ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ | ನಳಿನ್‌ಗೆ ಕೊಕ್: ನಿವೃತ್ತ ಸೇನಾಧಿಕಾರಿಗೆ ಬಿಜೆಪಿ ಟಿಕೆಟ್

Published 14 ಮಾರ್ಚ್ 2024, 0:11 IST
Last Updated 14 ಮಾರ್ಚ್ 2024, 0:11 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಹಾಲಿ ಸಂಸದ ನಳಿನ್‌ಕುಮಾರ್ ಕಟೀಲ್ ಅವರನ್ನು ಕೈಬಿಟ್ಟ ಬಿಜೆಪಿ, ನಿವೃತ್ತ ಸೇನಾಧಿಕಾರಿ ಕ್ಯಾಪ್ಟನ್ ಬೃಜೇಶ್ ಚೌಟ (42) ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ.

ಬಾಲ್ಯದಿಂದ ಆರ್‌ಎಸ್‌ಎಸ್‌ ನಂಟು ಹೊಂದಿರುವ ಚೌಟ, ನಂತರ ಭೂಸೇನೆಗೆ ಸೇರಿ, ಎಂಟನೇ ಗೋರ್ಖಾ ರೈಫಲ್ಸ್ 7ನೇ ಬೆಟಾಲಿಯನ್‌ನಲ್ಲಿ ಉತ್ತರ ಭಾರತ ಮತ್ತು ಈಶಾನ್ಯ ರಾಜ್ಯಗಳಲ್ಲಿ ಸೇವೆ ಸಲ್ಲಿಸಿ ಕ್ಯಾಪ್ಟನ್ ಹುದ್ದೆಗೇರಿದ್ದರು.

ಸ್ವಯಂ ನಿವೃತ್ತಿಯ ಬಳಿಕ ಮಂಗಳೂರಿಗೆ ಬಂದು ಸಂಘ ಪರಿವಾರದ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಬಿಜೆಪಿ ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸಂಸದ ನಳಿನ್ ಕುಮಾರ್ ಜೊತೆ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.

ಮಂಗಳೂರಿನ ರಥಬೀದಿಯ ನಿವಾಸಿ ಬೃಜೇಶ್ ಚೌಟ, ಕಾಲೇಜು ದಿನಗಳಲ್ಲಿಯೇ ಎನ್‌ಸಿಸಿಯಲ್ಲಿದ್ದು, ಮಂಗಳೂರು ವಿವಿಯಲ್ಲಿ ಅತ್ಯುತ್ತಮ ಕೆಡೆಟ್ ಎಂಬ ಹೆಗ್ಗಳಿಕೆ ಪಡೆದಿದ್ದರು. ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ಬಿಎಸ್ಸಿ ಪದವಿ ಪೂರೈಸಿ, ನಂತರ ಮಧ್ಯಪ್ರದೇಶದ ಇಂದೋರ್ ಐಐಎಂನಲ್ಲಿ ಉನ್ನತ ಶಿಕ್ಷಣ ಪಡೆದಿದ್ದಾರೆ.

ಕರಾವಳಿಯ ಜನಪದ ಕ್ರೀಡೆ ಕಂಬಳ ನಿಷೇಧಕ್ಕೊಳಗಾದ ಸಂದರ್ಭದಲ್ಲಿ ಅದರ ವಿರುದ್ಧ ಹೋರಾಟ ಸಂಘಟಿಸಿದವರಲ್ಲಿ ಬೃಜೇಶ್ ಚೌಟ ಕೂಡ ಒಬ್ಬರು. ಏಳು ವರ್ಷಗಳಿಂದ ‘ಮಂಗಳೂರು ಕಂಬಳ’ ಸಂಘಟಿಸುತ್ತ ಬಂದಿದ್ದಾರೆ.

ಪ್ರಸ್ತುತ ಬಿಜೆಪಿ ಘಟಕದ ಕಾರ್ಯದರ್ಶಿಯಾಗಿರುವ ಬೃಜೇಶ್ ಚೌಟ, ಬಂಟ ಸಮುದಾಯದ ಗುತ್ತಿನ ಮನೆಗೆ ಸೇರಿದವರು, ಅವಿವಾಹಿತರು.

‘ಪ್ರತಿಷ್ಠಿತ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ನನಗೆ ಟಿಕೆಟ್ ನೀಡಿದ್ದಕ್ಕೆ ಪಕ್ಷದ ಪ್ರಮುಖರಿಗೆ ಧನ್ಯವಾದ ಸಲ್ಲಿಸುತ್ತೇನೆ. ಹಿಂದುತ್ವವೇ ಬದ್ಧತೆ, ಅಭಿವೃದ್ಧಿಯೇ ಆದ್ಯತೆ ಎಂಬ ಮೂಲಮಂತ್ರದೊಂದಿಗೆ ಕೆಲಸ ಮಾಡುತ್ತೇನೆ’ ಎಂದು  ಬೃಜೇಶ್ ಚೌಟ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT