ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಕುರಿತ ಹೇಳಿಕೆ: ಡಿಕೆಶಿ ಬೆಂಬಲಕ್ಕೆ ಸಿದ್ದರಾಮಯ್ಯ

Last Updated 17 ಡಿಸೆಂಬರ್ 2022, 10:01 IST
ಅಕ್ಷರ ಗಾತ್ರ

ಮಂಗಳೂರು: 'ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅದು ಬಿಟ್ಟು ಭಯೋತ್ಪಾದನೆಗೆ ಸಹಕಾರ ನೀಡುತ್ತೇನೆಂದು ಹೇಳಿದ್ದಾರೆಯೇ' ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ಇಲ್ಲಿ ಬಜ್ಪೆ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, 'ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಭಯೋತ್ಪಾದಕ ಮನಸ್ಥಿತಿ ಹೊಂದಿದೆ' ಎಂಬ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದರು. 'ಬಿಜೆಪಿಯವರಿಗೆ ಇಂತಹ ಹೇಳಿಕೆಗಳೇ ಬೇಕಾಗಿರುವುದು. ಅವರು ಹೇಳಿಕೆಯನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ತಿರುಚಿ ಜನರಿಗೆ ತಪ್ಪು ಮಾಹಿತಿ ನೀಡುವ ಪ್ರಯತ್ನ ಮಾಡುತ್ತಿದ್ದಾರೆ' ಎಂದರು.

'ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಒಂಭತ್ತು ವರ್ಷಗಳಾದವು. ದೇಶದಲ್ಲಿ ಈಗಲೂ ಭಯೋತ್ಪಾದನೆ ಚಟುವಟಿಕೆ ನಡೆಯುತ್ತಿದ್ದರೆ ಹತ್ತಿಕ್ಕಲಿ. ಅವರಿಗೆ ಅಧಿಕಾರವಿದೆ, ಡಬಲ್ ಎಂಜಿನ್ ಸರ್ಕಾರವಿದೆ. ಅವರಿಗೆ ಅಧಿಕಾರ ಕೊಟ್ಟಿದ್ದೇಕೆ ಮತ್ತೆ. ಬರೀ ಜನರನ್ನು ಪ್ರಚೋದಿಸಿ ಭಾವನಾತ್ಮಕ ವಿಚಾರಗಳನ್ನು ಜನರ ಮುಂದೆ ಇಡುವುದಕ್ಕೆ ಅಧಿಕಾರ ನೀಡಿದ್ದಲ್ಲ 'ಎಂದರು.

'ಕರಾವಳಿಯಲ್ಲಿ ಮತೀಯ ಗೂಂಡಾಗಿರಿಯ ಸುಮಾರು ಏಳೆಂಟು ಪ್ರಕರಣಗಳು ನಡೆದಿವೆ. ಇವುಗಳನ್ನು ನಾನು ಖಂಡಿಸುತ್ತೇನೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಯಾರು ತಪ್ಪು ಮಾಡಿದ್ದಾರೋ ಅವರ ಮೇಲೆ ಕ್ರಮ ತಗೆದುಕೊಳ್ಳಲಿ' ಎಂದು ಒತ್ತಾಯಿಸಿದರು.

''ಅನಗತ್ಯವಾಗಿ ಅನ್ಯರ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವುದನ್ನು ನಾನು ಖಂಡಿಸುತ್ತೇನೆ. ಸರ್ಕಾರವೂ ಇದಕ್ಕೆ ಅವಕಾಶ ಕೊಡಬಾರದು' ಎಂದರು .

ಮತೀಯ ಗೂಂಡಾಗಿರಿ ನಡೆಸಲು ಕಾನೂನಿನಲ್ಲಿ ಅವಕಾಶವಿಲ್ಲ. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇದನ್ನು ಪ್ರೋತ್ಸಾಹಿಸುವ ಹೇಳಿಕೆ ನೀಡಿದ್ದರು. ಕ್ರಿಯೆಗೆ ಪ್ರತಿಕ್ರಿಯೆ ಎಂದು ಹೇಳಿಕೆ ನೀಡಿದರೆ ಮತ್ತೇನಾಗುತ್ತದೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

'ಮುಖ್ಯಮಂತ್ರಿ ಅವರಿಗೆ ಕಾನೂನು ಗೊತ್ತಿದೆಯೇ ಇಲ್ಲವೊ ಎಂದು ನನಗೆ ಅರಿವಿಲ್ಲ. ಸಂವಿಧಾನದಲ್ಲಿ ಇದಕ್ಕೆ ಎಲ್ಲಾದರೂ ಅವಕಾಶವಿದೆಯೇ? ಪೊಲೀಸರು ಇರುವುದು ಏಕೆ ಮತ್ತೆ' ಎಂದು ಪ್ರಶ್ನಿಸಿದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT