ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆಗಾಲದ ತುರ್ತು ಕ್ರಮಕ್ಕೆ ಸಜ್ಜಾಗಿ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

ಮಳೆ: ತುರ್ತುಸ್ಥಿತಿ ಸಿದ್ಧತಾ ಸಭೆ
Last Updated 7 ಜೂನ್ 2021, 16:48 IST
ಅಕ್ಷರ ಗಾತ್ರ

ಮಂಗಳೂರು: ಪ್ರವಾಹ, ಅತಿವೃಷ್ಟಿ ಸೇರಿದಂತೆ ಮತ್ತಿತರ ತುರ್ತು ಸಂದರ್ಭದಲ್ಲಿ ಜನರ ರಕ್ಷಣೆ ಹಾಗೂ ಪುನರ್ವಸತಿಗೆ ಅಗತ್ಯವಿರುವ ಎಲ್ಲ ಮುನ್ನೆಚ್ಚರಿke, ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಮಳೆಗಾಲದ ತುರ್ತುಸ್ಥಿತಿ ಎದುರಿಸಲು ಸಿದ್ಧತಾ ಕ್ರಮಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಯಾವುದೇ ಪ್ರಾಣ ಹಾನಿಯಾಗದಂತೆ, ಆಸ್ತಿ-ಪಾಸ್ತಿ, ಖಾಸಗಿ ಸ್ವತ್ತುಹಾನಿ ಉಂಟಾಗದಂತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ವಿಪತ್ತು ನಿರ್ವಹಣಾ ನೋಡಲ್ ಅಧಿಕಾರಿಗಳು ನೆರೆಹಾವಳಿ ಪ್ರದೇಶಗಳನ್ನು ಗುರುತಿಸಿ, ತುರ್ತು ಸಂದರ್ಭದಲ್ಲಿ ಕುಟುಂಬಗಳನ್ನು ಆದಷ್ಟು ಶೀಘ್ರ ಕಾಳಜಿ ಕೇಂದ್ರಗಳಿಗೆ ವರ್ಗಾಯಿಸಬೇಕು ಎಂದರು. ಕೃಷಿ ಹಾಗೂ ತೋಟಗಾರಿಕೆ ಅಧಿಕಾರಿಗಳು ಮಳೆಹಾನಿಗೆ ಒಳಗಾದ ಕೃಷಿ ಭೂಮಿಯ ಬಗ್ಗೆ ಜಿಲ್ಲಾಡಳಿತಕ್ಕೆ ಪ್ರತಿದಿನ ವರದಿ ನೀಡಬೇಕು. ಗಾಳಿ-ಮಳೆ ಮರ ಉರುಳಿ ರಸ್ತೆ ಸಂಚಾರಕ್ಕೆ ಅಡ್ಡಿಯಾದಾಗ ಅರಣ್ಯ ಇಲಾಖೆಯ ಸಿಬ್ಬಂದಿ ತೆರವುಗೊಳಿಸಬೇಕು. ವಿದ್ಯುತ್ ಕಂಬಗಳು, ಟ್ರಾನ್ಸ್‌ಫಾರ್ಮರ್‌ಗಳು ಹಾಳಾದಲ್ಲಿ ಮೆಸ್ಕಾಂ ಸಿಬ್ಬಂದಿ ಕೂಡಲೇ ದುರಸ್ತಿ ಕೈಗೊಳ್ಳಬೇಕು. ವಿದ್ಯುತ್ ಅವಘಡ ಸಂಭವಿಸದಂತೆ ಮುಂಜಾಗ್ರತೆ ವಹಿಸಬೇಕು ಎಂದರು.

ಕೋವಿಡ್‍ಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಟಾಸ್ಕ್‌ಪೋರ್ಸ್‍ಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದ ಅವರು ಕಾರ್ಯಪಡೆಯ ಸದಸ್ಯರು ತಂಡದ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮ ಪಂಚಾಯಿತಿ ಸಿಬ್ಬಂದಿ ಮುಂಗಾರು ಪರಿಸ್ಥಿತಿಯನ್ನು ಎದುರಿಸಲು ಕೈಗೊಳ್ಳಬೇಕಾದ ಸಿದ್ಧತಾ ಕ್ರಮಗಳ ಕುರಿತ ಸಭೆ ಕ್ರಮ ಕೈಗೊಳ್ಳಬೇಕು ಎಂದರು.

‘ಕಾಳಜಿ ಕೇಂದ್ರ, ಕೋವಿಡ್‌ ಕೇಂದ್ರ’

ಜೂನ್ 14 ರ ನಂತರ ಮುಂಗಾರು ಮಳೆಯಾಗುವ ಸಾಧ್ಯತೆ ಇದ್ದು, ಮಳೆ ಹಾನಿಗೊಳಗಾದ ಕುಟುಂಬಗಳಿಗೆ ಸರಿಯಾದ ರೀತಿಯಲ್ಲಿ ಪರಿಹಾರ ಒದಗಿಸಬೇಕು. ಅರ್ಹ ವ್ಯಕ್ತಿಯು ಪರಿಹಾರದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು . ಸಂತ್ರಸ್ತ ಕುಟುಂಬಗಳನ್ನು ಕಾಳಜಿ ಕೇಂದ್ರಗಳಿಗೆ ವರ್ಗಾವಣೆ ಮಾಡಿ, ಅವರಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಬೇಕು. ಕೋವಿಡ್ ಸೋಂಕಿತರಿದ್ದಲ್ಲಿ ಅವರನ್ನು ಕಡ್ಡಾಯವಾಗಿ ಕೋವಿಡ್ ಆರೈಕೆ ಕೇಂದ್ರಳಿಗೆ ವರ್ಗಾಯಿಸಬೇಕು ಎಂದರು.

‘ಪಂಪ್‌ವೆಲ್‌ ರಸ್ತೆ ಮಳೆನೀರೆತ್ತಲು ಪಂಪ್‌’

ಪಂಪ್‍ವೆಲ್ ಸರ್ಕಲ್ ಹಾಗೂ ತೊಕ್ಕೊಟ್ಟು ರಸ್ತೆಯ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗುತ್ತಿದ್ದು, ನೀರನ್ನು ಅಲ್ಲಿಂದ ಸಾಗಿಸಲು ಅಗತ್ಯವಿರುವ ಪಂಪ್‍ಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ಹೋಮ್‍ಗಾರ್ಡ್ ಕಮಾಂಡೆಂಟ್‍ ಸಮುದ್ರದ ತೀರದ ಜವಬ್ದಾರಿಯನ್ನು ನೋಡಿಕೊಳ್ಳಬೇಕು. ಸಾರ್ವಜನಿಕರಿಗೆ ನೆರೆ ಹಾವಳಿಯ ಕುರಿತು ಅಣಕು ಪ್ರದರ್ಶನಗಳ ಮೂಲಕ ಜನಜಾಗೃತಿ ಮೂಡಿಸಬೇಕು ಎಂದರು. ಪಾಲಿಕೆ ವ್ಯಾಪ್ತಿಯಲ್ಲಿ ಒಳ ಚರಂಡಿಗಳು ಮತ್ತು ಹೊಂಡಗಳನ್ನು ಸರಿಯಾಗಿ ಸ್ವಚ್ಛ ಮಾಡಬೇಕು. ಮಳೆ ನೀರು ರಸ್ತೆಗೆ, ಮನೆಗಳಿಗೆ ನುಗ್ಗುವ ಸಂಭವಗಳು ಇದೆ. ಎಚ್ಚರ ವಹಿಸಬೇಕು ಎಂದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನವಾನೆ, ಪ್ರೊಬೆಷನರಿ ಐ.ಎ.ಎಸ್ ಅಧಿಕಾರಿ ಅಕ್ರಮ್ ಷಾ, ಅಪರ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ, ಡಿಸಿಪಿ ಹರಿರಾಂ ಶಂಕರ್, ಎ.ಸಿ ಮದನ್ ಮೋಹನ್, ನಗರಾಭಿವೃದ್ಧಿ ಯೋಜನಾ ಕೋಶ ನಿರ್ದೇಶಕಿ ಗಾಯತ್ರಿ ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಅಧಿಕಾರಿ ಡಾ. ಕಿಶೋರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT