ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಡ್ಡ ಕುಸಿತ: ಮುನ್ನೆಚ್ಚರಿಕೆ ಕ್ರಮ ವಹಿಸಿ

ಮುಂಗಾರು ಪೂರ್ವಸಿದ್ಧತೆ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್
Last Updated 21 ಮೇ 2022, 15:45 IST
ಅಕ್ಷರ ಗಾತ್ರ

ಮಂಗಳೂರು: ಮುಂದಿನ 10–15 ದಿನಗಳಲ್ಲಿ ಮುಂಗಾರು ರಾಜ್ಯವನ್ನು ಪ್ರವೇಶಿಸುವ ಹಿನ್ನೆಲೆಯಲ್ಲಿ ಜಿಲ್ಲೆಯ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಪೊನ್ನುರಾಜ್ ಸೂಚಿಸಿದರು.

ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮುಂಗಾರು ಪೂರ್ವಸಿದ್ಧತೆಗಳ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಈ ಬಾರಿ ಮುಂಗಾರು ಅವಧಿಗೆ ಮುನ್ನ ಪ್ರವೇಶಿಸುತ್ತಿದೆ. ಹೆಚ್ಚು ಮಳೆಯಾಗುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ರೀತಿಯ ಪ್ರಕೃತಿ ವಿಕೋಪ ಸಂಭವಿಸಿದರೂ, ಅದನ್ನು ಎದುರಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು ಎಂದರು.

ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಹಾಗೂ ಎಂಜಿನಿಯರಿಂಗ್ ಹಾಗೂ ಮೆಸ್ಕಾಂ ಇಲಾಖೆಯ ಸಿಬ್ಬಂದಿ ತಂಡ ಸಿದ್ಧವಿರಬೇಕು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಕೈಗೊಳ್ಳಲಾಗಿರುವ ಜಿಲ್ಲೆಯ ಹೆದ್ದಾರಿ ನಿರ್ಮಾಣದ ಸ್ಥಳಗಳಲ್ಲಿ ಬಸ್‌ಗಳು ಸೇರಿದಂತೆ ಯಾವುದೇ ಪ್ರಯಾಣಿಕ ಹಾಗೂ ಗೂಡ್ಸ್ ವಾಹನಗಳು ಅಪಘಾತಕ್ಕೀಡಾಗದಂತೆ ರಸ್ತೆ ಬದಿಗಳಲ್ಲಿ ನಾಮಫಲಕ ಹಾಗೂ ರಿಫ್ಲೆಕ್ಟರ್‌ಗಳನ್ನು ಅಳವಡಿಸಬೇಕು. ತಿರುವುಗಳಲ್ಲಿಯೂ ಈ ಕಾರ್ಯ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ ಅವರಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಮುಖ್ಯವಾಗಿ ಗುಡ್ಡ ಕುಸಿತ ಪ್ರಕರಣಗಳು ಸಂಭವಿಸುವ ಕಡೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಲ್ಲಿನ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕೆಲಸವಾಗಬೇಕು. ನಗರ ಸ್ಥಳೀಯ ಸಂಸ್ಥೆಗಳು, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಚರಂಡಿಗಳ ಹೂಳು ತೆಗೆಯಬೇಕು. ಜಲಾಶಯಗಳಲ್ಲಿ ಗೇಟ್‌ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಕಾಳಜಿ ಕೇಂದ್ರಗಳನ್ನು ಸ್ಥಾಪಿಸಲು ಸ್ಥಳಗಳನ್ನು ಪತ್ತೆ ಮಾಡಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಎಸ್ಪಿ ಋಷಿಕೇಶ್ ಭಗವಾನ್ ಸೋನಾವಣೆ, ಉಪ ವಿಭಾಗಾಧಿಕಾರಿ ಮದನ್ ಮೋಹನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT