ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನಕ್ಕೂ ಮೊದಲೇ ಕಾಂಗ್ರೆಸ್‌ಗೆ ಹತಾಶೆ: ಶಾಸಕ ಪೂಂಜ

Published 28 ಮಾರ್ಚ್ 2024, 4:45 IST
Last Updated 28 ಮಾರ್ಚ್ 2024, 4:45 IST
ಅಕ್ಷರ ಗಾತ್ರ

ಮಂಗಳೂರು: 'ಪ್ರಧಾನಿ ನರೇಂದ್ರ ಮೋದಿಯವರಿಗೆ ಜೈಕಾರ ಹಾಕುವ ಯುವಕರ ಕಪಾಳಕ್ಕೆ ಹೊಡೆಯಿರಿ’ ಎಂದು ಸಚಿವ ಶಿವರಾಜ ತಂಗಡಗಿಯವರು ಹೇಳಿಕೆ ನೀಡಿರುವುದು ಕಾಂಗ್ರೆಸ್‌ನ ಹತಾಶೆಯ ಪ್ರತೀಕ. ಮತದಾನಕ್ಕೂ ಮೊದಲೇ ಕಾಂಗ್ರೆಸ್ ಸೋಲನ್ನು ಒಪ್ಪಿಕೊಂಡಿದೆ’ ಎಂದು ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಹೇಳಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಸಚಿವ ತಂಗಡಗಿ ಹೇಳಿಕೆಯನ್ನು ಖಂಡಿಸುತ್ತೇನೆ.  ಪರಿಶಿಷ್ಟ ಸಮುದಾಯದ ಅಭಿವೃದ್ಧಿಗೆ ಕಳೆದ ವರ್ಷ ಮೀಸಲಿಟ್ಟ ₹ 11 ಸಾವಿರ ಕೋಟಿಯನ್ನು ಸರ್ಕಾರ ಬಿಟ್ಟಿ ಭಾಗ್ಯಗಳಿಗೆ ಬಳಸಿದೆ. ಸ್ವತಃ ಹಿಂದುಳಿದ ಸಮುದಾಯಕ್ಕೆ ಸೇರಿದ ಸಚಿವರಿಗೆ ಸರ್ಕಾರದ ಈ ನಿರ್ಲಕ್ಷ್ಯವನ್ನು ಸರಿಪಡಿಸಲು ಸಾಧ್ಯವಾಗಿಲ್ಲ’ ಎಂದು ಟೀಕಿಸಿದರು.

‘ಕಾಂಗ್ರೆಸ್‌ ಸ್ಥಿತಿಯು ಹಿರಿಯಕ್ಕನ ಚಾಳಿ ಮನೆಮಂದಿಗೆಲ್ಲಾ ಎಂಬಂತಾಗಿದೆ. ಮೊದಲು ಸೋನಿಯಾ ಗಾಂಧಿಯವರು, ಮೋದಿಯವರನ್ನು ಸಾವಿನ ವ್ಯಾಪಾರಿ ಎಂದಿದ್ದರು. ಬಳಿಕ ಮಲ್ಲಿಕಾರ್ಜುನ ಖರ್ಗೆಯವರು ಮೋದಿ ವಿಷ ಸರ್ಪ ಎಂದರು.  ಸಿದ್ದರಾಮಯ್ಯನವರಂತೂ ಏಕವಚನದಲ್ಲೇ  ಮಾತನಾಡುತ್ತಾರೆ. ಈಗ ಸಚಿವ ಶಿವರಾಜ್ ತಂಗಡಗಿ ಹೇಳಿಕೆ ನೀಡಿದ್ದು, ಇದು ಆತಂಕಕಾರಿ ಬದಲಾವಣೆ’ ಎಂದರು.

‘ಮೋದಿ ಆಡಳಿತಾವಧಿಯಲ್ಲಿ ನಿರುದ್ಯೋಗದ ಪ್ರಮಾಣ ಶೇ 4.7% ರಷ್ಟು ಕಡಿಮೆಯಾಗಿದೆ. ತಂತ್ರಜ್ಞಾನ ಆಧರಿತ ನವೋದ್ಯಮಗಳಿಂದಾಗಿ, ಯುವಜನರಿಗೆ ಉದ್ಯೋಗ ದೊರಕಿದೆ. ಮೊದಲ ಬಾರಿಗೆ ಮತ ಚಲಾಯಿಸಲಿರುವ 1.84 ಕೋಟಿ ಯುವಜನರು ಮೋದಿಯವರ ಬಗ್ಗೆ ಒಳ್ಳೆಯ ಮಾತನಾಡುತ್ತಿದ್ದಾರೆ.  ಅವರ ಉತ್ಸಾಹವನ್ನು ಕಾಂಗ್ರೆಸ್ಸಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ’ ಎಂದರು.

‘2022-23 ರಲ್ಲಿ 5.20 ಲಕ್ಷ ಯುವಕರು ಪದವಿ ಪಡೆದಿದ್ದಾರೆ. ಆದರೆ ಕಾಂಗ್ರೆಸ್ಸಿನ ಯುವನಿಧಿ ಯೋಜನೆಯಡಿ ಕೇವಲ 3,500 ಯುವಕರಿಗೆ ನೆರವು ಸಿಕ್ಕಿದೆ’ ಎಂದರು. 

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ , ಯುವ ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷ ನಂದನ್ ಮಲ್ಯ,  ಪ್ರಧಾನ ಕಾರ್ಯದರ್ಶಿ ಭರತ್ ರಾಜ್ ಕೃಷ್ಣಾಪುರ, ಉಪಾಧ್ಯಕ್ಷ ಅಶ್ರಿತ್ ನೋಂಡ, ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ ಪೂಜಾರಿ ಹಾಗೂ ಸಹ ಸಂಚಾಲಕ ಮನೋಹರ್ ಶೆಟ್ಟಿ ಕದ್ರಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT