ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು| ನೌಕರರ ಮುಷ್ಕರ; ಸರ್ಕಾರಿ ಕಚೇರಿಗಳಲ್ಲಿ ಸೇವೆ ವ್ಯತ್ಯಯ

Last Updated 1 ಮಾರ್ಚ್ 2023, 5:54 IST
ಅಕ್ಷರ ಗಾತ್ರ

ಮಂಗಳೂರು: ವೇತನ ಪರಿಷ್ಕರಣೆ ಮತ್ತು ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್‌) ರದ್ದುಪಡಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರ ಆರಂಭಿಸಿರುವುದರಿಂದ ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವುಂಟಾಗಿದೆ.

ಇಲ್ಲಿಯ ತಾಲ್ಲೂಕು ಪಂಚಾಯಿತಿ ಕಚೇರಿ ಬಾಗಿಲು ತೆರೆದಿದ್ದರೂ, ನೌಕರರು ಸೇವೆಗೆ ಹಾಜರಾಗಿಲ್ಲ. ಉಳಿದ ಕಚೇರಿಗಳಲ್ಲಿಯೂ ಇದೇ ಸ್ಥಿತಿ ಇದೆ. ಸರ್ಕಾರಿ ಶಾಲಾ–ಕಾಲೇಜುಗಳಲ್ಲಿ ಶಿಕ್ಷಕರು–ಬೋಧಕರು ಸೇವೆ ಸಲ್ಲಿಸದ ಕಾರಣ ವಿದ್ಯಾರ್ಥಿಗಳು ಮನೆಗೆ ವಾಪಸ್ಸಾಗಿದ್ದಾರೆ.

ಜಿಲ್ಲಾ ಸರ್ಕಾರಿ ವೆನ್‌ಲಾಕ್‌ ಆಸ್ಪತ್ರೆಯಲ್ಲಿ ಹೊರರೋಗಿಗಳಿಗೂ ಚಿಕಿತ್ಸೆ ನೀಡಲಾಗುತ್ತಿದೆ. ರೋಗಿಗಳ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ. ಕ್ಲಿನಿಕಲ್‌ ಸೇವೆಗಾಗಿ ಕಸ್ತೂರ್ಬಾ ಮೆಡಿಕಲ್‌ ಕಾಲೇಜು (ಕೆಎಂಸಿ) ಜಿಲ್ಲಾ ಆಸ್ಪತ್ರೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವುದರಿಂದ ಕೆಎಂಸಿ ವೈದ್ಯರು ಇಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಪರೀಕ್ಷೆ ಮುಂದೂಡಿಕೆ: ಮಂಗಳೂರು ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜುಗಳಲ್ಲಿ ಬುಧವಾರ ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಪಿ.ಯು ಪರೀಕ್ಷೆಗಳು ನಡೆಯುತ್ತಿದ್ದು, ಸರ್ಕಾರಿ ನೌಕರರ ಮುಷ್ಕರದಿಂದಾಗಿ ಪರೀಕ್ಷೆಗಳು ಸಾಂಗವಾಗಿ ನಡೆಯುವುದು ಅನುಮಾನ ಎನ್ನಲಾಗುತ್ತಿದೆ.

‘ಸರ್ಕಾರಿ ನೌಕರರ ಮುಷ್ಕರದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರೂ ಭಾಗವಹಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಪ್ರಥಮ ಪಿ.ಯು ಪರೀಕ್ಷೆ ನಿಗದಿಯಾಗಿಲ್ಲ. ಗಣಿತ ಮತ್ತು ಅಕೌಂಟನ್ಸಿ ಪರೀಕ್ಷೆಗಳು ಗುರುವಾರ ನಿಗದಿಯಾಗಿವೆ. ಒಂದು ವೇಳೆ ಸರ್ಕಾರವು ನೌಕರರ ಬೇಡಿಕೆಗಳಿಗೆ ಒಪ್ಪದೇ ಹೋದರೆ ಮುಷ್ಕರ ಗುರುವಾರವೂ ಮುಂದುವರಿಯಲಿದೆ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ.ಎನ್‌.ಗಂಗಾಧರ ಆಳ್ವ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT