ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೀಟ್‌ನಿಂದ ಹೊರಬರಲು ಆಗ್ರಹಿಸಿ ನಿಲುವಳಿ ಸೂಚನೆ ಮಂಡನೆ: ಐವನ್

Published 29 ಜೂನ್ 2024, 12:26 IST
Last Updated 29 ಜೂನ್ 2024, 12:26 IST
ಅಕ್ಷರ ಗಾತ್ರ

ಮಂಗಳೂರು: ‘ಕೇಂದ್ರ ಸರ್ಕಾರ ನಡೆಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್‌) ಪರೀಕ್ಷೆ ವ್ಯವಸ್ಥೆಯಿಂದ ಹೊರಬಂದು, ರಾಜ್ಯ ಸರ್ಕಾರವೇ ಪ್ರತ್ಯೇಕ ಪ್ರವೇಶ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ನಿಲುವಳಿ ಸೂಚನೆ ಮಂಡಿಸುತ್ತೇನೆ’ ಎಂದು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜ ತಿಳಿಸಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು,‘ನೀಟ್‌ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ಸೀಟು ವಂಚಿತರಾಗಿರುವ ಕೆಲವು ಪ್ರತಿಭಾವಂತ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಷ್ಟೆಲ್ಲ ನಡೆದರೂ ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಅಸಹಾಯಕತೆಯನ್ನು ಪ್ರದರ್ಶಿಸಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿದೆ’ ಎಂದು ಟೀಕಿಸಿದರು.‌

‘ಈ ಹಗರಣದ ತನಿಖೆಯೂ ಸರಿಯಾಗಿ ನಡೆಯುತ್ತಿಲ್ಲ. ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೂ ಅವಕಾಶ ಕಲ್ಪಿಸುತ್ತಿಲ್ಲ. ಪರೀಕ್ಷೆಯ ಒಎಂಆರ್‌ ಶೀಟ್‌ಗಳನ್ನು ಬಹಿರಂಗಪಡಿಸುವಂತೆ ಕೇಳಿದರೂ ಸ್ಪಂದಿಸುತ್ತಿಲ್ಲ. ಎಂಜಿನಿಯರಿಂಗ್‌ ಅಥವಾ ವೈದ್ಯಕೀಯ ಕೋರ್ಸ್‌ಗಳಲ್ಲಿ ಯಾವುದನ್ನು ಆಯ್ಕೆ ಮಾಡಬೇಕು ಎಂದು ದಿಕ್ಕೇ ತೋಚದ ಸ್ಥಿತಿಯಲ್ಲಿ ವಿದ್ಯಾರ್ಥಿಗಳಿದ್ದಾರೆ’ ಎಂದು ದೂರಿದರು.

‘ಈ ಹಿಂದೆ ರಾಜ್ಯ ಸರ್ಕಾರಗಳೇ ಈ ಪ್ರವೇಶ ಪರೀಕ್ಷೆ ನಡೆಸುತ್ತಿದ್ದಾಗ ಇಂತಹ ಗೊಂದಲಗಳಿರಲಿಲ್ಲ. ಪಠ್ಯಕ್ರಮದಲ್ಲಿ ಇಲ್ಲದ ಪ್ರಶ್ನೆಗಳನ್ನು ನೀಟ್‌ನಲ್ಲಿ ಕೇಳಲಾಗುತ್ತಿತ್ತು. ಟ್ಯೂಟೋರಿಯಲ್‌ ನಡೆಸುವವರಿಗೆ ಅನುಕೂಲ ಕಲ್ಪಿಸಲಾಗುತ್ತಿದೆ ಎಂಬ ಆರೋಪಗಳೂ ಕೇಳಿಬಂದಿದ್ದವು. ತಮಿಳುನಾಡು ಹಾಗೂ ಕೇರಳ ಈ ವ್ಯವಸ್ಥೆಯಿಂದ ಹೊರಗೆ ಬರಲು ಮುಂದಾಗಿವೆ’ ಎಂದರು.

‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದಾಗುವ ಹಾನಿ ತಡೆಯುವ ಬಗ್ಗೆ ಜಿಲ್ಲಾಧಿಕಾರಿ ಹಾಗೂ ತಹಶಿಲ್ದಾರ್‌ಗಳ ಜೊತೆ ಚರ್ಚಿಸಿದ್ದೇನೆ. ಪ್ರಕೃತಿ ವಿಕೋಪ ಪರಿಹಾರ ನಿಧಿಯಲ್ಲಿ ₹ 17 ಕೋಟಿ ಲಭ್ಯವಿದೆ. ಪ್ರತಿ ತಾಲ್ಲೂಕಿಗೂ ತಲಾ ₹ 50 ಲಕ್ಷ ಅನುದಾನ ಹಂಚಿಕೆ ಮಾಡಲಾಗಿದೆ’ ಎಂದರು.

‘ವಿಕೋಪ ನಿರ್ವಹಣೆಗೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತಂಡ ರಚಿಸಿ, ಅದರ ಉಸ್ತುವಾರಿ ನೋಡಿಕೊಳ್ಳುವವರಿಗೆ ಹೆಚ್ಚಿನ ಅಧಿಕಾರ ನೀಡಬೇಕು. ಜಿಲ್ಲೆಯಲ್ಲಿ ವಿದ್ಯುತ್ ಸ್ಪರ್ಶದಿಂದ ಮೂರು ಜೀವಹಾನಿಯಾಗಿದ್ದು ಆಘಾತಕರ. ಈ ಬಗ್ಗೆ ಸಂಬಂಧಪಟ್ಟವರಿಗೆ ನೋಟಿಸ್ ನೀಡಿ ವಿವರಣೆ ಪಡೆಯುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ’ ಎಂದರು.

ಪಕ್ಷದ ಮುಖಂಡಾರದ ಭಾಸ್ಕರ ರಾವ್, ಅಲಿಸ್ಟರ್ ಡಿಕುನ್ಹ, ವಿಕಾಸ್ ಶೆಟ್ಟಿ ಹಾಗೂ ನಿತ್ಯಾನಂದ ಶೆಟ್ಟಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT