ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣಕನ್ನಡದಲ್ಲಿ ಸೆಮಿ ಲಾಕ್‌ಡೌನ್‌: 2 ವಾರ ಧಾರ್ಮಿಕ ಕೇಂದ್ರಕ್ಕೆ ಪ್ರವೇಶವಿಲ್ಲ

ಇಂದು ಜನಪ್ರತಿನಿಧಿಗಳ ಜೊತೆ ಚರ್ಚೆ: ಡಿಸಿ
Last Updated 20 ಜೂನ್ 2021, 6:04 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಮಿ ಲಾಕ್‌ಡೌನ್ ಮಾದರಿಯಲ್ಲಿ ಬಿಗಿ ಕ್ರಮ ಮುಂದುವರಿಸುವ ಕುರಿತು ಜನಪ್ರತಿನಿಧಿಗಳ ಜೊತೆ ಚರ್ಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲಾಕ್‌ಡೌನ್ ತೆರವು ಕುರಿತಂತೆ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ಅದರಲ್ಲಿ ಜೂನ್‌ 11ರಂದು ಹೊರಡಿಸಿದ ಮಾರ್ಗಸೂಚಿಯನ್ನು ಪಾಲಿಸುವಂತೆ ತಿಳಿಸಲಾಗಿದೆ. ಹಾಗಾಗಿ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿಪಡಿಸಲಾಗಿದೆ’ ಎಂದರು.

ಅದಾಗ್ಯೂ ಹಂತ ಹಂತವಾಗಿ ಲಾಕ್‌ಡೌನ್ ತೆರವುಗೊಳಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ಇನ್ನೊಂದು ವಾರದಲ್ಲಿ ಕಟ್ಟುನಿಟ್ಟಾಗಿ ಎಲ್ಲರೂ ಕೋವಿಡ್ ನಿಯಮ ಪಾಲಿಸಿದರೆ ಪಾಸಿಟಿವಿಟಿ ದರ ಇಳಿಕೆಯಾಗುವ ಸಾಧ್ಯತೆ ಇದೆ. ಅದರೊಂದಿಗೆ ಕೆಲವು ಸೇವೆ, ಸೌಲಭ್ಯದ ಕುರಿತು ವಿನಾಯಿತಿ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಧಾರ್ಮಿಕ ಕೇಂದ್ರಗಳಿಗೆ ಪ್ರವೇಶವಿಲ್ಲ: ಜಿಲ್ಲೆಯಲ್ಲಿ ಜಾರಿಯಲ್ಲಿರುವ ಕೋವಿಡ್-19 ಮಾರ್ಗಸೂಚಿಗಳ ಅನ್ವಯ ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳೂ ಒಳಗೊಂಡಂತೆ ಜಿಲ್ಲೆಯ ಎಲ್ಲ ಧಾರ್ಮಿಕ ಕೇಂದ್ರಗಳಿಗೆ ಸಾರ್ವಜನಿಕ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತವು ಎಲ್ಲ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಕಟ್ಟುನಿಟ್ಟಿನ ನಿರ್ಬಂಧಗಳ ಪರಿಣಾಮಕಾರಿ ಅನುಷ್ಠಾನದಿಂದಾಗಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದರೂ ಸಕ್ರಿಯ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದು, ಈ ಸಾಂಕ್ರಾಮಿಕ ರೋಗವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಜಾರಿಯಲ್ಲಿರುವ ಮಾರ್ಗಸೂಚಿಗಳನ್ನು ಮುಂದುವರಿಸಲು ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಆದೇಶವನ್ನು ಉಲ್ಲಂಘಿಸಿ ಯಾವುದೇ ವ್ಯಕ್ತಿಗಳು ಧರ್ಮಸ್ಥಳ, ಸುಬ್ರಹ್ಮಣ್ಯ ಸೇರಿದಂತೆ ಯಾವುದೇ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿದಲ್ಲಿ ಅಂತಹ ವ್ಯಕ್ತಿಗಳು ಸಂಚಾರಕ್ಕೆ ಬಳಸುವ ವಾಹನವನ್ನು ಮುಟ್ಟುಗೋಲು ಹಾಕಲಾಗುವುದು. ಯಾವುದೇ ಧಾರ್ಮಿಕ ಕೇಂದ್ರಗಳು ಸಾರ್ವಜನಿಕರ ಪ್ರವೇಶಕ್ಕೆ ಹಾಗೂ ವಸತಿಗೆ ಅವಕಾಶ ನೀಡಿದ್ದಲ್ಲಿ ಅಂತಹ ಧಾರ್ಮಿಕ ಕೇಂದ್ರಗಳ ಆಡಳಿತಾಧಿಕಾರಿಗಳ ವಿರುದ್ಧ ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ.

ಯಾವುದೇ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿದ ಸಾರ್ವಜನಿಕರು ಹಾಗೂ ಧಾರ್ಮಿಕ ಕೇಂದ್ರಗಳ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ ಮತ್ತು ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್-ಎರಡನೇ ಅಲೆಯಿಂದಾಗಿ ಸ್ಥಗಿತಗೊಂಡಿರುವ ಚಟುವಟಿಕೆಗಳನ್ನು ಪುನರಾರಂಭಿಸಲು, ಕೋವಿಡ್ ಪಾಸಿಟಿವಿಟಿ ದರ ಕಡಿಮೆಗೊಳಿಸುವುದು ಹಾಗೂ ಜಿಲ್ಲೆಯನ್ನು ಕೋವಿಡ್ ಮುಕ್ತವನ್ನಾಗಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು, ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT