ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ನೀಡಿರುವುದು ಮಧ್ಯಂತರ ಪರಿಹಾರ-ಬಿಜೆಪಿ

ಉಸ್ತುವಾರಿ ಸಚಿವ ಕಚೇರಿ ಉದ್ಘಾಟಿಸಿದ ನಳಿನ್‌ಕುಮಾರ್‌ ಕಟೀಲ್‌
Last Updated 6 ಅಕ್ಟೋಬರ್ 2019, 14:12 IST
ಅಕ್ಷರ ಗಾತ್ರ

ಮಂಗಳೂರು: ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ನೆರೆ ಪರಿಹಾರ ಮಧ್ಯಂತರ ಎಂಬುದನ್ನು ಅರಿತು ಪ್ರತಿಪಕ್ಷಗಳು ಟೀಕೆ ಮಾಡಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್‌ಕುಮಾರ್‌ ಕಟೀಲ್‌ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎನ್‌ಡಿಆರ್‌ಎಫ್‌ ನಿಯಮಾವಳಿ ಪ್ರಕಾರ ಕೇಂದ್ರದಿಂದ ಮಧ್ಯಂತರ ಪರಿಹಾರ ನೀಡಲಾಗಿದೆ. ಇನ್ನೂ ಹೆಚ್ಚಿನ ಪರಿಹಾರಕ್ಕಾಗಿ ರಾಜ್ಯ ಸರ್ಕಾರಕ್ಕೆ ಕೇಂದ್ರಕ್ಕೆ ಮನವಿ ಮಾಡಲಿದೆ ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಟೀಕಿಸುತ್ತಿರುವ ಪ್ರತಿಪಕ್ಷಗಳ ನಾಯಕರು, 2004–2014 ಹಾಗೂ 2014–2019 ರವರೆಗೆ ಕೇಂದ್ರದಿಂದ ರಾಜ್ಯಕ್ಕೆ ಬಿಡುಗಡೆ ಮಾಡಿರುವ ಅನುದಾನವನ್ನು ಹೋಲಿಕೆ ಮಾಡಿ, ಮಾತನಾಡಲಿ ಎಂದು ಸವಾಲು ಹಾಕಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದ್ದು, ಇದಕ್ಕಾಗಿ ಈಗಾಗಲೇ ಹಲವು ಸಭೆಗಳನ್ನು ನಡೆಸಲಾಗಿದೆ. ಜನರ ಅಗತ್ಯ ಮೂಲಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಕೋಟ ಸಾಧನೆ ಅಪಾರ: ಕೋಟ ಶ್ರೀನಿವಾಸ ಪೂಜಾರಿ ಅವರು ಸಚಿವರಾಗಿ, ವಿಧಾನ ಪರಿಷತ್‌ ಪ್ರತಿಪಕ್ಷದ ನಾಯಕರಾಗಿ ಸಾಕಷ್ಟು ಅನುಭವ ಪಡೆದಿದ್ದಾರೆ. ಅದರ ಜತೆಗೆ ಕ್ಷೇತ್ರ ಮತ್ತು ರಾಜ್ಯದ ಅಭಿವೃದ್ಧಿಗಾಗಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ನಳಿನ್‌ಕುಮಾರ್ ಬಣ್ಣಿಸಿದರು.

ಪಂಚಾಯಿತಿ ಸದಸ್ಯರಿಗೆ ಪಿಂಚಣಿ ದೊರಕಿಸುವಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರು ಅಪಾರ ಶ್ರಮ ವಹಿಸಿದ್ದಾರೆ. ಈ ಹಿಂದೆ ಮುಜರಾಯಿ ಸಚಿವರಾಗಿದ್ದಾಗ, ರಾಜ್ಯದ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನ ಒದಗಿಸುವ ಮೂಲಕ ಹೊಸ ಶಕೆಯನ್ನು ಆರಂಭಿಸಿದ್ದಾರೆ. ಇಂತಹ ಅಪಾರ ಅನುಭವವುಳ್ಳ ಕೋಟ ಶ್ರೀನಿವಾಸ ಪೂಜಾರಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದು, ಜಿಲ್ಲೆ ಹಾಗೂ ರಾಜ್ಯದ ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಲಿದ್ದಾರೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಸಂಜೀವ ಮಠಂದೂರು, ಉಮಾನಾಥ ಕೋಟ್ಯಾನ್‌, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್‌, ಅನ್ವರ್ ಮಾಣಿಪ್ಪಾಡಿ, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಸುಲೋಚನಾ ಭಟ್‌, ಬಿಜೆಪಿ ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ, ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಜನಾರ್ದನ ಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT