಪದೇ ಅನುಷ್ಠಾನ ಮಾಡುವು ದರೊಂದಿಗೆ ಕೋವಿಡ್–19 ನಿಯಂತ್ರಣ ಕ್ಕೆ ಮುಂದಾಗಬೇಕು ಎಂದರು.

ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ರಿಂದ ಸೋಮವಾರ ಬೆಳಿಗ್ಗೆ 7 ಗಂಟೆಯವರೆಗೆ ಪೂರ್ಣ ಪ್ರಮಾಣದ ಲಾಕ್‌ಡೌನ್ ಮಾಡಲಾಗುವುದು. ಹಾಲಿನ ಮಾರಾಟ ಕೇಂದ್ರಗಳನ್ನು ತೆರೆಯಲು ಮಾತ್ರ ಈ ಸಮಯದಲ್ಲಿ ಅವಕಾಶ ಮಾಡಿಕೊಡಲಾಗುವುದು. ಇತರೆ ಯಾವುದೇ ಚಟುಚಟಿಕೆಗಳಿಗೆ ಅವಕಾಶವಿಲ್ಲ ಎಂದು ತಿಳಿಸಿದರು.

ಮದುವೆ ಹಾಗೂ ಸಮಾರಂಭಗಳಲ್ಲಿ 25 ಜನರಿಗೆ ಸೀಮಿತಗೊಳಿಸಿ ಮನೆಯಲ್ಲಿಯೇ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ. ಯಾವುದೇ ಧಾರ್ಮಿಕ ಕೇಂದ್ರ, ಕಲ್ಯಾಣ ಮಂಟಪ ಹಾಗೂ ಇತರೆ ಭವನಗಳಲ್ಲಿ ಸಮಾರಂಭಗಳನ್ನು ನಡೆಸಲು ಅವಕಾಶವಿಲ್ಲ ಎಂದರು.

ತಾಲ್ಲೂಕು ಕೇಂದ್ರಗಳು ಸೇರಿದಂತೆ ನಗರ ಪ್ರದೇಶದೊಳಗೆ ಓಡಾಡಲು ಅನುಕೂಲವಾಗುವಂತೆ ಕೆಎಸ್ಆರ್‌ಟಿಸಿ ಬಸ್‌ಗಳ ಸಂಚಾರಕ್ಕೆ ಮಧ್ಯಾಹ್ನ 1 ಗಂಟೆವರೆಗೆ ಅವಕಾಶ ನೀಡಲಾಗಿದೆ. ಶೇ 50 ರಷ್ಟು ಜನರಿಗೆ ಪ್ರಯಾಣಿಸಲು ಅವಕಾಶ ನೀಡಲಾಗುವುದು. ಬಸ್‌ನಲ್ಲಿ ಸಂಚರಿಸುವವರು ಕಡ್ಡಾಯವಾಗಿ ಮಾಸ್ಕ್‌ ಧರಿಸುವ ಷರತ್ತಿನ ಅನ್ವಯ ಅನುಮತಿ ನೀಡಬೇಕು ಎಂದರು.

ಶಾಸಕರಾದ ಉಮಾನಾಥ್ ಕೋಟ್ಯಾನ್, ವೇದವ್ಯಾಸ್ ಕಾಮತ್, ಡಾ.ವೈ.ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಪ್ರತಾಪ್‍ಚಂದ್ರ ಶೆಟ್ಟಿ, ಹರೀಶ್ ಕುಮಾರ್, ಮೇಯರ್ ಪ್ರೇಮಾನಂದ ಶೆಟ್ಟಿ, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ, ಡಿಸಿಪಿ ಹರಿರಾಂ ಶಂಕರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಇದ್ದರು.

ದಿನವಿಡೀ ಗೊಂದಲದ ಗೂಡು

ಲಾಕ್‌ಡೌನ್‌ ನಿರ್ಬಂಧ ಸಡಿಲಿಕೆಯ ಕುರಿತಂತೆ ಮಂಗಳವಾರವಿಡೀ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬೆಳಿಗ್ಗೆ 7 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಎಲ್ಲ ಅಂಗಡಿ ತೆರೆಯಲು ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದರು.

ಆದರೆ, ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಹೊರಡಿಸಿದ್ದ ಆದೇಶದಲ್ಲಿ ಬೆಳಿಗ್ಗೆ 6 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಅಂಗಡಿ ತೆರೆಯಲು ಅವಕಾಶ ನೀಡಲಾಗಿತ್ತು. ಮತ್ತೆ ಮುಖ್ಯಮಂತ್ರಿ ಜೊತೆ ಚರ್ಚಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸರಿಪಡಿಸಲು ಮನವಿ ಮಾಡಿದರು.

ಕೊನೆಗೆ ಜಿಲ್ಲಾಧಿಕಾರಿ ಪರಿಷ್ಕೃತ ಆದೇಶ ಹೊರಡಿಸಿ, ಬೆಳಿಗ್ಗೆ 7 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿರುವುದಾಗಿ ಸ್ಪಷ್ಟಪಡಿಸಿದರು.

‘ಕೋವಿಡ್ ಪರೀಕ್ಷೆ ಹೆಚ್ಚಳ’

ಜಿಲ್ಲೆಯಲ್ಲಿ 9ಸಾವಿರದಿಂದ 10ಸಾವಿರದವರೆಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ. ಇದಕ್ಕೆ ಸ್ಥಳೀಯ ಜನಪ್ರತಿನಿಧಿಗಳು ಸಹಕರಿಸಿ, ಹೆಚ್ಚು ಪರೀಕ್ಷೆ ಆಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮನವಿ ಮಾಡಿದರು.

ಜಿಲ್ಲೆಗೆ 23ಸಾವಿರ ಡೋಸ್‌ ಕೋವಿಡ್ ಲಸಿಕೆ ಬರುತ್ತಿದ್ದು, ಬಂದ ಲಸಿಕೆಯನ್ನು ಆ ದಿನವೇ ಪೂರ್ಣ ಪ್ರಮಾಣದಲ್ಲಿ ನೀಡಬೇಕು. 18 ವರ್ಷ ಮೇಲಿನ ಆದ್ಯತಾ ವಲಯದ ಪ್ರತಿಯೊಬ್ಬರಿಗೂ ಲಸಿಕೆಯನ್ನು ನೀಡಬೇಕು ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು