ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜೆರೋಸಾ ಶಾಲೆ ಪ್ರಕರಣ: ಶಾಸಕತ್ವ ರದ್ದತಿಗೆ ಸ್ಪೀಕರ್‌ಗೆ ದೂರು

Published 16 ಫೆಬ್ರುವರಿ 2024, 13:44 IST
Last Updated 16 ಫೆಬ್ರುವರಿ 2024, 13:44 IST
ಅಕ್ಷರ ಗಾತ್ರ

ಮಂಗಳೂರು: ‘ಇಲ್ಲಿಯ ಜೆರೋಸಾ ಶಾಲೆಯ ವಿರುದ್ಧದ ಪ್ರತಿಭಟನೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಡಾ.ಭರತ್ ಶೆಟ್ಟಿ ದುರ್ವರ್ತನೆ ತೋರಿದ್ದಾರೆ. ಹೀಗಾಗಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು’ ಎಂದು ಜೆಪ್ಪು ಶಾಂತಿನಗರ ನಿವಾಸಿ, ನಗರಪಾಲಿಕೆಯ ಮಾಜಿ ಸದಸ್ಯ ಕೆ.ಭಾಸ್ಕರ್ ರಾವ್‌ ಅವರು ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್ ಅವರಿಗೆ ದೂರು ಸಲ್ಲಿಸಿದ್ದಾರೆ.

‘ಶಾಲೆಯ ಮುಂದೆ ಶಾಸಕರ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಮತ್ತು ನಂತರ ನಡೆದ ಘಟನಾವಳಿಗಳು  ಸಮಾಜ ತಲೆತಗ್ಗಿಸುವಂತಿವೆ. ಪ್ರಚೋದನಕಾರಿ ಹೇಳಿಕೆ ನೀಡಿರುವ ಶಾಸಕರು, ಶಿಕ್ಷಕರ ಮುಂದೆ ವಿದ್ಯಾರ್ಥಿಗಳನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ. ಶಿಕ್ಷಕರನ್ನು ಬೀದಿಯಲ್ಲಿ ನಿಲ್ಲಿಸಿ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿದ್ದಾರೆ. ಶಿಕ್ಷಕಿಯ ಮೇಲೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಒತ್ತಡ ಹಾಕಿದ್ದಾರೆ. ಧರ್ಮದ ಆಧಾರದಲ್ಲಿ ವಿದ್ಯಾರ್ಥಿಗಳಿಂದ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿಸಿದ್ದಾರೆ. ಇದೆಲ್ಲವೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ. ಆದ್ದರಿಂದ ಸೂಕ್ತ ತನಿಖೆ ಆಗಬೇಕು’ ಎಂದು ಕೋರಿದ್ದಾರೆ.

‘ಶಾಸಕರು ಸ್ವೀಕರಿಸಿದ ಪ್ರತಿಜ್ಞೆಗೆ ವಿರುದ್ಧವಾಗಿ ವರ್ತಿಸಿದರೆ ಅವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ವಿಧಾನಸಭಾಧ್ಯಕ್ಷರಿಗೆ ಇದೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಖಾದರ್ ಅವರನ್ನು ಬೆಂಗಳೂರಿನ ಅವರ ಕಚೇರಿಯಲ್ಲಿ ಶುಕ್ರವಾರ ಭೇಟಿ ಮಾಡಿ ಭಾಸ್ಕರ್ ರಾವ್‌ ದೂರು ನೀಡಿದ್ದು, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಜೊತೆಗಿದ್ದರು.

‘ಜೆರೋಸಾ ಶಾಲೆಯ ವಿಷಯದಲ್ಲಿ ಶಾಸಕರು ಆ ಸ್ಥಾನದ ಘನತೆ ಕುಗ್ಗಿಸುವ ರೀತಿ ವರ್ತಿಸಿದ್ದಾರೆ ಎಂಬುದಕ್ಕೆ ಸಾಕ್ಷ್ಯಾಧಾರಗಳನ್ನು ದೂರಿನ ಜೊತೆ ಸಲ್ಲಿಸಲಾಗಿದೆ. ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ವಿಧಾನ ಸಭೆಯ ಅಧ್ಯಕ್ಷರು ಭರವಸೆ ನೀಡಿದ್ದಾರೆ’ ಎಂದು ಐವನ್ ಡಿಸೋಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೆರೋಸಾ ಶಾಲೆಯ ಶಿಕ್ಷಕಿ ಪ್ರಭಾ ಅವರು ಹಿಂದೂ ಧರ್ಮದ ದೇವರನ್ನು ನಿಂದನೆ ಮಾಡಿದ್ದಾರೆ ಎಂಬ ಬಗ್ಗೆ ವಿದ್ಯಾರ್ಥಿಗಳು ಪೋಷಕರ ಬಳಿ ಹೇಳಿಕೊಂಡಿದ್ದಾರೆ ಎಂದು ಆರೋಪಿಸಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ವಿಶ್ವ ಹಿಂದೂ ಪರಿಷತ್, ಬಜರಂಗ ದಳದ ಕಾರ್ಯಕರ್ತರು ಶಾಲೆಯ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದರು. ಇದಕ್ಕೂ ಮೊದಲು ಡಿಡಿಪಿಐ ಕಚೇರಿ ಮುಂದೆ ನಡೆದಿದ್ದ ಪ್ರತಿಭಟನೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ.ಭರತ್ ಶೆಟ್ಟಿ ಭಾಗವಹಿಸಿದ್ದರು.

ಶಾಲೆಯ ಆಡಳಿತ ಮಂಡಳಿಯು ಶಿಕ್ಷಕಿ ಪ್ರಭಾ ಅವರನ್ನು ಕರ್ತವ್ಯದಿಂದ ವಜಾಗೊಳಿಸಿತ್ತು. ಶಿಕ್ಷಕಿ ತಪ್ಪು ಮಾಡದಿದ್ದರೂ ಶಾಸಕರ ಒತ್ತಡದ ಮೇರೆಗೆ ಕ್ರಮ ಕೈಗೊಂಡಿದ್ದಾಗಿ ನಂತರ ಸ್ಪಷ್ಟನೆ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT