ಸೋಮವಾರ, ಜೂಲೈ 6, 2020
24 °C

ಮಂಗಳೂರು: ಡಿ.ಕೆ.ಶಿವಕುಮಾರ್ ಪದಗ್ರಹಣಕ್ಕೆ ಜಿಲ್ಲೆಯ 329 ಸ್ಥಳಗಳಲ್ಲಿ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಮಂಗಳೂರು: ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಜುಲೈ 2ರಂದು ಪದಗ್ರಹಣ ಮಾಡಲಿದ್ದು, ಆ ದಿನ ದಕ್ಷಿಣ ಕನ್ನಡ ಜಿಲ್ಲೆಯ 329 ಸ್ಥಳಗಳಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಕೆ.ಹರೀಶ್‌ ಕುಮಾರ್‌ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೋವಿಡ್‌–19 ಸೋಂಕಿನ ಕಾರಣದಿಂದ ಬೃಹತ್‌ ಸಮಾವೇಶ ನಡೆಸಲು ಸಾಧ್ಯವಾಗುತ್ತಿಲ್ಲ. ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ 150 ಮಂದಿ ಹಿರಿಯ ಮುಖಂಡರ ಉಪಸ್ಥಿತಿಯಲ್ಲಿ ಶಿವಕುಮಾರ್‌ ಪದಗ್ರಹಣ ಮಾಡುವರು. ಅದೇ ಸಮಯದಲ್ಲಿ ರಾಜ್ಯದಾದ್ಯಂತ 7,831 ಸ್ಥಳಗಳಲ್ಲಿ ಕಾರ್ಯಕ್ರಮಗಳು ನಡೆಯಲಿವೆ’ ಎಂದರು.

ಎಲ್ಲ ಜಿಲ್ಲಾ ಮತ್ತು ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಕಚೇರಿಗಳು, ಮಹಾನಗರ ಪಾಲಿಕೆಗಳ ಎಲ್ಲ ವಾರ್ಡ್‌ಗಳಲ್ಲಿ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ತಲಾ ಐದು ವಾರ್ಡ್‌ಗಳಲ್ಲಿ, ಪ್ರತಿ ಗ್ರಾಮ ಪಂಚಾಯಿತಿಯ ತಲಾ ಒಂದು ಕಡೆ ಕಾರ್ಯಕ್ರಮ ಆಯೋಜಿಸಲು ಪಕ್ಷದ ವರಿಷ್ಠರು ಸೂಚಿಸಿದ್ದಾರೆ. ಅದರಂತೆ, ಜಿಲ್ಲೆಯಲ್ಲಿ 329 ಕಡೆ ಏಕಕಾಲಕ್ಕೆ ಕಾರ್ಯಕ್ರಮಗಳು ನಡೆಯಲಿವೆ ಎಂದು ವಿವರಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆಯುವ ಮಾದರಿಯಲ್ಲೇ ಎಲ್ಲ ಕಡೆಗಳಲ್ಲೂ ಕಾರ್ಯಕ್ರಮಗಳು ನಡೆಯಲಿವೆ. ಪಕ್ಷದ ಎಲ್ಲ ಕಾರ್ಯಕರ್ತರು ಸಂವಿಧಾನದ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ. ಎಲ್ಲ ಸ್ಥಳಗಳಲ್ಲಿ ಕೆಪಿಸಿಸಿ ಕಚೇರಿಯಲ್ಲಿ ನಡೆಯುವ ಪ್ರಧಾನ ಸಮಾರಂಭದ ವೀಕ್ಷಣೆಗೆ ಟಿ.ವಿ ವ್ಯವಸ್ಥೆ ಮಾಡಲಾಗುವುದು. ಮತ್ತೊಂದು ಟಿ.ವಿ ಅಥವಾ ಎಲ್‌ಇಡಿ ಪರದೆ
ಬಳಸಿ ಸ್ಥಳೀಯ ಕಾರ್ಯಕ್ರಮವನ್ನು ಕೆಪಿಸಿಸಿ ಕಚೇರಿಯಲ್ಲಿ ವೀಕ್ಷಿಸುವುದಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದರು.

ಮಾಜಿ ಸಚಿವ ಬಿ.ರಮಾನಾಥ ರೈ, ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮಿಥುನ್ ರೈ, ಪಕ್ಷದ ಮುಖಂಡರಾದ ಸದಾಶಿವ ಉಳ್ಳಾಲ್‌, ಸಂತೋಷ್‌ ಕುಮಾರ್‌ ಶೆಟ್ಟಿ, ಟಿ.ಕೆ.ಸುಧೀರ್‌ ಪತ್ರಿಕಾಗೋಷ್ಠಿಯಲ್ಲಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು