ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೊಕ್ಕೊಟ್ಟು, ಪಂಪ್‌ವೆಲ್‌ ಫ್ಲೈಓವರ್‌ ತ್ವರಿತಗೊಳಿಸಿ

ಫೆಬ್ರುವರಿಯಲ್ಲಿ ಹೆದ್ದಾರಿ ಕಾಮಗಾರಿ ಶಿಲಾನ್ಯಾಸ, ಉದ್ಘಾಟನೆ: ಗಡ್ಕರಿ
Last Updated 7 ಜನವರಿ 2019, 13:38 IST
ಅಕ್ಷರ ಗಾತ್ರ

ಮಂಗಳೂರು: ತಲಪಾಡಿ - ಕುಂದಾಪುರ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾಕಿ ಇರುವ ಕಾಮಗಾರಿ ಹಾಗೂ ತೊಕ್ಕೊಟ್ಟು ಮತ್ತು ಪಂಪ್‌ವೆಲ್ ಫ್ಲೈಓವರ್‌ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಫೆಬ್ರುವರಿ ಅಂತ್ಯದೊಳಗೆ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡುವಂತೆ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ, ನವಯುಗ ಸಂಸ್ಥೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಂಸದ ಶ್ರೀ ನಳಿನ್‌ಕುಮಾರ್ ಕಟೀಲ್ ಮನವಿಯ ಮೇರೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳ ಸಮಸ್ಯೆಗಳ ಕುರಿತು ಸೋಮವಾರ ನವದೆಹಲಿಯಲ್ಲಿ ಕರೆಯಲಾಗಿದ್ದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಬಿ.ಸಿ. ರೋಡ್‌ನಿಂದ ಅಡ್ಡಹೊಳೆವರೆಗಿನ ಚತುಷ್ಪಥ ಕಾಮಗಾರಿಯು ಎಲ್ ಆಂಡ್‌ ಟಿ ಕಂಪನಿಯಿಂದ ಮಂದಗತಿಯಲ್ಲಿ ನಡೆಯುತ್ತಿರುವ ಕುರಿತು ಮಾಹಿತಿ ಪಡೆದ ಅವರು, ಕಾನೂನು ಸಮಸ್ಯೆಗಳನ್ನು ಪರಿಹರಿಸಿ ತ್ವರಿತಗತಿಯಲ್ಲಿ ಕಾಮಗಾರಿ ಮುಂದುವರಿಸುವಂತೆ ಎಲ್‌ ಆಂಡ್ ಟಿ ಕಂಪನಿ ಹಾಗೂ ಎನ್‌ಎಚ್ಎಐ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕುಲಶೇಖರ – ಕಾರ್ಕಳ,ಬಿ.ಸಿ.ರೋಡ್ - ಕಟೀಲು – ಮೂಲ್ಕಿ ಹಾಗೂ ಮೇಲ್ಕಾರು - ಕೊಣಾಜೆ – ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆಗೆ ವೇಗ ನೀಡುವಂತೆ ರಾಜ್ಯದ ಅಧಿಕಾರಿಗಳಿಗೆ ಸೂಚಿಸಿದರು.

ಫೆಬ್ರುವರಿ ಅಂತ್ಯದೊಳಗೆ ಈ ಹೆದ್ದಾರಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ತಲಪಾಡಿ - ಕುಂದಾಪುರ ರಸ್ತೆಯ ಉದ್ಘಾಟನಾ ಸಮಾರಂಭದಲ್ಲಿ ಸ್ವತಃ ಭಾಗವಹಿಸುವುದಾಗಿ ಅಧಿಕಾರಿಗಳಿಗೆ ತಿಳಿಸಿದರು.

ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ, ಸಂಸದ ನಳಿನ್‌ಕುಮಾರ್ ಕಟೀಲ್ ಅವರು ಜಿಲ್ಲೆಯ ಸಮಸ್ಯೆಗಳನ್ನು ಸಚಿವರಿಗೆ ವಿವರಿಸಿದರು.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಅಲೋಕ್ ದೀಪಾಂಕರ, ಬೆಂಗಳೂರು ಪ್ರಾದೇಶಿಕ ಅಧಿಕಾರಿ ಆರ್.ಸಿ ಸೂರ್ಯವಂಶಿ, ಸಚಿವರ ಕಾರ್ಯದರ್ಶಿ ವೈಭವ್ ದಾಂಘೆ, ಇತರ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT