ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ಮೀನುಗಾರಿಕಾ ನೀತಿ ಕರಡು ಸಿದ್ಧ: ಕೋಟ ಶ್ರೀನಿವಾಸ ಪೂಜಾರಿ

ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ
Last Updated 27 ಜುಲೈ 2020, 15:11 IST
ಅಕ್ಷರ ಗಾತ್ರ

ಮಂಗಳೂರು: ರಾಜ್ಯದ ನೂತನ ಮೀನುಗಾರಿಕಾ ನೀತಿಯ ಕರಡು ಸಿದ್ಧವಾಗಿದ್ದು, ಶೀಘ್ರದಲ್ಲೇ ನೀತಿಯನ್ನು ಅಂತಿಮಗೊಳಿಸಿ ಸಚಿವ ಸಂಪುಟದ ಅನುಮೋದನೆ ಪಡೆಯಲಾಗುವುದು. ವಿಧಾನ ಮಂಡಲದ ಮುಂಬರುವ ಅಧಿವೇಶನದಲ್ಲಿ ಮಂಡಿಸಿ ಅಂಗೀಕಾರ ಪಡೆಯಲಾಗುವುದು ಎಂದು ಮೀನುಗಾರಿಕಾ ಸಚಿವರೂ ಆಗಿರುವ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರ ಒಂದು ವರ್ಷ ಪೂರೈಸಿರುವ ಪ್ರಯುಕ್ತ ಸೋಮವಾರ ವಿಧಾನಸೌಧದಲ್ಲಿ ನಡೆದ ಮುಖ್ಯಮಂತ್ರಿ ಜೊತೆಗಿನ ವಿಡಿಯೊ ಸಂವಾದ ಕಾರ್ಯಕ್ರಮದ ವೀಕ್ಷಣೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ನೇತ್ರಾವತಿ ಸಭಾಂಗಣದಲ್ಲಿ ಚಾಲನೆ ನೀಡಿದ ಬಳಿಕ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.

‘ಹೊಸ ಮೀನುಗಾರಿಕಾ ನೀತಿಯ ಕರಡು ಪ್ರತಿಯಲ್ಲಿರುವ ಅಂಶಗಳಿಗೆ ಸಂಬಂಧಿಸಿದಂತೆ ವಿವಿಧ ವಲಯಗಳಿಂದ ಈಗಾಗಲೇ ಆಕ್ಷೇಪಣೆ ಮತ್ತು ಸಲಹೆಗಳನ್ನು ಸ್ವೀಕರಿಸಲಾಗಿದೆ. ಅವುಗಳ ಆಧಾರದಲ್ಲಿ ನೀತಿಯನ್ನು ಅಂತಿಮಗೊಳಿಸುವ ಕೆಲಸ ನಡೆಯುತ್ತಿದೆ. ಮೀನುಗಾರಿಕೆಗೆ ಉತ್ತೇಜನ ನೀಡುವುದಕ್ಕೆ ಪೂರಕವಾಗಿ ನೀತಿ ಜಾರಿಯಾಗಲಿದೆ’ ಎಂದರು.

ಇದೇ 30ರಂದು ವಿಧಾನಸೌಧದಲ್ಲಿ ವಿಶ್ವ ಮೀನುಗಾರಿಕಾ ದಿನಾಚರಣೆಯನ್ನು ಆಯೋಜಿಸಲಾಗುವುದು. ಮೀನುಗಾರಿಕಾ ಇಲಾಖೆಯ ಸಾಧನೆಗಳಿಗೆ ಸಂಬಂಧಿಸಿದ ಪುಸ್ತಕವನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಕಟಿಸಿರುವ ‘ಆತ್ಮ ನಿರ್ಭರ್‌ ಭಾರತ’ ಯೋಜನೆಯಲ್ಲಿ ರಾಜ್ಯಕ್ಕೆ ಹಾಗೂ ಮೀನುಗಾರಿಕಾ ಕ್ಷೇತ್ರಕ್ಕೆ ದೊರೆಯಬಹುದಾದ ಅನುದಾನದ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ಮೀನುಗಾರಿಕಾ ಇಲಾಖೆಯ ಮುಂದಿನ ಕಾರ್ಯಯೋಜನೆಗಳ ಕುರಿತೂ ವಿಚಾರ ವಿನಿಮಯ ನಡೆಯಲಿದೆ ಎಂದು ಸಚಿವರು ತಿಳಿಸಿದರು.

ಕೋವಿಡ್‌ ಸೋಂಕು ನಿಯಂತ್ರಣದ ವಿಷಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಕೋವಿಡ್‌ ಸೋಂಕಿತರಿಗೆ ಖಾಸಗಿ ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಆರಂಭಿಸಿದ ಮೊದಲ ಜಿಲ್ಲೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಒಂದು ವರ್ಷದ ಅವಧಿಯಲ್ಲಿ ಜಿಲ್ಲೆಯಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರಿನ ಪೂರೈಕೆ, ಬಂದರು ಅಭಿವೃದ್ಧಿಯಂತಹ ಮಹತ್ವದ ಕೆಲಸಗಳು ನಡೆದಿವೆ. ಮೀನುಗಾರರಿಗೆ ಹೆಚ್ಚಿನ ನೆರವು ದೊರಕಿದೆ. ಕೃಷಿ ಸಮ್ಮಾನ್ ಯೋಜನೆಯಿಂದ ಜಿಲ್ಲೆಯ ರೈತರಿಗೆ ಅನುಕೂಲವಾಗಿದೆ ಎಂದರು.

ರಾಜ್ಯ ಸರ್ಕಾರದ ಒಂದು ವರ್ಷದ ಸಾಧನೆಗಳ ಸಮಗ್ರ ಮಾಹಿತಿಯುಳ್ಳ ಪುಸ್ತಕವನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಸಂದರ್ಭದಲ್ಲಿ ಬಿಡುಗಡೆ ಮಾಡಿದರು.

ಶಾಸಕ ಡಿ.ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆರ್‌.ಸೆಲ್ವಮಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಮಂಗಳೂರು ಉಪ ವಿಭಾಗಾಧಿಕಾರಿ ಮದನ್ ಮೋಹನ್ ಉಪಸ್ಥಿತರಿದ್ದರು.

ಮೀನಿನ ಚಿಪ್ಸ್‌ ಘಟಕ ಆರಂಭಕ್ಕೆ ನಿರ್ಧಾರ

‘ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮವು ಇತ್ತೀಚೆಗೆ ಬಿಡುಗಡೆ ಮಾಡಿರುವ ಮೀನಿನ ಚಿಪ್ಸ್‌ಗೆ ಭಾರಿ ಬೇಡಿಕೆ ವ್ಯಕ್ತವಾಗಿದೆ. ಬೇಡಿಕೆ ಇರುವಷ್ಟು ಪೂರೈಸಲು ಆಗುತ್ತಿಲ್ಲ. ಈ ಕಾರಣದಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೀನಿನ ಚಿಪ್ಸ್‌ ತಯಾರಿಕಾ ಘಟಕಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ’ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT