ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಹೋರ್ಡಿಂಗ್‌ಗಳನ್ನು ತೆರವುಗೊಳಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಗುರುವಾರ ಆದೇಶ ಮಾಡಿದ್ದಾರೆ.
ಭಾರಿ ಗಾಳಿ ಮಳೆಯಿಂದಾಗಿ ನಗರದ ಬಿಕರ್ನಕಟ್ಟೆಯಲ್ಲಿ ಜಾಹೀರಾತು ಹೋರ್ಡಿಂಗ್ ನೆಲಕ್ಕುರುಳಿ ದ್ವಿಚಕ್ರವಾಹನಗಳು ಜಖಂಗೊಂಡ ಬೆನ್ನಲ್ಲೇ, ಅವರು ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಿದ್ದಾರೆ.
‘ಮುಂಗಾರು ಚುರುಕುಗೊಂಡಿದ್ದು, ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಕೆಲವೆಡೆ ವಿಕೋಪಗಳು ಸಂಭವಿಸಿವೆ. ರಸ್ತೆ ಬದಿಗಳಲ್ಲಿ ಅಳವಡಿಸಿರುವ ಫ್ಲೆಕ್ಸ್/ ಜಾಹೀರಾತು ಫಲಕಗಳು (ಹೋರ್ಡಿಂಗ್) ಗಾಳಿ ಮಳೆಯಿಂದಾಗಿ ರಸ್ತೆಗೆ ಬಿದ್ದು ಅಪಘಾತ ಸಂಭವಿಸುವ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆಯಿದೆ.
ಆದ್ದರಿಂದ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯ ಅಧಿಕೃತ ಹಾಗೂ ಅನಧಿಕೃತ ಜಾಹೀರಾತು ಫಲಕಗಳ ಬಗ್ಗೆ ಸಮೀಕ್ಷೆ ನಡೆಸಬೇಕು.
ಅಪಾಯಕಾರಿ ಸ್ಥಿತಿಯಲ್ಲಿರುವ ಜಾಹೀರಾತು ಫಲಕಗಳನ್ನು ತೆರವುಗೊಳಿಸಬೇಕು. ಈ ಕುರಿತ ಪಾಲನಾ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು’ ಎಂದು ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.