ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಎರಡನೇ ಅಲೆ: ಊರುಗಳತ್ತ ಹೊರಟ ಕಾರ್ಮಿಕರು

ಕರ್ಫ್ಯೂ ಜಾರಿ–ಕೆಲಸ ಕಳೆದುಕೊಳ್ಳುವ ಆತಂಕ
Last Updated 23 ಏಪ್ರಿಲ್ 2021, 4:46 IST
ಅಕ್ಷರ ಗಾತ್ರ

ಮಂಗಳೂರು: ಕೋವಿಡ್–19ನ ಎರಡನೇ ತಡೆಗಟ್ಟಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ಈ ಮಧ್ಯೆ ಕೆಲಸವಿಲ್ಲದೇ ಅತಂತ್ರರಾಗುವ ಆತಂಕಕ್ಕೆ ಒಳಗಾಗಿರುವ ವಲಸೆ ಕಾರ್ಮಿಕರು ಮತ್ತೆ ತಮ್ಮ ಊರುಗಳಿಗೆ ಮರಳುತ್ತಿದ್ದಾರೆ.

ಸಾರಿಗೆ ನೌಕರರ ಮುಷ್ಕರ ಅಂತ್ಯವಾಗಿದ್ದು, ಇದೀಗ ಬಸ್‌ಗಳು ಆರಂಭವಾಗಿವೆ. ರಾತ್ರಿ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಹಾಗೂ ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಉಳಿದೆಲ್ಲ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದ್ದು, ಇದರಿಂದ ಹಲವಾರು ಜನರು ಆತಂಕಕ್ಕೆ ಒಳಗಾಗಿದ್ದಾರೆ.

ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆ ಯಲ್ಲೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳ ಲಾಗುತ್ತಿದ್ದು, ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ವಾಪಸ್‌ ತೆರಳುತ್ತಿ ರುವುದು ಬುಧವಾರ ಕಂಡು ಬಂತು. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್ ಅವರು ಬುಧವಾರ ರಾತ್ರಿ ಕೆಎಸ್‌ಆರ್‌ಟಿಸಿ, ಕೆಪಿಟಿ, ನಂತೂರು ಮುಂತಾದ ಸ್ಥಳಗಳಿಗೆ ಭೇಟಿ ನೀಡಿದರು. ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಊರಿಗೆ ತೆರಳುತ್ತಿರುವ ಜನರ ಜೊತೆಗೆ ಜಿಲ್ಲಾಧಿಕಾರಿ ಮಾತುಕತೆ ನಡೆಸಿದರು.

ಈ ವೇಳೆ ಜಿಲ್ಲಾಧಿಕಾರಿ ಬಳಿ ಮಾತನಾಡಿದ ಗದಗದಿಂದ ಬಂದು ಬಜಾಲ್‌ನಲ್ಲಿ ವಾಸವಾಗಿದ್ದ ವಲಸೆ ಕಾರ್ಮಿಕರೊಬ್ಬರು, ‘ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಮಧ್ಯೆ ನಗರಕ್ಕಿಂತ ಹೆಚ್ಚಾಗಿ ನನ್ನ ಹಳ್ಳಿಯಲ್ಲಿ ಉಳಿಯುವುದೇ ಉತ್ತಮ ಆಯ್ಕೆ’ ಎಂದು ಹೇಳಿದರು.
‘ವಾಪಸ್‌ ಬರುವ ಯೋಜನೆ ಇದೆಯೇ’ ಎಂದು ಜಿಲ್ಲಾಧಿಕಾರಿ ಪ್ರಶ್ನಿಸಿದಾಗ, ‘ನಾನು ನನ್ನ ಹಳ್ಳಿಯಲ್ಲೇ ಜೀವನ ಸಾಗಿಸುತ್ತೇನೆ. ನಗರಕ್ಕೆ ವಾಪಸ್‌ ಬರುವುದಿಲ್ಲ ಎಂದು ಹೇಳಿದರು.

ಜಿಲ್ಲೆಯಲ್ಲಿ ಬಹುತೇಕ ನಿರ್ಮಾಣ ಕಾಮಗಾರಿಗಳು ವಲಸೆ ಕಾರ್ಮಿಕರನ್ನೇ ಅವಲಂಬಿಸಿದ್ದು, ಕಾರ್ಮಿಕರಲ್ಲದೇ ಕೆಲಸ ನಿಂತು ಹೋಗುವ ಆತಂಕ ನಿರ್ಮಾಣ ಉದ್ಯಮವನ್ನು ಕಾಡುತ್ತಿದೆ. ಈ ಮಧ್ಯೆ ವಲಸೆ ಕಾರ್ಮಿಕರು ತಮ್ಮ ಊರುಗಳತ್ತ ಮುಖ ಮಾಡಿರುವುದು ಅವರ ಆತಂಕವನ್ನು ಇನ್ನಷ್ಟು ಹೆಚ್ಚಿಸಿದೆ.

‘ಜಿಲ್ಲೆ ಬಿಟ್ಟು ತೆರಳಬೇಡಿ’
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ವಲಸೆ ಕಾರ್ಮಿಕರಿಗೆ ಯಾವುದೇ ತೊಂದರೆ ಆಗದಂತೆ, ಅವರ ದೈನಂದಿನ ಅಗತ್ಯಗಳನ್ನು ಪೂರೈಸಲು ಸಂಬಂಧಿಸಿದ ನಿರ್ಮಾಣ ಉದ್ಯಮಿಗಳು, ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ವಲಸೆ ಕಾರ್ಮಿಕರು ಆತಂಕಕ್ಕೆ ಒಳಗಾಗದೇ, ಜಿಲ್ಲೆಯಲ್ಲಿಯೇ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಮನವಿ ಮಾಡಿದ್ದಾರೆ.

ಗುರುವಾರ ಕ್ರೆಡೈ, ಸಿಐಐ, ಕೆನರಾ ಕೈಗಾರಿಕಾ ಸಂಘ, ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಜೊತೆಗೆ ಸಭೆ ನಡೆಸಲಾಗಿದೆ. ಕಟ್ಟಡ ನಿರ್ಮಾಣ ದಲ್ಲಿ ಕೆಲಸ ಮಾಡುತ್ತಿರುವ ವಲಸೆ ಕಾರ್ಮಿಕರಿಗೆ ದೈನಂದಿನ ಅಗತ್ಯಗಳಿಗೆ ಕೊರತೆ ಆಗದಂತೆ ಕ್ರಮ ವಹಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT