ಗುರುವಾರ , ಮೇ 28, 2020
27 °C
ಮಂಗಳೂರು ವಿ.ವಿ ಹಗರಣಗಳ ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಕೆ

ನಿಯಮ ಉಲ್ಲಂಘನೆ ಸಾಬೀತು: ಕ್ರಮಕ್ಕೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಇಲ್ಲಿನ ಮಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಬಗ್ಗೆ ತನಿಖೆ ನಡೆಸಿರುವ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನಾ ಮತ್ತು ಲೆಕ್ಕಪತ್ರ ಇಲಾಖೆ ಮೈಸೂರು ಪ್ರಾಂತೀಯ ಕಚೇರಿಯ ಹೆಚ್ಚುವರಿ ನಿರ್ದೇಶಕರು, ಉನ್ನತ ಶಿಕ್ಷಣ ಇಲಾಖೆಗೆ ವರದಿ ಸಲ್ಲಿಸಿದ್ದಾರೆ. ಈ ವರದಿಯ ಆಧಾರದಲ್ಲಿ ಮಂಗಳೂರು ವಿಶ್ವವಿದ್ಯಾಲಯದಲ್ಲಿ ನಿಯಮ ಉಲ್ಲಂಘನೆ ಮಾಡಿರುವುದು ಸಾಬೀತಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗೆ ಸರ್ಕಾರ ಸೂಚನೆ ನೀಡಿದೆ.

ವಿಶ್ವವಿದ್ಯಾಲಯದಲ್ಲಿ ನಡೆದಿರುವ ಹಗರಣಗಳ ಕುರಿತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಿಂದ ಆರೋಪ ಮಾಡಲಾಗಿತ್ತು. ಆ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಉನ್ನತ ಶಿಕ್ಷಣ ಇಲಾಖೆಯಿಂದ ಲೆಕ್ಕಪರಿಶೋಧನಾ ಮತ್ತು ಲೆಕ್ಕಪತ್ರ ಇಲಾಖೆಗೆ ಸೂಚನೆ ನೀಡಲಾಗಿತ್ತು.

ಅದರಂತೆ ವಿಸ್ತೃತ ತನಿಖೆ ನಡೆಸಿದ ಅಧಿಕಾರಿಗಳು, ಪರೀಕ್ಷಾ ಕಾರ್ಯನಿರ್ವಹಣಾ ಗುತ್ತಿಗೆ, ವಿಶ್ವವಿದ್ಯಾಲಯದ ಆವರಣದಲ್ಲಿ ಅಂತರರಾಷ್ಟ್ರೀಯ ವಿದ್ಯಾರ್ಥಿ ನಿಲಯ, ಕ್ಲಾಸ್‌ ರೂಂ ಕಾಂಪ್ಲೆಕ್ಸ್‌, ಅಡಿಟೋರಿಯಂನ ಒಳಾಂಗಣ ಕಾಮಗಾರಿಗಳು, ಸೌರ ಮೇಲ್ಚಾವಣಿ ಕಾಮಗಾರಿ, ಸಿಸಿಟಿವಿ ಕ್ಯಾಮೆರಾ ಅಳವಡಿಕೆ, 2002 ಮತ್ತು 2013 ರಲ್ಲಿ ನಡೆದ ಬೋಧಕರ ನೇಮಕಾತಿ, ತಾತ್ಕಾಲಿಕ ನೌಕರರ ನೇಮಕಾತಿ, ಕಂಪ್ಯೂಟರ್ ಮತ್ತು ಲ್ಯಾಪ್‌ಟಾಪ್‌ ಖರೀದಿ ಪ್ರಕ್ರಿಯೆಗಳ ಕುರಿತು ಪರಿಶೀಲನೆ ನಡೆಸಿದೆ.

ಜನವರಿ 22 ರಂದು ಉನ್ನತ ಶಿಕ್ಷಣ ಇಲಾಖೆಗೆ ತನಿಖಾ ವರದಿ ಸಲ್ಲಿಸಲಾಗಿದೆ. ಪರೀಕ್ಷಾ ಕಾರ್ಯನಿರ್ವಹಣೆ ಗುತ್ತಿಗೆ, ಸೌರ ಮೇಲ್ಚಾವಣಿ ವ್ಯವಸ್ಥೆ, ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಕಂಪ್ಯೂಟರ್‌ ಮತ್ತು ಲ್ಯಾಪ್‌ಟಾಪ್‌ ಖರೀದಿ ಪ್ರಕ್ರಿಯೆಯಲ್ಲಿ ಕೆಟಿಪಿಪಿ ನಿಯಮಗಳನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ. ಅಲ್ಲದೇ ಅಂತರರಾಷ್ಟ್ರೀಯ ವಿದ್ಯಾರ್ಥಿನಿಲಯ, ಕ್ಲಾಸ್‌ ರೂಂ ಕಾಂಪ್ಲೆಕ್ಸ್‌, ಸಭಾಂಗಣದ ಒಳಾಂಗಣ ಕಾಮಗಾರಿಗಳನ್ನು ಸರ್ಕಾರದ ಪೂರ್ವಾನುಮೋದನೆ ಇಲ್ಲದೇ ವಿಶ್ವವಿದ್ಯಾಲಯದ ಹಂತದಲ್ಲಿಯೇ ಕ್ರಮ ಕೈಗೊಳ್ಳಲಾಗಿದ್ದು, ಇದರಿಂದ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟಾಗಿದೆ. ಬೋಧಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಯುಜಿಸಿ ನಿಯಮಾವಳಿ ಹಾಗೂ ನೇಮಕಾತಿ ನಿಯಮಾವಳಿಗಳನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ.

ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟಾಗಲು ಕಾರಣರಾದ ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ಯುಜಿಸಿ ಮತ್ತು ನೇಮಕಾತಿ ನಿಯಮಾವಳಿ ಉಲ್ಲಂಘಿಸಿದ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಇಲಾಖಾ ವಿಚಾರಣೆ ನಡೆಸಿ, ಶಿಸ್ತುಕ್ರಮ ಜರುಗಿಸುವಂತೆ ಉನ್ನತ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಮಹೇಶ್‌ ಆರ್‌. ಅವರು, ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ಅವರಿಗೆ ಸೋಮವಾರ ನಿರ್ದೇಶನ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು