ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪುಂಜಾಲಕಟ್ಟೆ – ಚಾರ್ಮಾಡಿ ಹೆದ್ದಾರಿ ಕಾಮಗಾರಿ ಮುಗೆರೋಡಿ ಕನ್‌ಸ್ಟ್ರಕ್ಷನ್‌ಗೆ

ಸುಗಮ ರಸ್ತೆ ನಿರ್ಮಾಣಕ್ಕೆ ಕ್ರಮ: ಸಂಸದ ಕ್ಯಾ.ಬ್ರಿಜೇಶ್ ಚೌಟ
Published : 12 ಆಗಸ್ಟ್ 2024, 5:12 IST
Last Updated : 12 ಆಗಸ್ಟ್ 2024, 5:12 IST
ಫಾಲೋ ಮಾಡಿ
Comments

ಬೆಳ್ತಂಗಡಿ/ಉಜಿರೆ: ‘ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ಸಾರ್ವಜನಿಕರಿಗೆ ಸಮಸ್ಯೆಯಾಗಿರುವ ವಿಷಯ ಗಮನಕ್ಕೆ ಬಂದಿದ್ದು, ಉತ್ತಮ ರಸ್ತೆ ನಿರ್ಮಿಸುವ ಸಂಬಂಧ ಈ ರಸ್ತೆಯ ಮುಂದಿನ ಕಾಮಗಾರಿಯನ್ನು ಗುತ್ತಿಗೆದಾರ ಮೊಗೆರೋಡಿ ಕನ್‌ಸ್ಟ್ರಕ್ಷನ್‌ನವರು ನಿರ್ವಹಿಸಲಿದ್ದಾರೆ’ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.

ಬೆಳ್ತಂಗಡಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರ ಹೆದ್ದಾರಿ ಅಭಿವೃದ್ಧಿಗೆ ಆದ್ಯತೆ ನೀಡಿ ಸಾಧನೆ ಮಾಡುತ್ತಿದೆ. ನಳಿನ್ ಕುಮಾರ್ ಕಟೀಲ್ ಸಂಸದರಾಗಿದ್ದಾಗ ಮಂಜೂರಾದ ಹೆದ್ದಾರಿ ಕಾಮಗಾರಿಗಳನ್ನು ಪೂರ್ಣಗೊಳಿಸುವುದು ನನ್ನ ಆದ್ಯತೆಯಾಗಿದೆ’ ಎಂದು ತಿಳಿಸಿದರು.

‘ಪುಂಜಾಲಕಟ್ಟೆ - ಚಾರ್ಮಾಡಿ ಹೆದ್ದಾರಿ ಕಾಮಗಾರಿಯನ್ನು ಡಿ.ಪಿ.ಜೈನ್ ವಹಿಸಿಕೊಂಡಿದ್ದು, ಹೆದ್ದಾರಿ ಕಾಮಗಾರಿಗೆ ಹಣ ಬಿಡುಗಡೆ ಆಗಿದೆ. ಆದರೆ, ಜಿಲ್ಲೆಯ ಹವಾಮಾನದ ಬಗ್ಗೆ ಮಾಹಿತಿ ಇಲ್ಲದೆ ಕಾಮಗಾರಿ ನಿರ್ವಹಿಸಿದ್ದರಿಂದ ಸಮಸ್ಯೆಯಾಗಿ ಬೆಳ್ತಂಗಡಿ ತಾಲ್ಲೂಕಿನ ಜನ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಬಗ್ಗೆ ಶಾಸಕ ಹರೀಶ್ ಪೂಂಜ, ನಾನು ಗುತ್ತಿಗೆದಾರರ ಜತೆಗೆ ಮಾತುಕತೆ ನಡೆಸಿದ್ದು, ಸಫಲವಾಗಲಿಲ್ಲ. ಇದಕ್ಕಾಗಿ ಗುತ್ತಿಗೆದಾರ ಡಿ.ಪಿ.ಜೈನ್, ಹೆದ್ದಾರಿ ಮುಖ್ಯ ಎಂಜಿನಿಯರ್ ಹಾಗೂ ಅಧಿಕಾರಿಗಳ ಜತೆ ಮಾತುಕತೆ ನಡೆಸಿ ಮುಂದಿನ ಹೆದ್ದಾರಿ ಕಾಮಗಾರಿಯನ್ನು ಮೊಗೆರೋಡಿ ಕನ್‌ಸ್ಟ್ರಕ್ಷನ್‌ನವರು ನಿರ್ವಹಿಸುವಂತೆ ನಿರ್ಧರಿಸಲಾಗಿದೆ. ಇದಕ್ಕೆ ಗುತ್ತಿಗೆದಾರ ಡಿ.ಪಿ.ಜೈನ್ ಒಪ್ಪಿಗೆ ನೀಡಿದ್ದಾರೆ’ ಎಂದು ವಿವರಿಸಿದರು.

‘ಪ್ರಥಮ ಹಂತದಲ್ಲಿ ಪುಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗಿನ ರಸ್ತೆಯ ಹೊಂಡ ಮುಚ್ಚಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುವುದು’ ಎಂದು ತಿಳಿಸಿದರು.

ಕಾಮಗಾರಿ ಆರಂಭ: ರಸ್ತೆಯ ಹೊಂಡಗಳನ್ನು ಮುಚ್ಚುವ ಕೆಲಸಕ್ಕೆ ಕಾಶಿಬೆಟ್ಟು ಬಳಿ ಚಾಲನೆ ನೀಡಲಾಯಿತು. 35 ಕಿ.ಮೀ. ವ್ಯಾಪ್ತಿಯ ಹೆದ್ದಾರಿಯಲ್ಲಿ ಸುಮಾರು 7 ಸ್ಥಳಗಳಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಮೊದಲ ಹಂತದಲ್ಲಿ ತಕ್ಷಣ ಈ ಸ್ಥಳಗಳಲ್ಲಿ ಕಾಮಗಾರಿ ನಡೆಯಲಿದೆ. ಇದರ ಬಳಿಕ ಇತರ ಕಾಮಗಾರಿಗಳು ಮುಂದುವರಿಯಲಿವೆ.

ಶಾಸಕ ಹರೀಶ್ ಪೂಂಜ ಮಾತನಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT