ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರಾಂತ್ಯ ಕರ್ಫ್ಯೂ: ಕಟ್ಟುನಿಟ್ಟಿನ ಕ್ರಮ

ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೂಚನೆ
Last Updated 25 ಜೂನ್ 2021, 3:32 IST
ಅಕ್ಷರ ಗಾತ್ರ

ಮಂಗಳೂರು: ಕೋವಿಡ್ ನಿಯಂತ್ರಣದ ಉದ್ದೇಶದಿಂದ ವಾರಾಂತ್ಯದಲ್ಲಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ ನೀಡಿದರು.

ಗುರುವಾರ ಇಲ್ಲಿ ನಡೆದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವ ಹಣಾಧಿಕಾರಿ, ತಹಶೀಲ್ದಾರ್, ತಾಲ್ಲೂಕು ಆರೋಗ್ಯಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಶುಕ್ರವಾರ ಸಂಜೆ 7ರಿಂದ ಇದೇ 28ರ ಬೆಳಿಗ್ಗೆ 7 ಗಂಟೆವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್‌ಡೌನ್ ಇರಲಿದೆ. ಹಾಲಿನ ವಿತರಣಾ ಕೇಂದ್ರ, ಆಸ್ಪತ್ರೆ, ಕೆಲವು ಸರ್ಕಾರಿ ಕಚೇರಿಗಳನ್ನು ಮಾತ್ರ ತೆರೆಯಲು ಅವಕಾಶ ಇದೆ. ಇತರ ಯಾವುದೇ ಚಟುವಟಿಕೆ ಇರುವುದಿಲ್ಲ ಎಂದರು.

ವಾರಾಂತ್ಯದಲ್ಲಿ ಸರ್ಕಾರಿ ಕಚೇರಿಗಳಿಗೆ ರಜೆ ಇರುವುದರಿಂದ ಜನರು ಅನವಶ್ಯಕವಾಗಿ ಓಡಾಡುವ ಅಗತ್ಯ ಇರುವುದಿಲ್ಲ. ಸಂಪೂರ್ಣ ಬಂದ್ ಮಾಡುವುದರಿಂದ ಕೋವಿಡ್ ಹರಡುವ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡಲು ಸಾಧ್ಯ ಎಂದರು.

ಸರ್ಕಾರಿ, ಇತರ ಖಾಸಗಿ ಕಟ್ಟಡ ಕಾಮಗಾರಿಗಳು, ನಿರಂತರ ಚಲನೆಯಲ್ಲಿರುವ ಕಾರ್ಖಾನೆಗಳಿಗೆ ವಿನಾಯಿತಿ ಇದೆ. ಹೋಟೆಲ್‌ಗಳಲ್ಲಿ ಪಾರ್ಸೆಲ್ ಕೊಡಲು ಮಾತ್ರ ಅವಕಾಶ ಇದೆ. ಪೂರ್ವ ನಿಗದಿತ ಅನುಮತಿ ಪಡೆದ ಮದುವೆ ಮತ್ತಿತರ ಸಮಾರಂಭಗಳಿಗೆ 25 ಜನರಿಗೆ ಸೀಮಿತಗೊಳಿಸಿ ಮನೆಯಲ್ಲಿಯೇ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ಸರ್ಕಾರದಿಂದ ಬರುವ ಕೋವಿಡ್ ನಿರೋಧಕ ಚುಚ್ಚುಮದ್ದುಗಳ ದಾಸ್ತಾನನ್ನು ಅಂದೇ ಪೂರ್ಣ ಪ್ರಮಾಣದಲ್ಲಿ ನೀಡಲು ಯೋಜನೆ ರೂಪಿಸಬೇಕು ಜತೆಗೆ ಜನರಿಗೆ ನೀಡುವ ಕೆಲಸವಾಗಬೇಕು. ಈ ಕಾರ್ಯಕ್ಕೆ ನಿವೃತ್ತ ವೈದ್ಯರುರನ್ನು ಬಳಸಿಕೊಳ್ಳುವುದು ಸೂಕ್ತ ಎಂದು ಹೇಳಿದರು.

ಉಪವಿಭಾಗ ಅಧಿಕಾರಿಗಳು, ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಕೋವಿಡ್ ನಿಯಂತ್ರಣಾ ಕ್ರಮಗಳ ಬಗ್ಗೆ ಮೇಲುಸ್ತುವಾರಿ ನೋಡಿಕೊಳ್ಳಬೇಕು. ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರತಿದಿನ ತಮ್ಮ ಕೆಳಗಿನ ಅಧಿಕಾರಿ ಸಿಬ್ಬಂದಿಯೊಂದಿಗೆ ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ಸಭೆ ನಡೆಸಿ ಮಾಹಿತಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಕಾರಿ ಡಾ.ಕುಮಾರ್ ಮಾತನಾಡಿ, ‘ತಾಲ್ಲೂಕುಗಳಿಗೆ ಪ್ರತಿದಿನ ನಿಗದಿಪಡಿಸಿರುವ ಕೋವಿಡ್ ಪರೀಕ್ಷೆಯ ಗುರಿಯನ್ನು ಸಾಧಿಸಬೇಕು. ಜಿಲ್ಲೆಯಲ್ಲಿ ಸುಳ್ಯ ತಾಲ್ಲೂಕನ್ನು ಹೊರತುಪಡಿಸಿದರೆ ಇತರ ತಾಲ್ಲೂಕುಗಳಲ್ಲಿ ನಿಗದಿತ ಗುರಿ ಸಾಧನೆಯಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಹೀಗಾಗದಂತೆ ನೋಡಿಕೊಳ್ಳಬೇಕು’ ಎಂದರು.

ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪ್ರಜ್ಞಾ ಅಮ್ಮೆಂಬಳ, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕಿಶೋರ್ ಉಪಸ್ಥಿತರಿದ್ದರು.

‘ಆರೈಕೆ ಕೇಂದ್ರಕ್ಕೆ ವರ್ಗಾಯಿಸಿ’

ಕೆಮ್ಮು, ಶೀತ, ಜ್ವರ ಬಂದವರಿಗೆ ಕ್ಲಿನಿಕ್‌ಗಳಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅಂತಹ ರೋಗಿಗಳ ಕೋವಿಡ್ ಪರೀಕ್ಷೆಗಳನ್ನು ಕಡ್ಡಾಯವಾಗಿ ಮಾಡಲೇಬೇಕು. ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಸಿಬ್ಬಂದಿ, ಕೋವಿಡ್‌ ಪೂರ್ಣ ಪ್ರಮಾಣವಾಗಿ ಮುಕ್ತವಾಗಿದೆ ಎಂಬ ಮನೋಭಾವವನ್ನು ಹೊಂದಬಾರದು. ಸೋಂಕಿತರ ಬಗ್ಗೆ ಕಾಳಜಿವಹಿಸಬೇಕು. ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಆರೈಕೆ ಕೇಂದ್ರಗಳಿಗೆ ವರ್ಗಾಯಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT