ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ನಗರದಲ್ಲಿ ರಾಷ್ಟ್ರಪತಿ ವಾಸ್ತವ್ಯ 7ಕ್ಕೆ

ಅಚ್ಚುಕಟ್ಟಿನ ಅಂತಿಮ ಹಂತದ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ
Last Updated 6 ಅಕ್ಟೋಬರ್ 2021, 4:22 IST
ಅಕ್ಷರ ಗಾತ್ರ

ಮಂಗಳೂರು: ರಾಜ್ಯ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಶೃಂಗೇರಿಯ ಶಾರದಾ ಪೀಠಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ, ಮಂಗಳೂರಿನಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಈ ಪ್ರಯುಕ್ತ ಎಲ್ಲ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅಧಿಕಾರಿಗಳಿಗೆ ಸೂಚಿಸಿದರು.

ಮಂಗಳವಾರ ಇಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ರಾಷ್ಟ್ರಪತಿ ಅ.7ರಂದು ನಗರಕ್ಕೆ ಬಂದು ವಾಸ್ತವ್ಯ ಮಾಡುವರು. ಅ. 8ರ ಸಂಜೆ ಮಂಗಳೂರಿನಿಂದ ನವದೆಹಲಿಗೆ ತೆರಳುವರು. ಈ ಸಂದರ್ಭದಲ್ಲಿ ವಸತಿ, ಊಟೋಪಚಾರ ಹಾಗೂ ಬಂದೋಬಸ್ತ್‌ಗೆ ಸಂಬಂಧಿಸಿದ ಎಲ್ಲ ವ್ಯವಸ್ಥೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದರು.

ರಾಷ್ಟ್ರದ ಪ್ರಥಮ ಪ್ರಜೆಯ ವಾಸ್ತವ್ಯಕ್ಕೆ ಸಂಬಂಧಿಸಿ ಸಣ್ಣ ಲೋಪವೂ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ರಾಷ್ಟ್ರಪತಿ ವಾಸ್ತವ್ಯ ಮಾಡುವ ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಬರುವ ಅತಿಥಿ ಗೃಹ ಸಂಪೂರ್ಣ ಸಿಂಗಾರಗೊಳ್ಳಬೇಕು. ಅಂತಿಮ ಹಂತದ ಸಿದ್ಧತೆ ಪರಿಪೂರ್ಣವಾಗಿರಬೇಕು. ಸ್ಪಚ್ಛತೆಗೆ ಹೆಚ್ಚಿನ ಮಹತ್ವ ನೀಡಬೇಕು. ಮಹಾನಗರ ಪಾಲಿಕೆ ವತಿಯಿಂದ ಅತಿಥಿ ಗೃಹದ ಆಸುಪಾಸಿನಲ್ಲಿ ಸ್ವಚ್ಛತಾ ಕಾರ್ಯ ನಡೆಸಬೇಕು. ವಿಮಾನ ನಿಲ್ದಾಣದಿಂದ ಅತಿಥಿ ಗೃಹಕ್ಕೆ ಬರುವ ರಸ್ತೆಗಳಲ್ಲಿ ನ್ಯೂನತೆಗಳಿದ್ದಲ್ಲಿ ದುರಸ್ತಿಪಡಿಸಿಕೊಳ್ಳಬೇಕು ಎಂದು ಹೇಳಿದರು.

ರಾಷ್ಟ್ರಪತಿಗಳ ಪ್ರವಾಸದಲ್ಲಿ ರಾಜ್ಯಪಾಲರು ಕೂಡ ಭಾಗವಹಿಸುತ್ತಿದ್ದಾರೆ. ಅವರ ವಾಸ್ತವ್ಯಕ್ಕೂ ಕಾಳಜಿ ನೀಡಬೇಕು ಸಂಬಂಧಿಸಿದ ಅಧಿಕಾರಿಗಳು ಜಾಗೃತರಾಗಿರಬೇಕು ಎಂದರು.

ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾತನಾಡಿ, ‘ರಾಷ್ಟ್ರಪತಿ ಪ್ರವಾಸ ಕಾರ್ಯಕ್ರಮದಲ್ಲಿ ಬಿಗಿ ಭದ್ರತೆ ಒದಗಿಸಲಾಗುತ್ತಿದೆ. ಈ ವೇಳೆ ಅಧಿಕಾರಿಗಳು ಸೇರಿದಂತೆ ಎಲ್ಲರನ್ನೂ ತಪಾಸಣೆಗೆ ಒಳಪಡಿಸಲಾಗುವುದು. ರಾಷ್ಟ್ರಪತಿಗಳ ಕರ್ತವ್ಯಕ್ಕೆ ನಿಯೋಜಿಸಿದ ಅಧಿಕಾರಿಗಳು ಪೊಲೀಸರೊಂದಿಗೆ ಸಹಕರಿಸಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಪ್ರಭಾರಿ ಹೆಚ್ಚುವರಿ ಜಿಲ್ಲಾಧಿಕಾರಿ ಮಾಣಿಕ್ಯ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಯಶವಂತ್, ಸಹಾಯಕ ಕಮಾಂಡರ್ ಸಾಮ್ರಾಟ್, ಮಂಗಳೂರು ವಿಮಾನ ನಿಲ್ದಾಣದ ಅಧಿಕಾರಿ ಶ್ರೀಕಾಂತ್ ಟಾಟಾ, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಇದ್ದರು.

‘ಆರ್‌ಟಿಪಿಸಿಆರ್ ತಪಾಸಣೆ ಕಡ್ಡಾಯ’

ರಾಷ್ಟ್ರಪತಿಗಳ ವಾಸ್ತವ್ಯದ ವೇಳೆ ನಿಯೋಜಿಸಲಾಗಿರುವ ಸಿಬ್ಬಂದಿಗೆ ಕಡ್ಡಾಯವಾಗಿ ಆರ್‌ಟಿಪಿಸಿಆರ್ ತಪಾಸಣೆ ಆಗಬೇಕು. ಆದ್ಯತೆ ಮೇರೆಗೆ ಅವರ ವರದಿಗಳನ್ನು ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಸೂಚಿಸಿದರು.

‘ಮೆಸ್ಕಾಂನಿಂದ ವಿದ್ಯುತ್ ಕಡಿತ ಆಗಬಾರದು. ಬಿಎಸ್‍ಎನ್‍ಎಲ್‍ನಿಂದ ಹಾಟ್‍ಲೈನ್ ಎಳೆಯುವುದನ್ನು ಕೂಡಲೇ ಪೂರ್ಣಗೊಳಿಸಬೇಕು. ಕರ್ತವ್ಯಕ್ಕೆ ನಿಯೋಜಿಸಿರುವ ಲೈಸನಿಂಗ್ ಅಧಿಕಾರಿಗಳು ಶಿಷ್ಟಾಚಾರದಂತೆ ವರ್ತಿಸಬೇಕು’ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT