ಶನಿವಾರ, ಏಪ್ರಿಲ್ 1, 2023
32 °C

ಬೆಳ್ತಂಗಡಿ| ಬಹಿರಂಗ ಅಧಿವೇಶನ; 10 ನಿರ್ಣಯ ಮಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳ್ತಂಗಡಿ: ಉಜಿರೆಯ ಕೃಷ್ಣಾನು ಗ್ರಹ ಸಭಾಂಗಣದಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಬಹಿರಂಗ ಅಧಿವೇಶನದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಅಧ್ಯಕ್ಷತೆಯಲ್ಲಿ, ಸಮ್ಮೇಳನಾಧ್ಯಕ್ಷೆ ಡಾ. ಹೇಮಾವತಿ ಹೆಗ್ಗಡೆ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ರಾಜೇಶ್ವರಿ ಎಂ ಮತ್ತು ವಿನಯ ಆಚಾರ್ಯ, ತಾಲ್ಲೂಕು ಘಟಕಗಳ ಅಧ್ಯಕ್ಷರ ಉಪಸ್ಥಿತಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿಣಿ ಸದಸ್ಯ ಬಿ. ಐತಪ್ಪ ನಾಯ್ಕ 10 ಠರಾವುಗಳನ್ನು ಮಂಡಿಸಿದರು.

ನಿರ್ಣಯಗಳು: ಜಿಲ್ಲಾ ಸಾಹಿತ್ಯ ಪರಿಷತ್ ಭವನ ನಿರ್ಮಿಸಲು ನಿವೇಶನ ಮಂಜೂರು ಮಾಡಬೇಕು; ತಾಲ್ಲೂಕುಗಳಲ್ಲೂ ಭವನಕ್ಕೆ ನಿವೇಶನ ಮಂಜೂರು ಮಾಡಬೇಕು; ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ, ಕಟ್ಟಡ, ಪೀಠೋಪಕರಣ, ಪಾಠೋಪಕರಣಗಳ ಕೊರತೆ ಪರಿಹರಿಸಿ ಕಲಿಕೆಗೆ ವಾತಾವರಣ ಕಲ್ಪಿಸಬೇಕು; ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ನೇಮಕ ಮಾಡಬೇಕು; ಅನುದಾನರಹಿತ ಕನ್ನಡ ಮಾಧ್ಯಮ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಿ ಅಕ್ಷರ ದಾಸೋಹ ಅನುಕೂಲ ಕಲ್ಪಿಸಬೇಕು; ವಿವಿಧ ಯೋಜನೆಗಳಲ್ಲಿ ಬಿಡುಗಡೆಯಾಗುವ ವಿಶೇಷ ಅನುದಾನ ಶಾಲೆಗಳಿಗೆ ಏಕರೂಪದಲ್ಲಿ ವಿತರಿಸಬೇಕು; ಕನ್ನಡ ಮಾಧ್ಯಮ ಮತ್ತು ಆಂಗ್ಲಮಾಧ್ಯಮ ಶಾಲೆಗಳಿಗೆ ಪ್ರತ್ಯೇಕ ಪ್ರತಿಭಾ ಕಾರಂಜಿ ಸ್ಪರ್ಧೆ ನಡೆಸಬೇಕು; ಪದವಿಪೂರ್ವ ಶಿಕ್ಷಣದಲ್ಲಿ ಕನ್ನಡ ಐಚ್ಛಿಕ ವಿಷಯವನ್ನು ಅಧ್ಯಯನ ಮಾಡಲು ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಬೇಕು; ಪದವಿ ಶಿಕ್ಷಣದಲ್ಲಿ ಕನ್ನಡ ಐಚ್ಛಿಕವನ್ನು ಎಲ್ಲ ಕಾಲೇಜುಗಳಲ್ಲಿ ಅಧ್ಯಯನದ ಒಂದು ವಿಷಯವನ್ನಾಗಿ ಕಡ್ಡಾಯವಾಗಿ ಜಾರಿ ಮಾಡುವುದರ ಮೂಲಕ ಕನ್ನಡಕ್ಕೆ ಸ್ಥಾನಮಾನ ನೀಡಬೇಕು; ಕರ್ನಾಟಕದೊಳಗೆ ಪದವಿ ಶಿಕ್ಷಣದಲ್ಲಿ ಕನ್ನಡ ಐಚ್ಛಿಕ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಬೇಕು; ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಭೆಗೆ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರನ್ನು ಜಿಲ್ಲಾಡಳಿತ ಸಭೆಗೆ ಆಹ್ವಾನಿಸುವುದು ಮಾತ್ರವಲ್ಲದೆ ನಿಗಮ ಮಂಡಳಿಗಳ ಅಧ್ಯಕ್ಷರ ಸ್ಥಾನ ನೀಡಬೇಕು; ಜಿಲ್ಲಾ ಮಟ್ಟದ ರಾಜ್ಯೋತ್ಸವದ ಸಭೆಗಳಿಗೆ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಗಳ ಸಭೆಗಳಿಗೆ ಕಸಾಪ ಅಧ್ಯಕ್ಷರನ್ನು ಆಹ್ವಾನಿಸಬೇಕು ಎಂದು ಆಗ್ರಹಿಸಲಾಯಿತು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ನಿರ್ವಾಹಕ ನಿರ್ದೇಶಕ ಎಲ್. ಎಚ್. ಮಂಜುನಾಥ್ ‘ಸಾಹಿತ್ಯ ಸಮ್ಮೇಳನಗಳಿಗೆ ಸ್ಥಳೀಯ ಶಾಲಾ ಕಾಲೇಜಿನ ಮಕ್ಕಳಿಗೆ ಸರ್ಕಾರ ಅವಕಾಶ ಮಾಡಿಕೊಡಬೇಕು ಎಂದು ನಿರ್ಣಯ ಮಾಡಬೇಕು ಎಂದು ಕೇಳಿಕೊಂಡಾಗ ಬಹಿರಂಗ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದ ಡಾ. ಎಂ.ಪಿ.ಶ್ರೀನಾಥ್ ಅದನ್ನು ನಿರ್ಣಯದಲ್ಲಿ ಸೇರಿಸಲಾಗುವುದು ಎಂದರು. ಜಿಲ್ಲಾ ಕಸಾಪ ಕಾರ್ಯಕಾರಿಣಿ ಸದಸ್ಯ ಮೋಹನದಾಸ ಸುರತ್ಕಲ್ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು