ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ನಿಷೇಧಾಜ್ಞೆ ಗೊಂದಲ

ಸಮಾರಂಭ ನಡೆಸುವಂತಿಲ್ಲ– ಡಿಸಿ: ನಿಯಮದೊಂದಿಗೆ ನಡೆಸಬಹುದು–ಕೋಟ
Last Updated 30 ಮಾರ್ಚ್ 2021, 15:26 IST
ಅಕ್ಷರ ಗಾತ್ರ

ಮಂಗಳೂರು: ಕೋವಿಡ್‌–19 ಎರಡನೇ ಅಲೆ ತಡೆಯಲು ಹಾಗೂ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದ ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 (3) ಸೆಕ್ಷನ್ ಜಾರಿ ಮಾಡಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಂತ ಮಾ. 29ರಿಂದಲೇ 144(3) ಸೆಕ್ಷನ್‌ ಅಡಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಮುಂದಿನ ಆದೇಶದವರೆಗೆ ಇದು ಮುಂದುವರಿಯಲಿದೆ. ಮುಂಬರುವ ಧಾರ್ಮಿಕ ಹಬ್ಬಗಳಾದ ಯುಗಾದಿ, ಹೋಳಿಹಬ್ಬ, ಶಬೇ ಬರಾಅತ್, ಗುಡ್ ಫ್ರೈಡೆ ಇತ್ಯಾದಿ ಸಂದರ್ಭದಲ್ಲಿ ಯಾವುದೇ ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನ, ಉದ್ಯಾನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳು ಇತ್ಯಾದಿ ಪ್ರದೇಶದಲ್ಲಿ ಸಾರ್ವಜನಿಕ ಸಮಾರಂಭ, ಸಭೆಗಳನ್ನು ನಡೆಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು, ಸುರಕ್ಷಿತ ಅಂತರ ಕಾಪಾಡುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳದಿರುವುದು ಕಡ್ಡಾಯವಾಗಿದೆ. ತಪ್ಪಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕು ಎಂದು ತಿಳಿಸಲಾಗಿದೆ.

ಈ ಆದೇಶವನ್ನು ಯಾವುದೇ ವ್ಯಕ್ತಿಗಳು ಉಲ್ಲಂಘಿಸಿದ್ದಲ್ಲಿ ಅಂಥವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮದ ಅಡಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಕೊಲ್ಲೂರು ರಥೋತ್ಸವಕ್ಕೆ ಭಕ್ತರ ನಿರ್ಬಂಧ

ಕೊಲ್ಲೂರು ಮೂಕಾಂಬಿಕಾ ದೇಗುಲದಲ್ಲಿ ವಾರ್ಷಿಕ ಮಹಾರಥೋತ್ಸವ ಏಪ್ರಿಲ್‌ 5ರಂದು ನಡೆಯಲಿದ್ದು, ಕೋವಿಡ್‌–19 ಎರಡನೇ ಅಲೆ ತಡೆಯುವ ನಿಟ್ಟಿನಲ್ಲಿ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಾರ್ಗಸೂಚಿಯಂತೆ ರಥೋತ್ಸವದಲ್ಲಿ ಜನದಟ್ಟಣೆ ತಡೆಯುವ ಉದ್ದೇಶದಿಂದ ಹಾಗೂ ಸರಳ ಉತ್ಸವ ಆಚರಣೆಗಾಗಿ ರಥೋತ್ಸದಂದು ಭಕ್ತರಿಗೆ ಪ್ರವೇಶ ನಿರ್ಬಂಧ ಮಾಡಲಾಗಿದೆ’ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ.

ಡಿಸಿ ಆದೇಶಕ್ಕೆ ಸಚಿವ ಕೋಟ ಸ್ಪಷ್ಟನೆ

ಕೋವಿಡ್–19 ನಿಯಂತ್ರಿಸಲು ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು, ಮರು ಸ್ಪಷ್ಟನೆ ನೀಡಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಈಗಾಗಲೇ ಹಮ್ಮಿಕೊಂಡಿರುವ ಯಕ್ಷಗಾನ, ಕೋಲ, ನೇಮ, ಪೂಜೆಗಳು ಮತ್ತು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳನ್ನು ಕೋವಿಡ್–19 ನಿಯಮ ಪಾಲನೆಯೊಂದಿಗೆ ನಡೆಸಬಹುದಾಗಿದೆ ಎಂದು ಹೇಳಿದ್ದಾರೆ.

ಬಯಲು, ಮೈದಾನದಲ್ಲಿ ಗರಿಷ್ಠ 500ಕ್ಕಿಂತ ಹೆಚ್ಚಿನ ಜನ ಸೇರುವಂತಿಲ್ಲ. ಕಡ್ಡಾಯವಾಗಿ ಮಾಸ್ಕ್‌ ಧಾರಣೆ, ಸುರಕ್ಷಿತ ಅಂತರ ಕಾಪಾಡುವುದು ಸಾರ್ವಜನಿಕರ ಜವಾಬ್ದಾರಿ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT