ಶನಿವಾರ, ಅಕ್ಟೋಬರ್ 1, 2022
25 °C
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳು ಪೊಲೀಸ್ ಕಸ್ಟಡಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸುಳ್ಯ: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಬೆಳ್ಳಾರೆಗೆ ಕರೆತಂದು ಸ್ಥಳ ಮಹಜರು ನಡೆಸಲಾಯಿತು. 

ಗುರುವಾರ ಬಂಧಿತರಾದ ಪ್ರಮುಖ ಆರೋಪಿಗಳಾದ ಶಿಯಾಬುದ್ದೀನ್, ರಿಯಾಝ್ ಹಾಗು ಬಶೀರ್ ಎಂಬುವರನ್ನು ಕರೆತಂದು, ಬೆಳ್ಳಾರೆಯಲ್ಲಿ ಹತ್ಯೆ ನಡೆದ ಸ್ಥಳ ಮತ್ತಿತರ ತನಿಖೆ ಪೂರಕ ಸ್ಥಳಗಳಿಗೆ ಕರೆದೊಯ್ಯಲಾಯಿತು. ಸ್ಥಳದಲ್ಲಿ ಬಿಗು ಪೊಲೀಸ್ ಬಂದೋಬಸ್ತ್‌ ಏರ್ಪಡಿಸಲಾಗಿತ್ತು. ಸುಳ್ಯ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಆ.16ರವರೆಗೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿದೆ.

ಧನ್ಯವಾದ: ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಕ್ಕಾಗಿ ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರು ಪೊಲೀಸರನ್ನು ಅಭಿನಂದಿಸಿದ್ದಾರೆ.

‘ಗಲ್ಲು ಶಿಕ್ಷೆ ಆಗಲಿ’

ಸುಬ್ರಹ್ಮಣ್ಯ: ಬೆಳ್ಳಾರೆಯಲ್ಲಿ ನಡೆದ ಹತ್ಯೆ ಪ್ರಕರಣದ ನೈಜ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿದ ಪೋಲೀಸ್ ಇಲಾಖೆ ಕಾರ್ಯ ಶ್ಲಾಘನೀಯ ಎಂದು ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ವೆಂಕಟ್ ವಳಲಂಬೆ ಹೇಳಿದರು.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೈಜ ಆರೋಪಿಗಳನ್ನು ಬಂಧಿಸಲು ಕಾರ್ಯಪ್ರವೃತ್ತರಾಗಿ ಸಫಲರಾದ ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಾಣೆ ಮತ್ತು ಜಿಲ್ಲಾಡಳಿತಕ್ಕೆ ಅಭಿನಂದನೆಗಳು. ನಿಷ್ಠಾವಂತ ಕಾರ್ಯಕರ್ತನಾಗಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಹಿಂದೂ ಬಂಧುಗಳಲ್ಲಿ ಆತಂಕ ತಂದೊಡ್ಡಿತ್ತು ಎಂದರು.

ಆರೋಪಿಗಳಿಗೆ ಜೀವಾವಧಿ ಶಿಕ್ಷೆಯೊಂದಿಗೆ ಗಲ್ಲು ಶಿಕ್ಷೆ ಆಗಬೇಕು. ಎಸ್‌ಡಿಪಿಐ ಮೊದಲಾದ ಸಂಘಟನೆಗಳನ್ನು ನಿರ್ಬಂಧಿಸಬೇಕು. ಜಿಹಾದಿ ಶಕ್ತಿಗಳನ್ನು ಗುರುತಿಸಿ ಪೋಲೀಸ್ ಇಲಾಖೆ ಮಟ್ಟ ಹಾಕಬೇಕು. ಹಿಂದೂ ಸಂಘಟನೆ ಶಾಂತಿ, ನೆಮ್ಮದಿಗೆ ಪ್ರಾಶಸ್ತ್ಯ ನೀಡುತ್ತದೆ. ಮುಂದೆ ಇಂತಹ ಘಟನೆಗಳು ನಡೆಯಬಾರದು ಎಂದು ಹೇಳಿದರು.

ಬಿಜೆಪಿ ಸುಳ್ಯ ಮಂಡಲ ಕಾರ್ಯದರ್ಶಿ ಸುಬ್ರಹ್ಮಣ್ಯ ಕುಳ, ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಿವಪ್ರಸಾದ್ ನಡುತೋಟ, ಪ್ರಮುಖರಾದ ರಾಜೇಶ್ ಎನ್.ಎಸ್, ದಿನೇಶ್ ಸಂಪ್ಯಾಡಿ, ಚಿದಾನಂದ ಕಂದಡ್ಕ, ಅಚ್ಚುತ ಗೌಡ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು