ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪರಿಷತ್ ಚುನಾವಣೆ: ಬಿಜೆಪಿ ಸಕಲ ಸಿದ್ಧತೆ’

Last Updated 7 ಡಿಸೆಂಬರ್ 2021, 16:41 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ವಕ್ತಾರ ಜಗದೀಶ್‌ ಶೇಣವ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಕ್ಷದ 5 ಸಾವಿರ ಮತದಾರರಿದ್ದು, ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ನೇತೃತ್ವದಲ್ಲಿ ಎಲ್ಲೆಡೆ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಕಳೆದ ಚುನಾವಣೆಯಲ್ಲಿ 250–300 ಮತಗಳು ಅಸಿಂಧು ಆಗಿದ್ದವು. ಈ ಬಾರಿ ಆ ರೀತಿ ಆಗದಂತೆ ಎಲ್ಲ ಎಚ್ಚರಿಕೆ ವಹಿಸಲಾಗಿದೆ. ಮತದಾರರಿಗೆ ಈ ಬಗ್ಗೆ ಜಾಗೃತಿ ಮೂಡಿಸಲಾಗಿದೆ ಎಂದ ಅವರು, ಬಿಜೆಪಿ ಮತಗಳ ಜೊತೆಗೆ ಬೇರೆ ಪಕ್ಷಗಳ ಶೇ 17 ರಷ್ಟು ಮತಗಳನ್ನು ನಮ್ಮ ಅಭ್ಯರ್ಥಿ ಪಡೆಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೋಟ ಶ್ರೀನಿವಾಸ ಪೂಜಾರಿ ಅವರು ಪಂಚಾಯತ್ ರಾಜ್ ವ್ಯವಸ್ಥೆಯ ಬಗ್ಗೆ ಸಂಪೂರ್ಣ ತಿಳಿದಿದ್ದು, ಪಂಚಾಯಿತಿ ಸದಸ್ಯರ ಸಮಸ್ಯೆಗಳ ಬಗ್ಗೆ ಅರಿವು ಹೊಂದಿದ್ದಾರೆ ಎಂದರು.

ಕಠಿಣ ಕ್ರಮ ಕೈಗೊಳ್ಳಿ: ಸಮಾಜದ ಸಾಮರಸ್ಯ ಹಾಳು ಮಾಡುವವರ ವಿರುದ್ದ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು. ಮುಂದೆ ಈ ರೀತಿಯ ಘಟನೆ ಮರುಕಳಿಸದಂತೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂಬುದು ನಮ್ಮ ನಿರೀಕ್ಷೆಯಾಗಿದೆ ಎಂದು ಜಗದೀಶ್‌ ಶೇಣವ ಹೇಳಿದರು.

ಕಾವೂರು ಗೋ ಕಳ್ಳತನ, ಗುಜ್ಜರಕೆರೆಯಲ್ಲಿ ವಿದ್ಯಾರ್ಥಿಗಳ ಘರ್ಷಣೆ, ನಾಗಬನ ಅಪವಿತ್ರ ಸೇರಿದಂತೆ ಜಿಲ್ಲೆಯಲ್ಲಿ ಹಲವು ಅಹಿತಕರ ಘಟನೆ ನಡೆಯುತ್ತಿವೆ. ಪೊಲೀಸರು ಎಲ್ಲ ಪ್ರಕರಣಗಳ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಪ್ರಕರಣದಲ್ಲಿ ಯಾರು ಭಾಗಿದ್ದಾರೆ ಎನ್ನುವ ಬಗ್ಗೆ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

ಉಪ್ಪಿನಂಗಡಿಯಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ನಡೆದ ಹಲ್ಲೆಯನ್ನು ಖಂಡಿಸುವುದಾಗಿ ಹೇಳಿದ ಅವರು, ಅಹಿತಕರ ಘಟನೆಗಳಲ್ಲಿ ಪ್ರತಿಪಕ್ಷಗಳು ರಾಜಕೀಯ ಪಿತೂರಿ ನಡೆಸಿರುವ ಶಂಕೆ ಇದೆ ಎಂದು ಆಪಾದಿಸಿದರು.

ಜಿಲ್ಲಾ ವಕ್ತಾರ, ಮುಡಾ ಅಧ್ಯಕ್ಷ ರವಿಶಂಕರ ಮಿಜಾರು, ಬಿಜೆಪಿ ನಗರ ದಕ್ಷಿಣ ಮಂಡಲದ ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT