ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಚಾರಕ್ಕೆ ಮುಕ್ತಗೊಂಡ ಗುರುಪುರ ಸೇತುವೆ

ಮಂಗಳೂರು– ಮೂಡುಬಿದಿರೆ ನಡುವಣ ಪ್ರಯಾಣ ಮತ್ತಷ್ಟು ಸಲೀಸು
Last Updated 12 ಜೂನ್ 2020, 16:08 IST
ಅಕ್ಷರ ಗಾತ್ರ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುರುಪುರ ಬಳಿ ಫಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹೊಸ ಸೇತುವೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಶುಕ್ರವಾರ ಸಂಚಾರಕ್ಕೆ ಮುಕ್ತಗೊಳಿಸಿದರು.

2019ರ ಫೆಬ್ರುವರಿಯಲ್ಲಿ ಕಾಮಗಾರಿಗೆ ಅಧಿಕೃತವಾಗಿ ಚಾಲನೆ ನೀಡಲಾಗಿತ್ತು. ಕಾಮಗಾರಿಯ ಅವಧಿ 2021ರ ಫೆಭ್ರುವರಿಯವರೆಗೂ ಇತ್ತು. ಆದರೆ, ಗುತ್ತಿಗೆದಾರರು ಅವಧಿಗೂ ಮೊದಲೇ ಕಾಮಗಾರಿಯನ್ನು ಪೂರ್ಣಗೊಳಿಸಿದ್ದಾರೆ. ಮಳೆಗಾಲಕ್ಕೂ ಮೊದಲೇ ಸೇತುವೆ ಸಂಚಾರಕ್ಕೆ ಮುಕ್ತಗೊಂಡಿರುವುದರಿಂದ ಮಂಗಳೂರು– ಮೂಡುಬಿದಿರೆ ನಡುವೆ ಸಂಚರಿಸುವವರಿಗೆ ಹೆಚ್ಚಿನ ಅನುಕೂಲವಾಗಲಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವ ವಾಹನಗಳು ಬ್ರಿಟಿಷರ ಕಾಲದಲ್ಲಿ ನಿರ್ಮಿಸಿದ್ದ ಕಿರಿದಾದ ಸೇತುವೆಯಲ್ಲೇ ನದಿಯನ್ನು ದಾಟಬೇಕಿತ್ತು. ಇದರಿಂದಾಗಿ ಯಾವಾಗಲೂ ಗುರುಪುರ ಸೇತುವೆಯ ಎರಡೂ ತುದಿಗಳಲ್ಲಿ ವಾಹನ ದಟ್ಟಣೆ ಇರುತ್ತಿತ್ತು. ಈಗ 16 ಮೀಟರ್‌ ಅಗಲ ಮತ್ತು 175 ಮೀಟರ್‌ ಉದ್ದವಿರುವ ಬೃಹತ್‌ ಸೇತುವೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.

ಮಾದರಿ ಕಾಮಗಾರಿ: ಸೇತುವೆ ಉದ್ಘಾಟಿಸಿ ಮಾತನಾಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ‘ಗುರುಪುರ ಸೇತುವೆ ಕಾಮಗಾರಿಯು ನಿಗದಿತ ಅವಧಿಗಿಂತ ಮೊದಲೇ ಪೂರ್ಣಗೊಂಡಿದೆ. ಇದು ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದಿರುವ ಒಂದು ಮಾದರಿ ಕಾಮಗಾರಿಯಾಗಿದೆ. ಈ ಕೆಲಸ ಗ್ರಾಮ ಸ್ವರಾಜ್ಯ ಮತ್ತು ರಾಮ ರಾಜ್ಯದ ಕಲ್ಪನೆಗಳಿಗೆ ಪೂರಕವಾಗಿದೆ. ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು ಕಾರಣರಾದ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹಾಗೂ ಸ್ಥಳೀಯ ಶಾಸಕರು ಅಭಿನಂದನೆಗೆ ಅರ್ಹರು’ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಮಾತನಾಡಿ, ‘ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳು. ಈಗ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಕಾರ್ಕಳ‍– ಕುಲಶೇಖರ ನಡುವೆ ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ಅದನ್ನೂ ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ಮಂಗಳೂರು– ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ತ್ವರಿತಗೊಳಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದರು.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ವೈ.ಭರತ್‌ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್‌ ಮಿಜಾರು, ಜಿಲ್ಲಾ ಪಂಚಾಯಿತಿ ಸದಸ್ಯ ಯು.ಪಿ.ಇಬ್ರಾಹಿಂ, ತಾಲ್ಲೂಕು ಪಂಚಾಯಿತಿ ಸದಸ್ಯ ಸಚಿನ್‌, ಗುರುಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಉದಯ ಭಟ್‌, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ ಮೂಡುಬಿದಿರೆ, ಲೋಕೋಪಯೋಗಿ ಇಲಾಖೆಯ ರಾಷ್ಟ್ರೀಯ ಹೆದ್ದಾರಿ ವಿಭಾಗದ ಮಂಗಳೂರು ವೃತ್ತದ ಕಾರ್ಯನಿರ್ವಾಹಕ ಎಂಜಿನಿಯರ್‌ ಜಿ.ಎನ್‌. ಹೆಗಡೆ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ರಮೇಶ್‌, ಸೆಕ್ಷನ್‌ ಅಧಿಕಾರಿಗಳಾದ ಕೇಶವಮೂರ್ತಿ, ಕೀರ್ತಿ ಅಮೀನ್‌ ಇದ್ದರು. ಗುತ್ತಿಗೆದಾರರದ ಮೊಗರೋಡಿ ಕನ್‌ಸ್ಟ್ರಕ್ಷನ್ಸ್‌ನ ಮಾಲೀಕ ಸುಧಾಕರ ಶೆಟ್ಟಿ ಅವರನ್ನು ಈ ಸಂದರ್ಭದಲ್ಲಿ ಸಚಿವರು ಮತ್ತು ಸಂಸದರು ಸನ್ಮಾನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT