ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಗಳೂರನ್ನು ಮಿನಿ ದುಬೈಯಂತೆ ಅಭಿವೃದ್ಧಿ ಮಾಡಬಹುದು: ರೊನಾಲ್ಡ್ ಕೊಲಾಸೊ

ಅನಿವಾಸಿ ಭಾರತೀಯ ಉದ್ಯಮಿ ರೊನಾಲ್ಡ್ ಕೊಲಾಸೊ
Published 14 ಜೂನ್ 2024, 15:30 IST
Last Updated 14 ಜೂನ್ 2024, 15:30 IST
ಅಕ್ಷರ ಗಾತ್ರ

ಮಂಗಳೂರು: ಮಂಗಳೂರನ್ನು ಮಿನಿ ದುಬೈಯಂತೆ ಅಭಿವೃದ್ಧಿ ಮಾಡಲು ಸಾಕಷ್ಟು ಅವಕಾಶಗಳಿವೆ ಎಂದು ಅನಿವಾಸಿ ಭಾರತೀಯ ಉದ್ಯಮಿ ರೊನಾಲ್ಡ್ ಕೊಲಾಸೊ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ ಪುರಸ್ಕಾರ ಸ್ವೀಕರಿಸಿ ಅವರು ಮಾತನಾಡಿದರು.

ಬಂದರು, ವಿಮಾನ ನಿಲ್ದಾಣ, ರೈಲು, ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಹೊಂದಿರುವ ಮಂಗಳೂರು ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿದೆ. ಕರ್ನಾಟಕದಲ್ಲಿ ಬೆಂಗಳೂರು ಬಳಿಕ ಎರಡನೇ ಹಂತದ ನಗರಗಳಲ್ಲಿ ಮಂಗಳೂರು ಪ್ರಮುಖವಾಗಿದ್ದು, ಇದರ ಅಭಿವೃದ್ಧಿ ಪಡಿಸಲು ವಿಪುಲ ಅವಕಾಶ ಇವೆ.  ರಾಜ್ಯದಲ್ಲಿ ಎಸ್.ಎಂ.ಕೃಷ್ಣ ಮುಖ್ಯ ಮಂತ್ರಿಯಾಗಿದ್ದಾಗ ಮಂಗಳೂರು ಅಭಿವೃದ್ಧಿ ಬಗ್ಗೆ ಸರ್ಕಾರಕ್ಕೆ ಸಮಗ್ರ ವರದಿ ನೀಡಿದ್ದೆ ಎಂದರು.

ಇಲ್ಲಿನ ಸಮುದ್ರಕ್ಕೆ, ನದಿಗಳಿಗೆ ನಗರದ ಕಸ, ತ್ಯಾಜ್ಯ ನೀರು ಸೇರಬಾರದು. ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಅವರು ಮನವಿ ಮಾಡಿದರು.

‘ನಾನು ಹುಟ್ಟಿ ಬೆಳೆದ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎನ್ನುವುದು ನನ್ನ ಗುರಿಯಾಗಿತ್ತು. ದುಡಿಮೆಯ ಉಳಿತಾಯದಲ್ಲಿ ಬಡಜನರಿಗೆ, ಸಮಾಜಕ್ಕೆ ಒಂದು ಪಾಲು ಮೀಸಲಿಡಲು ತೀರ್ಮಾನಿಸಿದ್ದೆ. ಮದುವೆಯ ಸಂದರ್ಭದಲ್ಲಿಯೂ ಈ ಬಗ್ಗೆ ಪ್ರಮಾಣ ಸ್ವೀಕರಿಸಿದ್ದೆ, ನನ್ನ ಪತ್ನಿಯೂ ಇದಕ್ಕೆ ಸಮ್ಮತಿಸಿದ್ದಳು. ಕೊಲ್ಲಿ ರಾಷ್ಟ್ರದಲ್ಲಿ ವೃತ್ತಿ ಬದುಕು ಮತ್ತು ಉದ್ಯಮ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಿದ ಬಳಿಕ ಸಮಾಜಮುಖಿ ಕಾರ್ಯಗಳಲ್ಲಿ ನನ್ನನ್ನು ತೊಡಗಿಸಿಕೊಂಡಿದ್ದೇನೆ. ಅದೇ ನನ್ನ ಬದುಕಿನ ಸಾಧನೆ’ ಎಂದರು.

‘ನನ್ನ ಸಾಮಾಜಿಕ ಚಟುವಟಿಕೆಗೆ ಜಾತಿ, ಧರ್ಮ ಎಂದೂ ಅಡ್ಡಿಯಾಗಿಲ್ಲ. ರಾಜ್ಯದ ಕೆಲವು ಹಳ್ಳಿಗಳಿಗೆ ಕುಡಿಯುವ ನೀರು, ರಸ್ತೆ ನಿರ್ಮಾಣ, ದೇವಸ್ಥಾನ ನಿರ್ಮಾಣ ಮಾಡಿ ಜನರಿಗೆ ಸೇವೆ ನೀಡಲು ಸಾಧ್ಯವಾಗಿದೆ. ಕಠಿಣ ಪರಿಶ್ರಮ ಮತ್ತು ಸಾಮಾಜಿಕ ಸೇವಾ ಮನೋಭಾವದಿಂದ ನಮ್ಮ ಯುವಕರು ಬದುಕಿನಲ್ಲಿ ಯಶಸ್ಸು ಸಾಧಿಸಬಹುದು’ ಎಂದು ಅವರು ಹೇಳಿದರು.

ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ್ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟಾೃನಿ ಆಳ್ವಾರಿಸ್, ಜೀನ್ ಕೊಲಾಸೊ, ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ , ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್., ವಾಲ್ಟರ್ ನಂದಳಿಕೆ, ಡೆನಿಸ್ ಡಿಸಿಲ್ವ, ಶ್ರೀನಿವಾಸ ವಿ.ವಿ.ಯ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಸುಷ್ಮಿತಾ ಕೋಟ್ಯಾನ್ ಉಪಸ್ಥಿತರಿದ್ದರು. ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು. ಪ್ರೆಸ್ ಕ್ಲಬ್ ಕಾರ್ಯದರ್ಶಿ ಪುಷ್ಪರಾಜ್ ಬಿ.ಎನ್.ವಂದಿಸಿದರು. ಆರ್.ಸಿ. ಭಟ್ ಕಾರ್ಯ ಕ್ರಮ ನಿರೂಪಿಸಿದರು.

ಮಂಗಳೂರು ಕೋಮುಸೂಕ್ಷ್ಮ ಪ್ರದೇಶ ಎಂಬ ಕಾರಣಕ್ಕೆ ಇಲ್ಲಿ ಬಂಡವಾಳ ಹೂಡಿಕೆಗೆ ಹಿನ್ನಡೆಯಾಗಿದೆ.  ಈ ಹಣೆಪಟ್ಟಿ ತೊಲಗಿಸಿ ಭ್ರಷ್ಟಾಚಾರ ನಿಯಂತ್ರಿಸಿದರೆ ಅಭಿವೃದ್ಧಿ ಸಾಧ್ಯ

-ರೊನಾಲ್ಡ್ ಕೊಲಾಸೊ ಅನಿವಾಸಿ ಭಾರತೀಯ ಉದ್ಯಮಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT