ಬುಧವಾರ, ಜೂನ್ 29, 2022
25 °C
ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಪೌರ ಕಾರ್ಮಿಕರ ಧರಣಿ 19ಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ‘ಎಲ್ಲ ಪೌರ ಕಾರ್ಮಿಕರನ್ನು ಕಾಯಂಗೊಳಿಸಬೇಕು ಎಂದು ಒತ್ತಾಯಿಸಿ, ಜಿಲ್ಲಾ ಪೌರಕಾರ್ಮಿಕರ ಮತ್ತು ನಾಲ್ಕನೇ ದರ್ಜೆ ನೌಕರರ ಸಂಘದ ವತಿಯಿಂದ ಮೇ 19ರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಅಂದು ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಲಿದ್ದು, ‘ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಪೌರ ಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಿ 2017–18ರಲ್ಲಿ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಎಲ್ಲರನ್ನೂ ಕಾಯಂಗೊಳಿಸಿ ಸರ್ಕಾರ ಆದೇಶಿಸಿದ್ದರೂ, ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆಯಿಂದ ಇನ್ನೂ ಬಹುತೇಕ ಕಾರ್ಮಿಕರು ಗುತ್ತಿಗೆ ಪದ್ಧತಿಯಡಿ ದುಡಿಯುವಂತಾಗಿದೆ’ ಎಂದರು.

ಜಿಲ್ಲೆಯಲ್ಲಿ ಇನ್ನೂ 100ಕ್ಕೂ ಹೆಚ್ಚು ಪೌರ ಕಾರ್ಮಿಕರು ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿದ್ದಾರೆ. ಮೇ 19ರಂದು ಸಾಂಕೇತಿಕ ಮುಷ್ಕರ ಮಾಡಿ, ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುವುದು. ಒಂದು ತಿಂಗಳೊಳಗೆ ಸಮಸ್ಯೆ ಬಗೆಹರಿಯದಿದ್ದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲು ಯೋಚಿಸಲಾಗಿದೆ ಎಂದು ಹೇಳಿದರು.

ಪ್ರಧಾನ ಕಾರ್ಯದರ್ಶಿ ಎಸ್.ಪಿ.ಆನಂದ ಮಾತನಾಡಿ, ‘ಎನ್‌ಪಿಎಸ್ ರದ್ದುಗೊಳಿಸಿ, ಈ ಹಿಂದಿನ ಪಿಂಚಣಿ ಜಾರಿಗೆ ತರಬೇಕು. ಪೌರ ಕಾರ್ಮಿಕರಿಗೆ ವೈಯಕ್ತಿಕ ₹ 5 ಲಕ್ಷದವರೆಗೆ ಆರೋಗ್ಯ ಭದ್ರತೆ ನೀಡಬೇಕು. ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಪ್ರತ್ಯೇಕ ನಿಧಿ ಮೀಸಲಿಡಬೇಕು. ಮನೆ ನಿರ್ಮಾಣಕ್ಕೆ ನೀಡುವ ಸಹಾಯಧನವನ್ನು ₹ 15 ಲಕ್ಷಕ್ಕೆ ಏರಿಸಬೇಕು. ವಾರ್ಡ್‌ ಕಚೇರಿಗಳಲ್ಲಿ ಪೌರ ಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ ನಿರ್ಮಿಸಬೇಕು’ ಎಂದು ಆಗ್ರಹಿಸಿದರು. ಕಾರ್ಯಕಾರಿ ಸಮಿತಿ ಸದಸ್ಯರಾದ ದಯಾನಂದ, ಸುರೇಶ್ ಉರ್ವ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು