ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಸತಿ ಯೋಜನೆಗಳ ಅನುದಾನಕ್ಕೆ ತಡೆ: ಸಚಿವ ವಿ.ಸೋಮಣ್ಣ ಹೇಳಿಕೆ

Last Updated 8 ಜನವರಿ 2020, 15:54 IST
ಅಕ್ಷರ ಗಾತ್ರ

ಮಂಗಳೂರು: ಹಿಂದಿನ ಸರ್ಕಾರಗಳ ಅವಧಿಯಲ್ಲಿ ವಸತಿ ಯೋಜನೆಗಳಲ್ಲಿ ಭಾರಿ ಅವ್ಯವಹಾರ ನಡೆದಿರುವುದು ಕಂಡುಬಂದಿದೆ. ಆದ್ದರಿಂದ ಈ ಅವಧಿಯಲ್ಲಿ ಮಂಜೂರಾದ ವಸತಿ ಯೋಜನೆಗಳ ಅನುದಾನ ಬಿಡುಗಡೆಗೆ ತಡೆ ನೀಡಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆಯಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು (ಸಿಇಒ) ಪರಿಶೀಲಿಸಿ, ಒಪ್ಪಿಗೆ ಸೂಚಿಸಿದ ಮನೆಗಳ ಫಲಾನುಭವಿಗಳಿಗೆ ಮಾತ್ರವೇ ಅನುದಾನ ಬಿಡುಗಡೆ ಮಾಡಲಾಗುವುದು’ ಎಂದರು.

ಹಿಂದಿನ ಐದಾರು ವರ್ಷಗಳಲ್ಲಿ ವಿವಿಧ ವಸತಿ ಯೋಜನೆಗಳಡಿಯಲ್ಲಿ 45 ಲಕ್ಷ ಮನೆಗಳನ್ನು ಹಂಚಿಕೆ ಮಾಡಲಾಗಿದೆ ಎಂಬುದು ದಾಖಲೆಗಳಲ್ಲಿದೆ. ಆದರೆ, ವಾಸ್ತವಿಕವಾಗಿ ಅಷ್ಟೊಂದು ಮನೆಗಳನ್ನು ನಿರ್ಮಿಸಲು ಸಾಧ್ಯವೇ ಎಂಬ ಅನುಮಾನದ ಮೇಲೆ ಪರಿಶೀಲನೆ ನಡೆಸಲಾಗಿದೆ. ವಸತಿ ಯೋಜನೆಗಳಲ್ಲಿ ದೊಡ್ಡ ಪ್ರಮಾಣದ ಅವ್ಯವಹಾರ ನಡೆದಿರುವುದು ಕಂಡುಬಂದಿದೆ ಎಂದು ಹೇಳಿದರು.

ಈ ಹಿಂದೆ ಹಂಚಿಕೆ ಮಾಡಲಾದ ಮನೆಗಳಿಗೆ ಸಂಬಂಧಿಸಿದಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಸ್ಥಳೀಯ ಶಾಸಕರು ಸೇರಿ ಪರಿಶೀಲನೆ ನಡೆಸಬೇಕು. ಅರ್ಹ ಫಲಾನುಭವಿಗಳನ್ನು ಗುರುತಿಸಿ ಪಟ್ಟಿ ಮಾಡಿ, ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಸಲ್ಲಿಸಬೇಕು. ಸಿಇಒ ಒಪ್ಪಿಗೆ ನೀಡಿದ ಮನೆಗಳಿಗೆ ಮಾತ್ರ ಅನುದಾನ ಬಿಡುಗಡೆ ಮಾಡಲಾಗುವುದು. ಮುಂದಿನ 15 ದಿನಗಳೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ ಎಂದರು.

₹ 2.50 ಲಕ್ಷಕ್ಕೆ ಬೇಡಿಕೆ:‘ಈಗ ವಸತಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ₹ 70,000 ಮತ್ತು ಕೇಂದ್ರ ಸರ್ಕಾರದಿಂದ ₹ 50,000 ಸೇರಿ ಒಟ್ಟು ₹ 1.20 ಲಕ್ಷ ಅನುದಾನ ನೀಡಲಾಗುತ್ತಿದೆ. ಇದರಿಂದ ಸುಸಜ್ಜಿತ ಮನೆ ಕಟ್ಟಲು ಆಗುತ್ತಿಲ್ಲ. ಆದ್ದರಿಂದ ಮುಂದಿನ ಆರ್ಥಿಕ ವರ್ಷದಿಂದ ಪ್ರತಿ ಮನೆಗೆ ₹ 2.50 ಲಕ್ಷ ಅನುದಾನ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಮಾಡುತ್ತೇನೆ’ ಎಂದರು.

ಮುಂದಿನ ದಿನಗಳಲ್ಲಿ ಸರ್ಕಾರಿ ವಸತಿ ಯೋಜನೆಗಳ ಅನುಷ್ಠಾನದ ಹೊಣೆಯನ್ನು ನಗರ ಪ್ರದೇಶದಲ್ಲಿ ಜಿಲ್ಲಾಧಿಕಾರಿಗೆ ಮತ್ತು ಗ್ರಾಮೀಣ ಪ್ರದೇಶದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ವಹಿಸಲಾಗುವುದು. ಸಂ‍ಪೂರ್ಣವಾಗಿ ಅವರೇ ಜವಾಬ್ದಾರರಾಗಿರುತ್ತಾರೆ. ಫಲಾನುಭವಿಗಳಿಗೆ ನಾಲ್ಕು ಕಂತುಗಳ ಬದಲಿಗೆ ಎರಡು ಕಂತುಗಳಲ್ಲಿ ಅನುದಾನ ಬಿಡುಗಡೆ ಮಾಡುವ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT